Daily Reading for Personal Growth, 40 Days with God
ಕ್ರಿಸ್ತನ ದೇಹ
12 ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು. 13 ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.[a]
14 ದೇಹವು ಒಂದು ಅಂಗಕ್ಕಿಂತಲೂ ಹೆಚ್ಚು ಅಂಗಗಳನ್ನು ಪಡೆದಿದೆ. ಅದು ಅನೇಕ ಅಂಗಗಳನ್ನು ಪಡೆದಿದೆ. 15 ಪಾದವು, “ನಾನು ಕೈಯಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಪಾದವು ದೇಹದಿಂದ ಹೊರತಾಗಲಿಲ್ಲ. 16 ಕಿವಿಯು, “ನಾನು ಕಣ್ಣಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಕಿವಿಯು ದೇಹದಿಂದ ಹೊರತಾಗಲಿಲ್ಲ. 17 ಇಡೀ ದೇಹವೇ ಕಣ್ಣಾಗಿದ್ದರೆ, ಕೇಳಿಸಿಕೊಳ್ಳಲು ದೇಹಕ್ಕೆ ಸಾಧ್ಯವಿರುತ್ತಿರಲಿಲ್ಲ. ಇಡೀ ದೇಹವೇ ಕಿವಿಯಾಗಿದ್ದರೆ, ದೇಹವು ಯಾವುದರ ವಾಸನೆಯನ್ನೂ ತಿಳಿದುಕೊಳ್ಳಲಾಗುತ್ತಿರಲಿಲ್ಲ. 18-19 ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ. 20 ಆದ್ದರಿಂದ ಅಂಗಗಳು ಅನೇಕವಿದ್ದರೂ ದೇಹವು ಒಂದೇ.
21 ಕಣ್ಣು, “ನೀನು ನನಗೆ ಅವಶ್ಯವಿಲ್ಲ” ಎಂದು ಕೈಗೆ ಹೇಳಲಾರದು ಮತ್ತು ತಲೆಯು, “ನೀನು ನನಗೆ ಅವಶ್ಯವಿಲ್ಲ” ಎಂದು ಪಾದಕ್ಕೆ ಹೇಳಲಾರದು. 22 ಅಲ್ಲದೆ ದೇಹದಲ್ಲಿ ಬಲಹೀನವಾಗಿ ತೋರುವ ಅಂಗಗಳು ನಿಜವಾಗಿಯೂ ಬಹಳ ಅವಶ್ಯವಾಗಿವೆ. 23 ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ. 24 ಬಹು ಸುಂದರವಾದ ಅಂಗಗಳಿಗೆ ಇಂಥ ವಿಶೇಷ ಸಂರಕ್ಷಣೆಯ ಅಗತ್ಯವಿರುವುದಿಲ್ಲ. ಆದರೆ ದೇವರು ಅಂಗಗಳನ್ನು ಒಟ್ಟಾಗಿ ಸೇರಿಸಿದ್ದಾನೆ ಮತ್ತು ಕೊರತೆಯಲ್ಲಿರುವ ಅಂಗಗಳಿಗೆ ಹೆಚ್ಚಿನ ಮಾನ್ಯತೆಯನ್ನು ಕೊಟ್ಟಿದ್ದಾನೆ. 25 ನಮ್ಮ ದೇಹವು ವಿಭಜನೆಯಾಗದಂತೆ ಅಂಗಗಳು ಒಂದಕ್ಕೊಂದರ ಹಿತವನ್ನು ಸರಿಸಮನಾಗಿ ಗಮನಿಸುವಂತೆ ದೇವರು ಮಾಡಿದ್ದಾನೆ. 26 ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.
27 ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ.
Kannada Holy Bible: Easy-to-Read Version. All rights reserved. © 1997 Bible League International