Print Page Options
Previous Prev Day Next DayNext

Chronological

Read the Bible in the chronological order in which its stories and events occurred.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 95

95 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ!
    ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.
ಆತನಿಗೆ ಕೃತಜ್ಞತಾಸುತ್ತಿ ಮಾಡೋಣ.
    ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ!
    ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.
ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ.
ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ.
    ಭೂಮಿಯೂ ಆತನ ಕೈಕೆಲಸವೇ.
ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ.
    ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
ನಮ್ಮ ದೇವರು ಆತನೇ, ನಾವು ಆತನವರೇ.
    ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.

ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ
    ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.
ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು.
    ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು,
    ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು.
    ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು
    ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”

ಕೀರ್ತನೆಗಳು 97-99

97 ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ.
    ದೂರ ದೇಶಗಳೆಲ್ಲಾ ಹರ್ಷಿಸಲಿ.
ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ.
    ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.
ಬೆಂಕಿಯು ಆತನ ಮುಂದೆ ಹೋಗಿ
    ಆತನ ಶತ್ರುಗಳನ್ನು ನಾಶಮಾಡುವುದು.
ಆತನ ಮಿಂಚು ಆಕಾಶದಲ್ಲಿ ಹೊಳೆಯುತ್ತದೆ.
    ಜನರು ಅದನ್ನು ನೋಡಿ ಭಯಗೊಂಡಿದ್ದಾರೆ.
ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ
    ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ.
ಆಕಾಶಗಳೇ, ಆತನ ನೀತಿಯ ಕುರಿತು ಹೇಳಿರಿ!
    ದೇವರ ಮಹಿಮೆಯನ್ನು ಪ್ರತಿಯೊಬ್ಬನೂ ಕಾಣಲಿ!

ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು.
    ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು.
ಆದರೆ ಅವರು ನಾಚಿಕೆಗೀಡಾಗುವರು.
    ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.
ಚೀಯೋನೇ, ಕೇಳಿ ಸಂತೋಷಪಡು!
    ಯೆಹೂದದ ಪಟ್ಟಣಗಳೇ, ಆನಂದಿಸಿರಿ.
    ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.
ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ.
    ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.
10 ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ.
    ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು.
    ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.
11 ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.
12 ನೀತಿವಂತರೇ, ಯೆಹೋವನಲ್ಲಿ ಸಂತೋಷಪಡಿರಿ!
    ಆತನ ಪವಿತ್ರ ಹೆಸರನ್ನು ಸನ್ಮಾನಿಸಿರಿ!

ಸ್ತುತಿಗೀತೆ.

98 ಯೆಹೋವನಿಗೆ ಹೊಸಹಾಡನ್ನು ಹಾಡಿರಿ.
    ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ!
ಆತನ ಬಲಗೈಯೂ ಪರಿಶುದ್ಧ ಬಾಹುವೂ
    ಆತನಿಗೆ ಜಯವನ್ನು ಉಂಟುಮಾಡಿವೆ.
ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು.
    ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.
ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ.
    ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.
ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ.
    ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!
ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ.
    ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ.
ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ.
    ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!
ಸಮುದ್ರವೂ ಭೂಮಿಯೂ
    ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.
ನದಿಗಳೇ, ಚಪ್ಪಾಳೆ ತಟ್ಟಿರಿ!
    ಬೆಟ್ಟಗಳೇ, ಒಟ್ಟಾಗಿ ಹಾಡಿರಿ!
ಯೆಹೋವನ ಎದುರಿನಲ್ಲಿ ಹಾಡಿರಿ,
    ಯಾಕೆಂದರೆ ಆತನು ಭೂಲೋಕವನ್ನು ಆಳಲು[a] ಬರುತ್ತಿದ್ದಾನೆ.
ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ.
    ಆತನು ಜನರನ್ನು ನೀತಿಯಿಂದ ಆಳುತ್ತಾನೆ.

99 ಯೆಹೋವನೇ ರಾಜನು!
    ಜನಾಂಗಗಳು ಭಯದಿಂದ ನಡುಗಲಿ.
ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ.
    ಭೂಮಿಯು ಭಯದಿಂದ ನಡುಗಲಿ.
ಚೀಯೋನಿನ ಯೆಹೋವನು ದೊಡ್ಡವನು!
    ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ.
    ಆತನೇ ಪರಿಶುದ್ಧನು.
ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು.
    ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ.
    ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ,
    ಆತನ ಪವಿತ್ರ ಪಾದಪೀಠಕ್ಕೆ[b] ಅಡ್ಡಬೀಳಿರಿ.
ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು.
    ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು.
ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು.
    ಅವರು ಆಜ್ಞೆಗಳಿಗೆ ವಿಧೇಯರಾದರು.
    ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ.
    ನೀನು ಕ್ಷಮಿಸುವ ದೇವರೆಂದೂ
    ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ.
    ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ.
    ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International