Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
1 ಕೊರಿಂಥದವರಿಗೆ 12-14

ಪವಿತ್ರಾತ್ಮನ ವರಗಳು

12 ಸಹೋದರ ಸಹೋದರಿಯರೇ, ಆತ್ಮಿಕ ವರಗಳ ಬಗ್ಗೆ ನೀವು ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ. ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.

ಅನೇಕ ರೀತಿಯ ಆತ್ಮಿಕ ವರಗಳಿವೆ. ಆದರೆ ಅವುಗಳೆಲ್ಲ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ. ಸೇವೆಮಾಡಲು ವಿವಿಧ ಮಾರ್ಗಗಳಿವೆ, ಆದರೆ ಅವುಗಳೆಲ್ಲಾ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ. ದೇವರು ಜನರಲ್ಲಿ ಮಾಡುವ ಕಾರ್ಯಗಳಿಗೂ ವಿವಿಧ ಮಾರ್ಗಗಳಿವೆ. ಆದರೆ ಅವುಗಳೆಲ್ಲಾ ಒಬ್ಬನೇ ದೇವರಿಂದ ಬಂದಂಥವುಗಳಾಗಿವೆ.

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ. ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ. ಒಬ್ಬನಿಗೆ ನಂಬಿಕೆಯನ್ನೂ ಮತ್ತೊಬ್ಬನಿಗೆ ಸ್ವಸ್ಥಪಡಿಸುವ ವರವನ್ನೂ ಕೊಡುತ್ತಾನೆ; 10 ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ. 11 ಪವಿತ್ರಾತ್ಮನು ಒಬ್ಬನೇ. ಆತನೇ ಎಲ್ಲಾ ವರಗಳನ್ನು ತನ್ನ ಚಿತ್ತಕ್ಕನುಸಾರವಾಗಿ ಪ್ರತಿಯೊಬ್ಬನಿಗೂ ಹಂಚಿಕೊಟ್ಟು ನಡೆಸುತ್ತಾನೆ.

ಕ್ರಿಸ್ತನ ದೇಹ

12 ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು. 13 ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.[a]

14 ದೇಹವು ಒಂದು ಅಂಗಕ್ಕಿಂತಲೂ ಹೆಚ್ಚು ಅಂಗಗಳನ್ನು ಪಡೆದಿದೆ. ಅದು ಅನೇಕ ಅಂಗಗಳನ್ನು ಪಡೆದಿದೆ. 15 ಪಾದವು, “ನಾನು ಕೈಯಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಪಾದವು ದೇಹದಿಂದ ಹೊರತಾಗಲಿಲ್ಲ. 16 ಕಿವಿಯು, “ನಾನು ಕಣ್ಣಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಕಿವಿಯು ದೇಹದಿಂದ ಹೊರತಾಗಲಿಲ್ಲ. 17 ಇಡೀ ದೇಹವೇ ಕಣ್ಣಾಗಿದ್ದರೆ, ಕೇಳಿಸಿಕೊಳ್ಳಲು ದೇಹಕ್ಕೆ ಸಾಧ್ಯವಿರುತ್ತಿರಲಿಲ್ಲ. ಇಡೀ ದೇಹವೇ ಕಿವಿಯಾಗಿದ್ದರೆ, ದೇಹವು ಯಾವುದರ ವಾಸನೆಯನ್ನೂ ತಿಳಿದುಕೊಳ್ಳಲಾಗುತ್ತಿರಲಿಲ್ಲ. 18-19 ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ. 20 ಆದ್ದರಿಂದ ಅಂಗಗಳು ಅನೇಕವಿದ್ದರೂ ದೇಹವು ಒಂದೇ.

21 ಕಣ್ಣು, “ನೀನು ನನಗೆ ಅವಶ್ಯವಿಲ್ಲ” ಎಂದು ಕೈಗೆ ಹೇಳಲಾರದು ಮತ್ತು ತಲೆಯು, “ನೀನು ನನಗೆ ಅವಶ್ಯವಿಲ್ಲ” ಎಂದು ಪಾದಕ್ಕೆ ಹೇಳಲಾರದು. 22 ಅಲ್ಲದೆ ದೇಹದಲ್ಲಿ ಬಲಹೀನವಾಗಿ ತೋರುವ ಅಂಗಗಳು ನಿಜವಾಗಿಯೂ ಬಹಳ ಅವಶ್ಯವಾಗಿವೆ. 23 ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ. 24 ಬಹು ಸುಂದರವಾದ ಅಂಗಗಳಿಗೆ ಇಂಥ ವಿಶೇಷ ಸಂರಕ್ಷಣೆಯ ಅಗತ್ಯವಿರುವುದಿಲ್ಲ. ಆದರೆ ದೇವರು ಅಂಗಗಳನ್ನು ಒಟ್ಟಾಗಿ ಸೇರಿಸಿದ್ದಾನೆ ಮತ್ತು ಕೊರತೆಯಲ್ಲಿರುವ ಅಂಗಗಳಿಗೆ ಹೆಚ್ಚಿನ ಮಾನ್ಯತೆಯನ್ನು ಕೊಟ್ಟಿದ್ದಾನೆ. 25 ನಮ್ಮ ದೇಹವು ವಿಭಜನೆಯಾಗದಂತೆ ಅಂಗಗಳು ಒಂದಕ್ಕೊಂದರ ಹಿತವನ್ನು ಸರಿಸಮನಾಗಿ ಗಮನಿಸುವಂತೆ ದೇವರು ಮಾಡಿದ್ದಾನೆ. 26 ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.

27 ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ. 28 ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ. 29 ಎಲ್ಲಾ ಜನರು ಅಪೊಸ್ತಲರುಗಳಲ್ಲ. ಎಲ್ಲಾ ಜನರು ಪ್ರವಾದಿಗಳಲ್ಲ. ಎಲ್ಲಾ ಜನರು ಉಪದೇಶಕರುಗಳಲ್ಲ. ಎಲ್ಲಾ ಜನರು ಅದ್ಭುತಕಾರ್ಯಗಳನ್ನು ಮಾಡುವುದಿಲ್ಲ. 30 ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಆ ಭಾಷೆಗಳನ್ನು ಅನುವಾದಿಸುವುದಿಲ್ಲ. 31 ಆದರೆ ನೀವು ಪವಿತ್ರಾತ್ಮನ ಇನ್ನೂ ಶ್ರೇಷ್ಠವಾದ ವರಗಳನ್ನು ಯಥಾರ್ಥವಾಗಿ ಅಪೇಕ್ಷಿಸತಕ್ಕದ್ದು. ಈಗ ನಾನು ನಿಮಗೆ ಎಲ್ಲಕ್ಕಿಂತಲೂ ಉತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.

ಪ್ರೀತಿ

13 ನಾನು ಮನುಷ್ಯರ ಭಾಷೆಗಳನ್ನಲ್ಲದೆ ದೇವದೂತರ ಭಾಷೆಗಳನ್ನು ಮಾತಾಡಬಹುದು. ಆದರೆ ನನ್ನಲ್ಲಿ ಪ್ರೀತಿಯಿಲ್ಲದಿದ್ದರೆ, ನಾನು ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ತಾಳ. ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ. ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.

ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ. ಪ್ರೀತಿಯು ನಾಚಿಕೆಕರವಾದ ರೀತಿಯಲ್ಲಿ ವರ್ತಿಸುವುದಿಲ್ಲ; ಸ್ವಾರ್ಥಿಯಲ್ಲ ಮತ್ತು ಬೇಗನೆ ಕೋಪಗೊಳ್ಳುವುದಿಲ್ಲ; ತನಗಾದ ಅಪಕಾರಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ. ಪ್ರೀತಿಯು ಕೆಟ್ಟದ್ದರ ಬಗ್ಗೆ ಸಂತೋಷಪಡದೆ ಸತ್ಯದ ಬಗ್ಗೆ ಸಂತೋಷಪಡುತ್ತದೆ. ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.

ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು. ಏಕೆಂದರೆ ನಮಗಿರುವ ಈ ಜ್ಞಾನವು ಮತ್ತು ಈ ಪ್ರವಾದನೆಗಳು ಸಂಪೂರ್ಣವಾದುವುಗಳಲ್ಲ. 10 ಆದರೆ ಸಂಪೂರ್ಣತೆಯು ಬಂದಾಗ ಸಂಪೂರ್ಣವಲ್ಲದವುಗಳು ಕೊನೆಗೊಳ್ಳುತ್ತವೆ.

11 ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು. 12 ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು. 13 ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.

ಸಭೆಯ ಸಹಾಯಕ್ಕಾಗಿ ಆತ್ಮಿಕ ವರಗಳನ್ನು ಉಪಯೋಗಿಸಿರಿ

14 ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು. ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ. ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ. ಪರಭಾಷೆಯಲ್ಲಿ ಮಾತಾಡುವ ವ್ಯಕ್ತಿಯು ತನಗೆ ಮಾತ್ರ ಸಹಾಯ ಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಇಡೀ ಸಭೆಗೆ ಸಹಾಯ ಮಾಡುತ್ತಾನೆ.

ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.

ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ. ನಾದವನ್ನು ಹೊರಹೊಮ್ಮಿಸುವ ಕೊಳಲು ಅಥವಾ ವೀಣೆ ಮುಂತಾದ ನಿರ್ಜೀವ ವಸ್ತುಗಳಿಗೆ ಇದು ಸರಿಹೋಲುತ್ತದೆ. ವಿವಿಧ ಧ್ವನಿಗಳು ಸ್ಪಷ್ಟವಾಗಿಲ್ಲದಿದ್ದರೆ ಯಾವ ಹಾಡನ್ನು ನುಡಿಸಲಾಗುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಪ್ರತಿಯೊಂದು ಧ್ವನಿಯನ್ನು ಸ್ಪಷ್ಟವಾಗಿ ನುಡಿಸಿದಾಗ ಮಾತ್ರ ನೀವು ಸ್ವರವನ್ನು ಅರ್ಥಮಾಡಿಕೊಳ್ಳುವಿರಿ. ಇದಲ್ಲದೆ ಯುದ್ಧದಲ್ಲಿ ಕಹಳೆಯನ್ನು ಸ್ಪಷ್ಟವಾಗಿ ಊದದಿದ್ದರೆ, ಇದು ಯುದ್ಧಕ್ಕೆ ಸಿದ್ಧರಾಗುವ ಸಮಯವೆಂಬುದು ಸೈನಿಕರಿಗೆ ತಿಳಿಯುವುದಿಲ್ಲ.

ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮ ನಾಲಿಗೆಯಿಂದ ಮಾತಾಡುವ ಪದಗಳು ಸ್ಪಷ್ಟವಾಗಿರಬೇಕು. ನೀವು ಸ್ಪಷ್ಟವಾಗಿ ಮಾತಾಡದಿದ್ದರೆ, ನೀವು ಏನು ಮಾತಾಡುತ್ತಿದ್ದೀರೆಂಬುದನ್ನು ಜನರು ಅರ್ಥಮಾಡಿಕೊಳ್ಳುವುದಿಲ್ಲ. ನೀವು ಗಾಳಿಯೊಂದಿಗೆ ಮಾತಾಡುತ್ತಿರುವಂತೆ ತೋರುವುದು. 10 ಪ್ರಪಂಚದಲ್ಲಿ ಹಲವಾರು ಭಾಷೆಗಳಿರುವುದೇನೋ ಸತ್ಯ ಮತ್ತು ಆ ಭಾಷೆಗಳಿಗೆಲ್ಲಾ ಅರ್ಥವಿದೆ. 11 ಆದ್ದರಿಂದ, ಒಬ್ಬ ವ್ಯಕ್ತಿಯು ಮಾತಾಡುವ ಭಾಷೆಯನ್ನು ನಾನು ಅರ್ಥಮಾಡಿಕೊಳ್ಳದಿದ್ದರೆ ಅವನು ನನಗೆ ವಿದೇಶಿಯನಂತಿರುವನು; ನಾನೂ ಅವನಿಗೆ ವಿದೇಶಿಯನಂತಿರುವೆನು. 12 ಇದು ನಿಮಗೂ ಅನ್ವಯಿಸುತ್ತದೆ. ನೀವು ಆತ್ಮಿಕ ವರಗಳನ್ನು ಬಹಳವಾಗಿ ಅಪೇಕ್ಷಿಸುತ್ತೀರಿ. ಆದ್ದರಿಂದ, ಸಭೆಯು ದೃಢವಾಗಿ ಬೆಳೆಯಲು ಸಹಾಯಕರವಾದ ವರಗಳನ್ನು ಹೊಂದಿಕೊಳ್ಳಲು ಹೆಚ್ಚಾಗಿ ಪ್ರಯತ್ನಿಸಿರಿ.

13 ಪರಭಾಷೆಯಲ್ಲಿ ಮಾತಾಡುವ ವರವುಳ್ಳವನು ತಾನು ಹೇಳುವ ವಿಷಯಗಳನ್ನು ಅನುವಾದಿಸುವ ಸಾಮರ್ಥ್ಯಕ್ಕಾಗಿಯೂ ದೇವರಲ್ಲಿ ಪ್ರಾರ್ಥಿಸಲಿ. 14 ನಾನು ಪರಭಾಷೆಯಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದೇ ಹೊರತು ನನ್ನ ಮನಸ್ಸು ತಟಸ್ಥವಾಗಿರುವುದು. 15 ಆದ್ದರಿಂದ ನಾನೇನು ಮಾಡಬೇಕು? ನಾನು ನನ್ನ ಆತ್ಮದಿಂದಲೂ ಮನಸ್ಸಿನಿಂದಲೂ ಪ್ರಾರ್ಥಿಸುವೆನು; ನನ್ನ ಜೀವಾತ್ಮದೊಂದಿಗೂ ಮನಸ್ಸಿನೊಂದಿಗೂ ಹಾಡುವೆನು. 16 ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ. 17 ಸತ್ಯವಾಗಿ ಹೇಳುವುದಾದರೆ, ದೇವರಿಗೆ ಮಾಡುವ ಕೃತಜ್ಞತಾಸ್ತುತಿಯಿಂದ ಬೇರೊಬ್ಬನಿಗೆ ಸಹಾಯವಾಗುವುದಿಲ್ಲ.

18 ವಿವಿಧ ಭಾಷೆಗಳಲ್ಲಿ ಮಾತಾಡಲು ನಿಮ್ಮೆಲ್ಲರಿಗಿಂತಲೂ ಹೆಚ್ಚಿನ ವರವು ನನಗಿದೆ. 19 ಆದರೆ ಸಭಾಕೂಟಗಳಲ್ಲಿ ಅರ್ಥವಾಗದಂಥ ಪರಭಾಷೆಯಲ್ಲಿ ಸಾವಿರಾರು ಮಾತುಗಳನ್ನು ಹೇಳುವುದಕ್ಕಿಂತ ಅರ್ಥವಾಗುವಂಥ ಕೆಲವೇ ಮಾತುಗಳನ್ನು ಹೇಳಲು ಇಷ್ಟಪಡುತ್ತೇನೆ. ಇತರರಿಗೆ ಉಪದೇಶ ಮಾಡುವುದಕ್ಕಾಗಿ ನಾನು ತಿಳುವಳಿಕೆಯಿಂದ ಮಾತಾಡುವೆನು.

20 ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ. 21 ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ:

“ವಿವಿಧ ಭಾಷೆಗಳನ್ನು ಮಾತಾಡುವವರ ಮೂಲಕವೂ
    ವಿದೇಶಿಯರ ನಾಲಿಗೆಯ ಮೂಲಕವೂ
ನಾನು ಈ ಜನರೊಂದಿಗೆ ಮಾತಾಡುವೆನು;
    ಆದರೂ ಇವರು ನನಗೆ ವಿಧೇಯರಾಗುವುದಿಲ್ಲ.”(A)

ಪ್ರಭುವು ಹೇಳುವುದು ಅದನ್ನೇ.

22 ಆದ್ದರಿಂದ ವಿವಿಧ ಭಾಷೆಗಳನ್ನು ಮಾತಾಡುವ ವರವು ನಂಬದ ಜನರಿಗೆ ಆಧಾರವಾಗಿದೆಯೇ ಹೊರತು ನಂಬುವವರಿಗಲ್ಲ. ಆದರೆ ಪ್ರವಾದನೆಯು ನಂಬುವ ಜನರಿಗೋಸ್ಕರವಾಗಿ ಇದೆಯೇ ಹೊರತು ನಂಬದವರಿಗಲ್ಲ. 23 ಒಂದುವೇಳೆ ಇಡೀ ಸಭೆಯು ಕೂಡಿಬಂದಾಗ ನೀವೆಲ್ಲರೂ ವಿವಿಧ ಭಾಷೆಗಳನ್ನು ಮಾತಾಡತೊಡಗಿದರೆ, ಅಲ್ಲಿಗೆ ಬರುವ ತಿಳುವಳಿಕೆಯಿಲ್ಲದ ಅಥವಾ ನಂಬದ ಕೆಲವು ಜನರು ನಿಮ್ಮನ್ನು ಹುಚ್ಚರೆಂದು ಹೇಳುವರು. 24 ಒಂದುವೇಳೆ ನೀವೆಲ್ಲರೂ ಪ್ರವಾದನೆ ಮಾಡುತ್ತಿರುವಾಗ, ತಿಳುವಳಿಕೆಯಿಲ್ಲದ ಅಥವಾ ನಂಬಿಕೆಯಿಲ್ಲದ ವ್ಯಕ್ತಿಯು ಒಳಗೆ ಬಂದರೆ, ನಿಮ್ಮ ಪ್ರವಾದನೆಗಳು ಆ ವ್ಯಕ್ತಿಗೆ ಅವನ ಪಾಪವನ್ನು ತೋರಿಸಿಕೊಡುತ್ತವೆ ಮತ್ತು ನೀವು ಹೇಳುವ ವಿಷಯಗಳ ಆಧಾರದ ಮೇಲೆ ಅವನಿಗೆ ತೀರ್ಪಾಗುವುದು. 25 ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.[b]

ನಿಮ್ಮ ಸಭಾಕೂಟಗಳು ಸಭೆಗೆ ಸಹಾಯಕವಾಗಿರಬೇಕು

26 ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು. 27 ನೀವು ಸಭೆಸೇರಿರುವಾಗ, ಯಾರಾದರೂ ಪರಭಾಷೆಯಲ್ಲಿ ಮಾತಾಡಲು ಬಯಸಿದರೆ, ಇಬ್ಬರು ಅಥವಾ ಮೂವರಿಗಿಂತಲೂ ಹೆಚ್ಚು ಜನರು ಪರಭಾಷೆಯಲ್ಲಿ ಮಾತಾಡಬಾರದು. ಅವರು ಹೇಳುವುದನ್ನು ಮತ್ತೊಬ್ಬ ವ್ಯಕ್ತಿಯು ಅನುವಾದಿಸಬೇಕು. 28 ಆದರೆ ಅನುವಾದಕನು ಇಲ್ಲದಿದ್ದರೆ, ಪರಭಾಷೆಯಲ್ಲಿ ಮಾತಾಡುವವನು ಸಭೆಯಲ್ಲಿ ಮೌನವಾಗಿರಬೇಕು. ಆ ವ್ಯಕ್ತಿಯು ತನ್ನೊಂದಿಗೂ ದೇವರೊಂದಿಗೂ ಮಾತ್ರ ಮಾತಾಡಬೇಕು.

29 ಇಬ್ಬರು ಅಥವಾ ಮೂವರು ಪ್ರವಾದಿಗಳು ಮಾತ್ರ ಮಾತಾಡಬೇಕು. ಅವರು ಹೇಳುವುದನ್ನು ಇತರರು ವಿವೇಚಿಸಬೇಕು. 30 ಸಭೆಯಲ್ಲಿ ಕುಳಿತಿರುವ ಮತ್ತೊಬ್ಬ ವ್ಯಕ್ತಿಗೆ ದೇವರ ಸಂದೇಶವು ದೊರೆತರೆ, ಮೊದಲು ಮಾತಾಡುತ್ತಿರುವವನು ತನ್ನ ಮಾತನ್ನು ನಿಲ್ಲಿಸಲಿ. 31 ನೀವೆಲ್ಲರೂ ಒಬ್ಬರಾದ ನಂತರ ಒಬ್ಬರು ಪ್ರವಾದಿಸಬಹುದು. ಈ ರೀತಿಯಲ್ಲಿ ಎಲ್ಲಾ ಜನರು ಕಲಿತುಕೊಳ್ಳುವರು ಮತ್ತು ಪ್ರೋತ್ಸಾಹಿತರಾಗುವರು. 32 ಪ್ರವಾದಿಗಳ ಜೀವಾತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿಯೇ ಇರುತ್ತವೆ. 33 ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.

34 ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ. 35 ಸ್ತ್ರೀಯರು ಏನಾದರು ತಿಳಿದುಕೊಳ್ಳಬೇಕೆಂದಿದ್ದರೆ, ತಮ್ಮ ಮನೆಗಳಲ್ಲಿ ತಮ್ಮ ಗಂಡಂದಿರನ್ನು ಕೇಳಬೇಕು. ಬಹಿರಂಗ ಕೂಟದಲ್ಲಿ ಸ್ತ್ರೀಯರು ಮಾತಾಡುವಂಥದ್ದು ನಾಚಿಕೆಕರವಾದದ್ದು.

36 ದೇವರ ಉಪದೇಶವು ನಿಮ್ಮಿಂದ ಬರುತ್ತದೆಯೇ? ಇಲ್ಲ! ಆ ಉಪದೇಶವನ್ನು ಹೊಂದಿಕೊಂಡವರು ನೀವು ಮಾತ್ರವೋ? ಇಲ್ಲ! 37 ಯಾವನಾದರೂ ತಾನು ಪ್ರವಾದಿಯೆಂದು ಅಥವಾ ತನ್ನಲ್ಲಿ ಆತ್ಮಿಕ ವರವಿದೆಯೆಂದು ಯೋಚಿಸುವುದಾದರೆ, ಇದು ಪ್ರಭುವಿನ ಆಜ್ಞೆಯೆಂದು ಅವನು ಅರ್ಥಮಾಡಿಕೊಳ್ಳಬೇಕು. 38 ಯಾವನಾದರೂ ಇದನ್ನು ಒಪ್ಪಿಕೊಳ್ಳದಿದ್ದರೆ, ನೀವೂ ಅವನನ್ನು ಒಪ್ಪಿಕೊಳ್ಳಬಾರದು.

39 ಆದ್ದರಿಂದ ಸಹೋದರ ಸಹೋದರಿಯರೇ, ನೀವು ಪ್ರವಾದನಾ ವರವನ್ನು ನಿಜವಾಗಿಯೂ ಬಯಸಿರಿ. ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ಹೊಂದಿರುವವರು ತಮ್ಮ ವರವನ್ನು ಉಪಯೋಗಿಸಲಿ. ಅವರನ್ನು ತಡೆಯಬೇಡಿರಿ. 40 ಆದರೆ ಪ್ರತಿಯೊಂದನ್ನೂ ಸರಿಯಾದ ರೀತಿಯಲ್ಲಿ ಮತ್ತು ಕ್ರಮಬದ್ಧವಾಗಿ ಮಾಡಿರಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International