Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ಪ್ರಕಟನೆ 20-22

ಒಂದುಸಾವಿರ ವರ್ಷಗಳು

20 ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಆ ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು. ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು. ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.

ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು. (ಸತ್ತುಹೋಗಿದ್ದ ಇತರ ಜನರು ಒಂದುಸಾವಿರ ವರ್ಷಗಳು ಮುಗಿಯುವ ತನಕ ಜೀವಂತರಾಗಲೇ ಇಲ್ಲ.)

ಇದೇ ಪ್ರಥಮ ಪುನರುತ್ಥಾನ. ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.

ಸೈತಾನನಿಗೆ ಸೋಲು

ಒಂದುಸಾವಿರ ವರ್ಷಗಳು ಮುಗಿದ ನಂತರ, ಸೈತಾನನನ್ನು ಅವನ ಸೆರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.

ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು. 10 ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.

ಲೋಕದ ಜನರಿಗಾಗುವ ತೀರ್ಪು

11 ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು. 12 ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.

13 ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು. 14 ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ. 15 ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.

ನೂತನ ಜೆರುಸಲೇಮ್

21 ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು[a] ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ. ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.

ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.

ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.

ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ. ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ. ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”

ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು. 10 ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.

11 ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು. 12 ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು. 13 ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. 14 ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.

15 ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು. 16 ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ[b] ಎತ್ತರವಾಗಿತ್ತು. 17 ದೇವದೂತನು ಗೋಡೆಯನ್ನೂ ಅಳೆದನು. ಅದು ಮನುಷ್ಯರ ಮೊಳದಲ್ಲಿ 144 ಮೊಳವಿತ್ತು.[c] ದೇವದೂತನು ಉಪಯೋಗಿಸಿದ ಅಳತೆಮಾನವೇ ಅದು. 18 ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು.

19 ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ, 20 ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ. 21 ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.

22 ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ. 23 ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.

24 ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ. 25 ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ. 26 ಜನಾಂಗಗಳ ವೈಭವ ಮತ್ತು ಗೌರವಗಳು ನಗರಕ್ಕೆ ಬರುತ್ತವೆ. 27 ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.

22 ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ, ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.

ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ. ಅವರು ಆತನ ಮುಖವನ್ನು ನೋಡುತ್ತಾರೆ. ದೇವರ ಹೆಸರನ್ನು ಅವರ ಹಣೆಗಳ ಮೇಲೆ ಬರೆಯಲಾಗುತ್ತದೆ. ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.

ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ: ‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.

ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು. ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.

10 ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ. 11 ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.

12 “ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ. 13 ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು. 15 ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.

16 “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”

17 ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.

18 ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ. 19 ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.

20 ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ.

ಆಮೆನ್! ಪ್ರಭು ಯೇಸುವೇ, ಬಾ!

21 ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International