Read the Gospels in 40 Days
ದೇವರ ಆಜ್ಞೆ ಮತ್ತು ಮನುಷ್ಯರ ನಿಯಮ
(ಮಾರ್ಕ 7:1-23)
15 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು, 2 “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.
3 ಯೇಸು, “ನಿಮ್ಮ ಸಂಪ್ರದಾಯಗಳನ್ನು ಅನುಸರಿಸಲು ದೇವರ ಆಜ್ಞೆಗೆ ಅವಿಧೇಯರಾಗುವುದೇಕೆ? 4 ‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’(A) ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’(B) ಎಂಬುದೂ ದೇವರ ಆಜ್ಞೆ. 5 ಆದರೆ ಒಬ್ಬ ವ್ಯಕ್ತಿಯು ತನ್ನ ತಂದೆಗಾಗಲಿ ತಾಯಿಗಾಗಲಿ ‘ನಿಮಗೆ ಸಹಾಯ ಮಾಡಲು ನನಗೆ ಸಾಧ್ಯವಿಲ್ಲ, ಏಕೆಂದರೆ ನನ್ನಲ್ಲಿರುವ ಪ್ರತಿಯೊಂದು ದೇವರಿಗೆ ಪ್ರತಿಷ್ಠಿತವಾಗಿದೆ’ ಎಂದು ಹೇಳಿದರೆ, 6 ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ. 7 ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:
8 ‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ.
ಇವರ ಮನಸ್ಸಾದರೋ ನನಗೆ ದೂರವಾಗಿದೆ.
9 ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ.
ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’(C)”
10 ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ. 11 ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.
12 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.
13 ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು. 14 ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.
15 ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.
16 ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ? 17 ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ. 18 ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. 19 ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ. 20 ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.
ಯೆಹೂದ್ಯಳಲ್ಲದ ಸ್ತ್ರೀಗೆ ಯೇಸು ಮಾಡಿದ ಸಹಾಯ
(ಮಾರ್ಕ 7:24-30)
21 ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. 22 ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
23 ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.
24 ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.
25 ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.
26 ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
27 ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.
28 ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
ಯೇಸುವಿನಿಂದ ಅನೇಕರಿಗೆ ಸ್ವಸ್ಥತೆ
29 ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.
30 ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು. 31 ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.
ನಾಲ್ಕು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ
(ಮಾರ್ಕ 8:1-10)
32 ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.
33 ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.
34 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದನು.
ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು.
35 ಆಗ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವುದಕ್ಕೆ ಆತನು ಆಜ್ಞಾಪಿಸಿ, 36 ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು. 37 ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು. 38 ಅಂದು ಊಟ ಮಾಡಿದ್ದವರಲ್ಲಿ ಗಂಡಸರೇ ಸುಮಾರು ನಾಲ್ಕುಸಾವಿರ ಮಂದಿಯಿದ್ದರು. ಇವರಲ್ಲದೆ ಹೆಂಗಸರು ಮತ್ತು ಮಕ್ಕಳು ಸಹ ಊಟಮಾಡಿದರು. 39 ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.
ಯೇಸುವನ್ನು ಪರೀಕ್ಷಿಸಲು ಯೆಹೂದ್ಯ ನಾಯಕರ ಪ್ರಯತ್ನ
(ಮಾರ್ಕ 8:11-13; ಲೂಕ 12:54-56)
16 ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
2 ಯೇಸು, “ಸೂರ್ಯನು ಮುಳುಗುವಾಗ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿದೆ. ಆಕಾಶವು ಕೆಂಪಾಗಿದ್ದರೆ, ನಮಗೆ ಒಳ್ಳೆಯ ಹವಾಮಾನವಿರುತ್ತದೆ ಎಂದು ಹೇಳುತ್ತೀರಿ. 3 ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ. 4 ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ[a] ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.
ಯೆಹೂದ್ಯನಾಯಕರ ಬಗ್ಗೆ ಯೇಸು ನೀಡಿದ ಎಚ್ಚರಿಕೆ
(ಮಾರ್ಕ 8:14-21)
5 ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು[b] ದಾಟಿ ಹೋದರು. ಆದರೆ ಶಿಷ್ಯರು ರೊಟ್ಟಿಯನ್ನು ತರಲು ಮರೆತುಬಿಟ್ಟರು. 6 ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.
7 ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.
8 ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ, 9 ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ? 10 ಏಳು ರೊಟ್ಟಿಗಳ ತುಂಡುಗಳನ್ನು ನಾಲ್ಕು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ತಿಂದು ಮುಗಿಸಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ? 11 ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.
12 ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.
ಯೇಸುವೇ ಕ್ರಿಸ್ತನೆಂದು ಪೇತ್ರನ ಪ್ರಕಟನೆ
(ಮಾರ್ಕ 8:27-30; ಲೂಕ 9:18-21)
13 ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
14 ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.
15 ಅದಕ್ಕೆ ಆತನು, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು.
16 ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.
17 ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು. 18 ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ.[c] ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು. 19 ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.
20 ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.
ಯೇಸು ತನ್ನ ಮರಣದ ಕುರಿತು ಮುಂತಿಳಿಸಿದ್ದು
(ಮಾರ್ಕ 8:31–9:1; ಲೂಕ 9:22-27)
21 ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.
22 ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.
23 ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
24 ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು. 25 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು. 26 ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು? 27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. 28 ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International