Add parallel Print Page Options

ಯೇಸು ಕ್ರಿಸ್ತನ ಜನನ

(ಲೂಕ 2:1-7)

18 ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು. 19 ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.

20 ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ. 21 ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.

22 ಪ್ರವಾದಿಯ ಮೂಲಕ ಪ್ರಭು ತಿಳಿಸಿದ್ದೆಲ್ಲ ನೆರವೇರುವಂತೆ ಇದೆಲ್ಲಾ ನಡೆಯಿತು. 23 ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.”(A) (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)

24 ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು. 25 ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.

Read full chapter