Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ಎಫೆಸದವರಿಗೆ 4-6

ದೇಹದ ಐಕ್ಯತೆ

ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ. ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ. ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು. ಒಬ್ಬನೇ ಪ್ರಭು, ಒಂದೇ ನಂಬಿಕೆ, ಒಂದೇ ದೀಕ್ಷಾಸ್ನಾನ. ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಸಮಸ್ತವನ್ನೂ ಆಳುತ್ತಾನೆ. ಆತನು ಸರ್ವವ್ಯಾಪಿಯಾಗಿದ್ದಾನೆ ಮತ್ತು ಎಲ್ಲರಲ್ಲಿ ವಾಸಿಸುವವನಾಗಿದ್ದಾನೆ.

ಕ್ರಿಸ್ತನು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಶೇಷವಾದ ವರವನ್ನು ಕೊಟ್ಟಿದ್ದಾನೆ. ಪ್ರತಿಯೊಬ್ಬನು ಕ್ರಿಸ್ತನ ಇಷ್ಟಾನುಸಾರವಾಗಿ ವರವನ್ನು ಪಡೆದುಕೊಂಡಿದ್ದಾನೆ. ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ:

“ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ,
    ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.”(A)

“ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು, 10 ಭೂಮಿಯ ಅಧೋಭಾಗಕ್ಕೆ ಇಳಿದುಹೋಗಿ, ಅಲ್ಲಿಂದ ಆಕಾಶದ ಅತ್ಯುನ್ನತಸ್ಥಾನಕ್ಕೆ ಏರಿಹೋದನು ಎಂದರ್ಥ. ಸಮಸ್ತದಲ್ಲಿ ತಾನೇ ತುಂಬಿರಬೇಕೆಂದು ಕ್ರಿಸ್ತನು ಹಾಗೆ ಮಾಡಿದನು. 11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು. 12 ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು. 13 ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.

14 ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ. 15 ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ. 16 ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.

ನೀವು ಜೀವಿಸಬೇಕಾದ ರೀತಿ

17 ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ. 18 ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ. 19 ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಕೃತ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ. 20 ಆದರೆ ಕ್ರಿಸ್ತನಿಂದ ನೀವು ಕಲಿತುಕೊಂಡದ್ದು ಅವುಗಳನ್ನಲ್ಲ. 21 ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ. 22 ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ. 23 ಆದರೆ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಹೊಂದಿಕೊಳ್ಳತಕ್ಕ ರೀತಿಯನ್ನು ನೀವು ಕಲಿತುಕೊಂಡಿರಿ. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.

25 ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ. 26 ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.(B) 27 ನಿಮ್ಮನ್ನು ಸೋಲಿಸಲು ಸೈತಾನನಿಗೆ ಅವಕಾಶಕೊಡಬೇಡಿ. 28 ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.

29 ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ. 30 ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು. 31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. 32 ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.

ನೀವು ದೇವರ ಪ್ರಿಯ ಮಕ್ಕಳಾಗಿದ್ದೀರಿ; ಆದ್ದರಿಂದ ನೀವು ಆತನನ್ನು ಅನುಸರಿಸಬೇಕು. ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.

ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ. ಅಲ್ಲದೆ ನಿಮ್ಮ ಮಧ್ಯದಲ್ಲಿ ಕೆಟ್ಟಮಾತುಗಳು ಇರಕೂಡದು. ನೀವು ಮೂರ್ಖತನದಿಂದ ಮಾತಾಡಕೂಡದು ಮತ್ತು ಹೊಲಸಾದ ಹಾಸ್ಯನುಡಿಗಳನ್ನು ಹೇಳಕೂಡದು. ಇವುಗಳು ನಿಮಗೆ ಯೋಗ್ಯವಾದವುಗಳಲ್ಲ. ಆದರೆ ನೀವು ದೇವರಿಗೆ ಸ್ತೋತ್ರ ಸಲ್ಲಿಸುವವರಾಗಿರಬೇಕು. ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.

ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ. ಆದ್ದರಿಂದ ನೀವು ಅಂಥ ಜನರೊಂದಿಗೆ ಪಾಲುಗಾರರಾಗಬೇಡಿ. ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ. 10 ಪ್ರಭುವಿಗೆ ಯಾವುದು ಮೆಚ್ಚಿಕೆಯಾದದ್ದೆಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿ. 11 ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ. 12 ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತಕಾರ್ಯಗಳ ಬಗ್ಗೆ ಮಾತಾಡುವುದಕ್ಕೂ ನಾಚಿಕೆಯಾಗುತ್ತದೆ. 13 ಆದರೆ ಆ ಕಾರ್ಯಗಳು ತಪ್ಪಾದವುಗಳೆಂದು ನಾವು ತೋರಿಸುವಾಗ ಬೆಳಕಿನಿಂದ ಆ ಕಾರ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ. 14 ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ:

“ನಿದ್ರೆಮಾಡುವವನೇ, ಎಚ್ಚರವಾಗು!
    ಸತ್ತವರನ್ನು ಬಿಟ್ಟು ಎದ್ದೇಳು,
ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”

15 ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ. 16 ಈ ದಿನಗಳು ಕೆಟ್ಟವುಗಳಾಗಿವೆ. ಆದ್ದರಿಂದ ನಿಮಗಿರುವ ಪ್ರತಿಯೊಂದು ಅವಕಾಶವನ್ನು ಒಳ್ಳೆಯದಕ್ಕಾಗಿ ಉಪಯೋಗಿಸಿರಿ. 17 ನಿಮ್ಮ ಜೀವಿತಗಳ ಬಗ್ಗೆ ಮೂರ್ಖರಾಗಿರದೆ ದೇವರ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ. 18 ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ. 19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ. 20 ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.

ಗಂಡ ಹೆಂಡತಿಯರು

21 ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.

22 ಸ್ತ್ರೀಯರೇ, ನೀವು ಪ್ರಭುವಿಗೆ ಅಧೀನರಾಗಿರುವಂತೆ ನಿಮ್ಮ ಗಂಡಂದಿರಿಗೂ ಅಧೀನರಾಗಿರಿ. 23 ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ. 24 ಸಭೆಯು ಕ್ರಿಸ್ತನ ಅಧೀನದಲ್ಲಿದೆ. ಇದೇ ನಿಯಮವು ಸ್ತ್ರೀಯರಿಗೆ ಅನ್ವಯಿಸುತ್ತದೆ. ಪ್ರತಿಯೊಂದು ವಿಷಯದಲ್ಲಿಯೂ ಸ್ತ್ರೀಯರು ತಮ್ಮ ಗಂಡಂದಿರಿಗೆ ಅಧೀನರಾಗಿರಬೇಕು.

25 ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು. 26 ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು. 27 ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.

28 ಆದ್ದರಿಂದ ಪುರುಷರು ತಮ್ಮ ಸ್ವಂತ ದೇಹಗಳನ್ನು ಪ್ರೀತಿಸುವಂತೆ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುವವನಾಗಿದ್ದಾನೆ. 29 ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ. 30 ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ. 31 ಪವಿತ್ರ ಗ್ರಂಥವು ಹೇಳುವಂತೆ, “ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು ಮತ್ತು ಅವರಿಬ್ಬರು ಒಂದೇ ದೇಹವಾಗುವರು.”(C) 32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು. 33 ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.

ಮಕ್ಕಳು ಮತ್ತು ತಂದೆತಾಯಿಗಳು

ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ. ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.”(D) ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ. ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”(E)

ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.

ಸೇವಕರು ಮತ್ತು ಯಜಮಾನರು

ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು. ನೀವು ಮಾಡತಕ್ಕ ಕೆಲಸವನ್ನು ಸಂತೋಷದಿಂದ ಮಾಡಿರಿ. ಕೇವಲ ಮನುಷ್ಯರ ಸೇವೆಯನ್ನು ಮಾಡುವವರಂತೆ ಮಾಡದೆ ಪ್ರಭುವಿನ ಸೇವೆಯನ್ನು ಮಾಡುವವರಂತೆ ಮಾಡಿರಿ. ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.

ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.

ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ

10 ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ. 11 ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು. 12 ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ. 13 ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.

14 ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು 15 ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ. 16 ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು. 17 ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ. 18 ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.

19 ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ. 20 ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.

ವಂದನೆಗಳು

21 ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು. 22 ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು.

23 ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ. 24 ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International