ಲೂಕ 20:20-26
Kannada Holy Bible: Easy-to-Read Version
ಯೇಸುವನ್ನು ಮೋಸಗೊಳಿಸಲು ಯೆಹೂದ್ಯ ನಾಯಕರ ಪ್ರಯತ್ನ
(ಮತ್ತಾಯ 22:15-22; ಮಾರ್ಕ 12:13-17)
20 ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.) 21 ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ! 22 ಈಗ ಹೇಳು, ನಾವು ಸೀಸರನಿಗೆ[a] ತೆರಿಗೆ ಕೊಡುವುದು ಸರಿಯೋ? ತಪ್ಪೋ?” ಎಂದು ಕೇಳಿದರು.
23 ಆದರೆ ಈ ಜನರು ತನಗೆ ಮೋಸಮಾಡಲು ಪ್ರಯತ್ನಿಸುತ್ತಿದ್ದಾರೆಂದು ಯೇಸುವಿಗೆ ತಿಳಿದಿತ್ತು. 24 ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು.
ಅವರು, “ಸೀಸರನದು” ಎಂದು ಹೇಳಿದರು.
25 ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.
26 ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.
Read full chapterFootnotes
- 20:22 ಸೀಸರ ರೋಮಿನ ಚಕ್ರವರ್ತಿಗೆ ಕೊಡಲ್ಪಟ್ಟ ಹೆಸರು.
Kannada Holy Bible: Easy-to-Read Version. All rights reserved. © 1997 Bible League International