Beginning
1 ಪೌಲನು ಬರೆಯುತ್ತಿರುವ ಪತ್ರ. ಕ್ರಿಸ್ತ ಯೇಸುವಿನ ಅಪೊಸ್ತಲನಾಗುವುದಕ್ಕೆ ನಾನು ದೇವರ ಚಿತ್ತಾನುಸಾರವಾಗಿ ಕರೆಯುಲ್ಪಟ್ಟೆನು. ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ಸೊಸ್ಥೆನನೊಂದಿಗೆ ಬರೆಯುತ್ತಿದ್ದೇನೆ.
2 ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.
3 ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.
ಪೌಲನು ದೇವರಿಗೆ ಸಲ್ಲಿಸುವ ಕೃತಜ್ಞತಾಸ್ತುತಿ
4 ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 5 ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ. 6 ಕ್ರಿಸ್ತನ ವಿಷಯವಾದ ಸತ್ಯವು ನಿಮ್ಮಲ್ಲಿ ನಿರೂಪಿಸಲ್ಪಟ್ಟಿದೆ. 7 ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ. 8 ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ. 9 ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.
ಕೊರಿಂಥ ಸಭೆಯಲ್ಲಿ ಸಮಸ್ಯೆಗಳು
10 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.
11 ನನ್ನ ಸಹೋದರ ಸಹೋದರಿಯರೇ, ಖ್ಲೊಯೆಯ ಮನೆಯಿಂದ ಬಂದಿದ್ದ ಕೆಲವರು ನಿಮ್ಮ ಬಗ್ಗೆ ನನಗೆ ಹೇಳಿದರು. ನಿಮ್ಮ ಮಧ್ಯದಲ್ಲಿ ವಾಗ್ವಾದಗಳಿರುವುದಾಗಿ ನನಗೆ ತಿಳಿಯಿತು. 12 ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ. 13 ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ! 14 ನಿಮ್ಮಲ್ಲಿ ಕ್ರಿಸ್ಪನು ಮತ್ತು ಗಾಯನು ಇವರ ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಮಾಡಿಸಿಲ್ಲವಾದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. 15 ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವುದಾಗಿ ಹೇಳಲು ನಿಮ್ಮಲ್ಲಿ ಯಾರಿಗೂ ಈಗ ಸಾಧ್ಯವಿಲ್ಲವಾದ್ದರಿಂದ ನಾನು ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. 16 (ಸ್ತೆಫನನ ಮನೆಯವರಿಗಲ್ಲದೆ ಬೇರೆ ಯಾರಿಗೂ ದೀಕ್ಷಾಸ್ನಾನ ಮಾಡಿಸಿದಂತೆ ನನಗೆ ತೋರುವುದಿಲ್ಲ.) 17 ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.
ದೇವರ ಶಕ್ತಿ ಮತ್ತು ಕ್ರಿಸ್ತನ ಜ್ಞಾನ
18 ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ. 19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು.
ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”(A)
20 ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ. 21 ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.
22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ. 23 ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ. 24 ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ. 25 ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.
26 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ. 27 ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ. 28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು. 29 ಹೀಗಿರಲು ದೇವರ ಮುಂದೆ ಹೆಮ್ಮೆಪಡಲು ಯಾರಿಗೂ ಆಸ್ಪದವಿಲ್ಲ. 30 ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ. 31 ಆದ್ದರಿಂದ ಪವಿತ್ರ ಗ್ರಂಥವು ಹೇಳುವಂತೆ, “ಹೆಮ್ಮೆಪಡುವವನು ಪ್ರಭುವಿನಲ್ಲಿ ಮಾತ್ರ ಹೆಮ್ಮೆಪಡಬೇಕು.”
ಶಿಲುಬೆಗೆರಿಸಲ್ಪಟ್ಟ ಕ್ರಿಸ್ತನ ಕುರಿತಾದ ಸಂದೇಶ
2 ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ. 2 ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು. 3 ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು. 4 ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು. 5 ನಿಮ್ಮ ನಂಬಿಕೆಯು ಮನುಷ್ಯನ ಜ್ಞಾನದ ಮೇಲೆ ಆಧಾರಗೊಂಡಿರದೆ ದೇವರ ಶಕ್ತಿಯ ಮೇಲೆ ಆಧಾರಗೊಂಡಿರಬೇಕೆಂದು ನಾನು ಹೀಗೆ ಮಾಡಿದೆನು.
ದೇವರ ಜ್ಞಾನ
6 ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ. 7 ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು. 8 ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ. 9 ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು:
“ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು
ಯಾವ ಕಣ್ಣೂ ಕಾಣಲಿಲ್ಲ.
ಯಾವ ಕಿವಿಯೂ ಕೇಳಲಿಲ್ಲ.
ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”(B)
10 ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು.
ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ. 11 ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. 12 ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.
13 ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ. 14 ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ. 15 ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ. 16 ಪವಿತ್ರ ಗ್ರಂಥವು ಹೇಳುವಂತೆ:
“ಪ್ರಭುವಿನ ಮನಸ್ಸನ್ನು ಯಾರು ಬಲ್ಲರು?
ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?”(C)
ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.
ಮನುಷ್ಯರನ್ನು ಅನುಸರಿಸುವುದು ತಪ್ಪು
3 ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು. 2 ನಾನು ನಿಮಗೆ ಮಾಡಿದ ಉಪದೇಶವು ಗಟ್ಟಿಯಾದ ಆಹಾರದಂತಿರದೆ ಹಾಲಿನಂತಿತ್ತು; ಏಕೆಂದರೆ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವಿನ್ನೂ ಸಿದ್ಧರಾಗಿರಲಿಲ್ಲ. ಈಗಲೂ ಸಹ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವು ಸಿದ್ಧರಾಗಿಲ್ಲ. 3 ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ. 4 ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ಮತ್ತೊಬ್ಬನು “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ನೀವು ಹೀಗೆ ವಾಗ್ವಾದ ಮಾಡುವಾಗ ಲೋಕದ ಜನರಂತೆಯೇ ವರ್ತಿಸುವವರಾಗಿದ್ದೀರಿ.
5 ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು. 6 ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ. 7 ಆದ್ದರಿಂದ ಬೀಜ ಬಿತ್ತುವವನಾಗಲಿ ನೀರು ಹಾಕುವವನಾಗಲಿ ಮುಖ್ಯನಲ್ಲ. ದೇವರೊಬ್ಬನು ಮಾತ್ರ ಮುಖ್ಯವಾದವನು, ಏಕೆಂದರೆ ಬೀಜಗಳನ್ನು ಬೆಳೆಯಿಸುವವನು ಆತನೊಬ್ಬನೇ. 8 ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು. 9 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ.
ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ. 10 ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು. 11 ಅಸ್ತಿವಾರವನ್ನು ಆಗಲೇ ಹಾಕಲಾಗಿದೆ. ಆ ಅಸ್ತಿವಾರವು ಯೇಸು ಕ್ರಿಸ್ತನೇ. ಆ ಅಸ್ತಿವಾರವನ್ನಲ್ಲದೆ ಬೇರೊಂದು ಅಸ್ತಿವಾರವನ್ನು ಬೇರೆ ಯಾರೂ ಹಾಕಲಾರರು. 12 ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು. 13 ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು. 14 ಅಸ್ತಿವಾರದ ಮೇಲೆ ಕಟ್ಟಿದ ಕಟ್ಟಡವು ಸ್ಥಿರವಾಗಿದ್ದರೆ, ಕಟ್ಟಿದವನು ಪ್ರತಿಫಲವನ್ನು ಹೊಂದಿಕೊಳ್ಳುವನು. 15 ಆದರೆ ಕಟ್ಟಡವು ಸುಟ್ಟುಹೋದರೆ, ಕಟ್ಟಿದವನಿಗೆ ನಷ್ಟವಾಗುವುದು. ಅವನು ರಕ್ಷಣೆ ಹೊಂದುವನು, ಆದರೆ ಅವನು ಬೆಂಕಿಯಿಂದ ತಪ್ಪಿಸಿಕೊಂಡವನಂತಿರುವನು.
16 ನೀವೇ ದೇವರ ಆಲಯವಾಗಿದ್ದೀರಿ. ಇದು ನಿಮಗೆ ಚೆನ್ನಾಗಿ ತಿಳಿದಿದೆ. ದೇವರಾತ್ಮನು ನಿಮ್ಮೊಳಗೆ ವಾಸವಾಗಿದ್ದಾನೆ. 17 ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.
18 ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು. 19 ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು”(D) ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. 20 “ಪ್ರಭುವು ಜ್ಞಾನಿಗಳ ಆಲೋಚನೆಗಳನ್ನು ತಿಳಿದಿದ್ದಾನೆ. ಅವರ ಆಲೋಚನೆಗಳು ನಿಷ್ಪ್ರಯೋಜಕವೆಂದು ಆತನಿಗೆ ಗೊತ್ತಿದೆ”(E) ಎಂದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. 21 ಆದ್ದರಿಂದ ನೀವು ಜನರ ಬಗ್ಗೆ ಹೆಚ್ಚಳಪಡಬಾರದು. ಸಮಸ್ತವೂ ನಿಮ್ಮದೇ. 22 ಪೌಲ, ಅಪೊಲ್ಲೋಸ್ ಮತ್ತು ಕೇಫ ನಿಮ್ಮವರಾಗಿದ್ದಾರೆ. ಜಗತ್ತು, ಜೀವ, ಮರಣ ಮತ್ತು ವರ್ತಮಾನ ಹಾಗೂ ಭವಿಷ್ಯತ್ ಕಾಲಗಳ ಸಂಗತಿಗಳು ನಿಮ್ಮವೇ. 23 ನೀವು ಕ್ರಿಸ್ತನಿಗೆ ಸೇರಿದವರಾಗಿದ್ದೀರಿ. ಕ್ರಿಸ್ತನು ದೇವರಿಗೆ ಸೇರಿದವನಾಗಿದ್ದಾನೆ.
ಕ್ರಿಸ್ತನ ಅಪೊಸ್ತಲರು
4 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು. 2 ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು. 3 ನೀವೇ ನನಗೆ ವಿಚಾರಣೆ ಮಾಡಿದರೂ ಯಾವುದೇ ಮಾನವ ನೇಮಿತ ನ್ಯಾಯಾಲಯದಲ್ಲಿ ನನಗೆ ವಿಚಾರಣೆಯಾದರೂ ನಾನು ಚಿಂತಿಸುವುದಿಲ್ಲ. ಅಲ್ಲದೆ ನನಗೆ ನಾನೇ ವಿಚಾರಣೆ ಮಾಡಿಕೊಳ್ಳುವುದಿಲ್ಲ. 4 ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ. 5 ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.
6 ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, “ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ. 7 ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?
8 ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು. 9 ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ. 10 ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ. 11 ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ. 12 ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ. 13 ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.
14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. 15 ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ. 16 ಆದ್ದರಿಂದ ನೀವು ನನ್ನಂತೆಯೇ ಇರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 17 ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.
18 ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ. 19 ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು. 20 ಏಕೆಂದರೆ ದೇವರ ರಾಜ್ಯವು ಕೇವಲ ಮಾತಲ್ಲ, ಅದು ಶಕ್ತಿಯಾಗಿದೆ. 21 ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ?
Kannada Holy Bible: Easy-to-Read Version. All rights reserved. © 1997 Bible League International