Beginning
ಯೇಸು ತನ್ನ ಶಿಷ್ಯರ ಪಾದಗಳನ್ನು ತೊಳೆಯುವನು
13 ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
2 ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.) 3 ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು. 4 ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು. 5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
6 ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.
7 ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
8 ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು.
ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.
9 ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.
10 ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು. 11 ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
12 ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಹೀಗೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ? 13 ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು. 14 ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು. 15 ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು. 16 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. 17 ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.
18 “ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’[a] ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು. 19 ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ. 20 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
ಯೇಸುವಿನ ಶಿಷ್ಯನ ದ್ರೋಹ
(ಮತ್ತಾಯ 26:20-25; ಮಾರ್ಕ 14:17-21; ಲೂಕ 22:21-23)
21 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.
22 ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ. 23 ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು. 24 ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು.
25 ಆ ಶಿಷ್ಯನು ಯೇಸುವಿನ ಸಮೀಪಕ್ಕೆ ಬಾಗಿಕೊಂಡು, “ಪ್ರಭುವೇ, ಅವನು ಯಾರು?” ಎಂದು ಕೇಳಿದನು.
26 ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು. 27 ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು. 28 ಯೇಸು ಯೂದನಿಗೆ ಏಕೆ ಹಾಗೆ ಹೇಳಿದನೆಂದು ಊಟಕ್ಕೆ ಕುಳಿತಿದ್ದವರಲ್ಲಿ ಯಾರಿಗೂ ಅರ್ಥವಾಗಲಿಲ್ಲ. 29 ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.
30 ಯೇಸು ಕೊಟ್ಟ ರೊಟ್ಟಿಯನ್ನು ತೆಗೆದುಕೊಂಡ ನಂತರ ಯೂದನು ಅಲ್ಲಿಂದ ಹೊರಟುಹೋದನು. ಆಗ ರಾತ್ರಿಯಾಗಿತ್ತು.
ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ
31 ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು. 32 ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.
33 ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
34 “ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. 35 ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
ಪೇತ್ರನ ವಿಶ್ವಾಸದ್ರೋಹದ ಮುನ್ಸೂಚನೆ
(ಮತ್ತಾಯ 26:31-35; ಮಾರ್ಕ 14:27-31; ಲೂಕ 22:31-34)
36 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.
ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.
37 ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.
38 ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.
ಶಿಷ್ಯರಿಗೆ ಯೇಸುವಿನ ಆದರಣೆ ಮಾತುಗಳು
14 ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ. 2 ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ. 3 ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು. 4 ನಾನು ಹೋಗಲಿರುವ ಸ್ಥಳದ ದಾರಿಯು ನಿಮಗೆ ತಿಳಿದಿದೆ” ಎಂದು ಹೇಳಿದನು.
5 ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.
6 ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ. 7 ನೀವು ನನ್ನನ್ನು ನಿಜವಾಗಿಯೂ ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದುಕೊಳ್ಳುತ್ತಿದ್ದಿರಿ. ಆದರೆ ಈಗ ನೀವು ತಂದೆಯನ್ನು ತಿಳಿದಿದ್ದೀರಿ. ನೀವು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
8 ಫಿಲಿಪ್ಪನು ಯೇಸುವಿಗೆ, “ಪ್ರಭುವೇ, ನಮಗೆ ತಂದೆಯನ್ನು ತೋರಿಸು. ನಮಗೆ ಅಷ್ಟೇ ಸಾಕು” ಎಂದು ಹೇಳಿದನು.
9 ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ? 10 ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ. 11 ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಇಲ್ಲದಿದ್ದರೆ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ.
12 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ. 13 ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು. 14 ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ಅದನ್ನು ನೆರವೇರಿಸುವೆನು.
ಪವಿತ್ರಾತ್ಮನನ್ನು ಕೊಡುವುದಾಗಿ ವಾಗ್ದಾನ
15 “ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ. 16 ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಆ ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು. 17 ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
18 “ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ. 19 ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ. 20 ನಾನು ನನ್ನ ತಂದೆಯಲ್ಲಿರುವುದನ್ನು ನೀವು ಆ ದಿನದಂದು ತಿಳಿದುಕೊಳ್ಳುವಿರಿ. ನೀವು ನನ್ನಲ್ಲಿರುವುದನ್ನೂ ನಾನು ನಿಮ್ಮಲ್ಲಿರುವುದನ್ನೂ ತಿಳಿದುಕೊಳ್ಳುವಿರಿ. 21 ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.
22 ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.
23 ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು. 24 ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಈ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು.
25 “ನಾನು ನಿಮ್ಮೊಂದಿಗೆ ಇರುವಾಗಲೇ ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ. 26 ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.
27 “ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ. 28 ‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು. 29 ಇದು ಸಂಭವಿಸುವುದಕ್ಕಿಂತ ಮೊದಲೇ ನಾನು ನಿಮಗೆ ಇದನ್ನು ಈಗಲೇ ತಿಳಿಸಿದ್ದೇನೆ. ಹೀಗಿರಲು, ಇದು ಸಂಭವಿಸುವಾಗ ನೀವು ನಂಬುವಿರಿ.
30 “ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ. 31 ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಈ ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ.
“ಬನ್ನಿ, ನಾವು ಇಲ್ಲಿಂದ ಹೋಗೋಣ.”
ಯೇಸು ದ್ರಾಕ್ಷಿಬಳ್ಳಿಯಂತಿದ್ದಾನೆ
15 “ನಾನು ನಿಜವಾದ ದ್ರಾಕ್ಷಿಬಳ್ಳಿ. ನನ್ನ ತಂದೆ ತೋಟಗಾರನು. 2 ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು. 3 ನಾನು ನಿಮಗೆ ಹೇಳಿದ ಉಪದೇಶದಿಂದ ನೀವು ಈಗಾಗಲೇ ಶುದ್ಧರಾಗಿದ್ದೀರಿ. 4 ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.
5 “ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು. 6 ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು. 7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಕೇಳಿಕೊಳ್ಳಿರಿ, ಅದು ನಿಮಗೆ ದೊರೆಯುವುದು. 8 ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.
9 “ತಂದೆಯು ನನ್ನನ್ನು ಪ್ರೀತಿಸಿದಂತೆ ನಾನೂ ನಿಮ್ಮನ್ನು ಪ್ರೀತಿಸಿದೆನು. ಈಗ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10 ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. 11 ನನಗಿರುವ ಆನಂದವನ್ನು ನೀವೂ ಹೊಂದಿಕೊಳ್ಳಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನು ಹೇಳಿದ್ದೇನೆ. ನಿಮ್ಮ ಆನಂದವು ಪರಿಪೂರ್ಣವಾದ ಆನಂದವಾಗಿರಬೇಕೆಂದು ನಾನು ಬಯಸುತ್ತೇನೆ. 12 ನಾನು ನಿಮ್ಮನ್ನು ಪ್ರೀತಿಸಿದಂತೆ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ. 13 ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. 14 ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು. 15 ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.
16 “ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು. 17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆ.
ಯೇಸು ತನ್ನ ಶಿಷ್ಯರಿಗೆ ನೀಡಿದ ಎಚ್ಚರಿಕೆ
18 “ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ. 19 ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
20 “ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು. 21 ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ. 22 ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.
23 “ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನೂ ದ್ವೇಷಿಸುವವನಾಗಿದ್ದಾನೆ. 24 ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ. 25 ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’[b] ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.
26 “ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಆ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು. 27 ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.
Kannada Holy Bible: Easy-to-Read Version. All rights reserved. © 1997 Bible League International