Add parallel Print Page Options

ಔತಣಕೂಟದ ಸಾಮ್ಯ

(ಮತ್ತಾಯ 22:1-10)

15 ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.

16 ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬನು ಒಂದು ದೊಡ್ಡ ಔತಣವನ್ನು ಮಾಡಿಸಿ ಅನೇಕ ಜನರನ್ನು ಆಮಂತ್ರಿಸಿದನು. 17 ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು. 18 ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು. 19 ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು. 20 ಮೂರನೆಯವನು, ‘ನಾನು ಇದೀಗ ಮದುವೆಯಾಗಿದ್ದೇನೆ, ನಾನು ಬರಲಾರೆ’ ಎಂದನು.

21 “ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.

22 “ತರುವಾಯ ಆ ಸೇವಕನು ಬಂದು, ‘ಸ್ವಾಮೀ, ನೀನು ಹೇಳಿದಂತೆಯೇ ಮಾಡಿದೆನು. ಆದರೆ ನಮ್ಮಲ್ಲಿ ಇನ್ನೂ ಹೆಚ್ಚು ಜನರಿಗೆ ಸ್ಥಳವಿದೆ.’ ಎಂದು ಹೇಳಿದನು. 23 ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ. 24 ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!’ ಎಂದು ಹೇಳಿದನು.”

Read full chapter