ಮಾರ್ಕ 2:1-12
Kannada Holy Bible: Easy-to-Read Version
ಪಾರ್ಶ್ವವಾಯುರೋಗಿಗೆ ಸ್ವಸ್ಥತೆ
(ಮತ್ತಾಯ 9:1-8; ಲೂಕ 5:17-26)
2 ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು. 2 ಜನರು ಗುಂಪುಗುಂಪಾಗಿ ಯೇಸುವಿನ ಉಪದೇಶವನ್ನು ಕೇಳಲು ಒಟ್ಟುಗೂಡಿದರು. ಮನೆಯು ತುಂಬಿಹೋಯಿತು. ಅಲ್ಲಿ ನಿಲ್ಲಲು ಹೊರಗಡೆಯಲ್ಲಿಯೂ ಸ್ಥಳವಿರಲಿಲ್ಲ. ಯೇಸು ಉಪದೇಶಿಸುತ್ತಿದ್ದನು. 3 ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು. 4 ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು. 5 ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
6 ಕೆಲವು ಮಂದಿ ಧರ್ಮೋಪದೇಶಕರು ಅಲ್ಲಿ ಕುಳಿತಿದ್ದರು. ಯೇಸು ಹೇಳಿದ್ದನ್ನು ಕೇಳಿದ ಅವರು, 7 “ಇವನು ಹೀಗೇಕೆ ಹೇಳುತ್ತಿದ್ದಾನೆ? ಇದು ದೇವದೂಷಣೆ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಲು ಸಾಧ್ಯ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.
8 ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ? 9 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ? 10 ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರವಿದೆ ಎಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿದನು. ಬಳಿಕ ಯೇಸು ರೋಗಿಗೆ, 11 “ನಾನು ನಿನಗೆ ಹೇಳುತ್ತಿದ್ದೇನೆ, ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.
12 ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.
Read full chapterKannada Holy Bible: Easy-to-Read Version. All rights reserved. © 1997 Bible League International