Add parallel Print Page Options

ಯಾಕೋಬ ಮತ್ತು ಯೋಹಾನರ ವಿಶೇಷ ಕೋರಿಕೆ

(ಮತ್ತಾಯ 20:20-28)

35 ನಂತರ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮ ಒಂದು ಕೋರಿಕೆಯನ್ನು ನೀನು ನಡೆಸಿಕೊಡಬೇಕು” ಎಂದರು.

36 ಯೇಸು, “ನಿಮ್ಮ ಯಾವ ಕೋರಿಕೆಯನ್ನು ನಡೆಸಿಕೊಡಬೇಕು?” ಎಂದು ಕೇಳಿದನು.

37 ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು.

38 ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.

39 ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು.

ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ. 40 ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಆ ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು.

41 ಉಳಿದ ಹತ್ತು ಜನ ಶಿಷ್ಯರು ಇದನ್ನು ಕೇಳಿ ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು. 42 ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ. 43 ಆದರೆ ನೀವು ಅವರಂತಾಗಬಾರದು. 44 ನಿಮ್ಮಲ್ಲಿ ಪ್ರಮುಖನಾಗಬೇಕೆಂದು ಬಯಸುವವನು ಸೇವಕನಂತೆ ಮತ್ತು ಗುಲಾಮನಂತೆ ನಿಮ್ಮೆಲ್ಲರ ಸೇವೆಮಾಡಬೇಕು. 45 ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.

Read full chapter