Add parallel Print Page Options

ಯೆಹೂದ್ಯಳಲ್ಲದ ಸ್ತ್ರೀಗೆ ಯೇಸುವಿನ ಸಹಾಯ

(ಮತ್ತಾಯ 15:21-28)

24 ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ. 25 ಯೇಸು ಅಲ್ಲಿರುವನೆಂಬುದು ಒಬ್ಬ ಸ್ತ್ರೀಗೆ ತಿಳಿಯಿತು. ಅವಳ ಕಿರಿಯ ಮಗಳಿಗೆ ದೆವ್ವ ಹಿಡಿದಿತ್ತು. ಆದ್ದರಿಂದ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು, ಆತನ ಪಾದಗಳ ಮುಂದೆ ಅಡ್ಡಬಿದ್ದು ನಮಸ್ಕರಿಸಿದಳು. 26 ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.

27 ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು.

28 ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು.

29 ಆಗ ಯೇಸು ಆ ಸ್ತ್ರೀಗೆ, “ನೀನು ಒಳ್ಳೆಯ ಉತ್ತರ ಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ” ಎಂದು ಹೇಳಿದನು.

30 ಆ ಸ್ತ್ರೀಯು ಮನೆಗೆ ಹೋದಾಗ ತನ್ನ ಮಗಳು ಹಾಸಿಗೆಯಲ್ಲಿ ಮಲಗಿರುವುದನ್ನು ಕಂಡಳು. ದೆವ್ವವು ಅವಳನ್ನು ಬಿಟ್ಟುಹೋಗಿತ್ತು.

Read full chapter