Add parallel Print Page Options

ಯೆಹೂದ್ಯ ನಾಯಕರ ಬಗ್ಗೆ ಯೇಸು ನೀಡಿದ ಎಚ್ಚರಿಕೆ

(ಮತ್ತಾಯ 16:5-12)

14 ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ. 15 ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು.

16 ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

17 ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ? 18 ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ. 19 ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು.

ಆ ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.

20 “ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು.

ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.

21 ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು.

Read full chapter