ಮಾರ್ಕ 12:1-12
Kannada Holy Bible: Easy-to-Read Version
ದೇವರ ಮಗನ ಆಗಮನ
(ಮತ್ತಾಯ 21:33-46; ಲೂಕ 20:9-19)
12 ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.
2 “ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು. 3 ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು. 4 ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು. 5 ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
6 “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
7 “ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ಈ ದ್ರಾಕ್ಷಿತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು, 8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.
9 “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ. 10 ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’(A)”
12 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.
Read full chapterKannada Holy Bible: Easy-to-Read Version. All rights reserved. © 1997 Bible League International