Read the Gospels in 40 Days
ಯೇಸುವಿನ ಜೀವನದ ಬಗ್ಗೆ ಲೂಕನ ಬರಹ
1 ಸನ್ಮಾನ್ಯ ಥೆಯೊಫಿಲನೇ,
ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ. 2 ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ. 3 ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ. 4 ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನಿನಗೆ ಸ್ಪಷ್ಟವಾಗಿರುವುದು.
ಜಕರೀಯ ಮತ್ತು ಎಲಿಜಬೇತ್
5 ಹೆರೋದನು[a] ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ[b] ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್. 6 ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು. 7 ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.
8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು. 9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು. 10 ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.
11 ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು. 12 ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು. 13 ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು. 14 ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು. 15 ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.[c]
16 “ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು. 17 ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ[d] ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
18 ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.
19 ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ. 20 ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
21 ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು. 22 ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು. 23 ತನ್ನ ಯಾಜಕಸೇವೆಯ ಸರದಿಯು ಮುಗಿದ ಮೇಲೆ ಜಕರೀಯನು ಮನೆಗೆ ಹಿಂತಿರುಗಿ ಹೋದನು.
24 ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ. 25 ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.
ಕನ್ಯೆ ಮರಿಯಳು
26-27 ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು. 28 ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.
29 ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.
30 ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ. 31 ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. 32 ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು. 33 ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.
34 ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು.
35 ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು. 36 ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ. 37 ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.
38 ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.
ಮರಿಯಳು ನೀಡಿದ ಸಂದರ್ಶನ
39 ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು. 40 ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. 41 ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ
42 ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ. 43 ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ! 44 ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು. 45 ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.
ಮರಿಯಳು ದೇವರನ್ನು ಸ್ತುತಿಸಿದಳು
46 ಆಗ ಮರಿಯಳು,
47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ.
ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.
48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ.
ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.
49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ.
ಆತನ ಹೆಸರು ಅತಿ ಪರಿಶುದ್ಧವಾದದ್ದು.
50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.
51 ಆತನು ತನ್ನ ಭುಜಬಲವನ್ನು ತೋರಿ
ಗರ್ವಿಷ್ಠರನ್ನು ಚದರಿಸುತ್ತಾನೆ.
52 ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ
ದೀನರನ್ನು ಉನ್ನತಿಗೇರಿಸುತ್ತಾನೆ.
53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ
ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.
54 ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ
ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ
55 ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.
56 ಮರಿಯಳು ಸುಮಾರು ಮೂರು ತಿಂಗಳ ಕಾಲ ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂತಿರುಗಿದಳು.
ಯೋಹಾನನ ಜನನ
57 ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು. 58 ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
59 ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು. 60 ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು.
61 ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು. 62 ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು.
63 ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು. 64 ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು. 65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು. 66 ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.
ಜಕರೀಯನ ಪ್ರವಾದನೆ
67 ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:
68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
69 ತನ್ನ ಸೇವಕನಾದ ದಾವೀದನ ಮನೆತನದಿಂದ
ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.
70 ಇದನ್ನು ಆತನು ಪೂರ್ವಕಾಲದ
ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
74-75 ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು
ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.
76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.
78 “ನಮ್ಮ ದೇವರ ಮಹಾಕರುಣೆಯಿಂದ
ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”
80 ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.
ಯೇಸುವಿನ ಜನನ
(ಮತ್ತಾಯ 1:18-25)
2 ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು. 2 ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು. 3 ಜನರೆಲ್ಲರೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ತಮ್ಮತಮ್ಮ ಊರುಗಳಿಗೆ ಪ್ರಯಾಣ ಮಾಡಿದರು.
4 ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು. 5 ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.) 6 ಅವರು ಬೆತ್ಲೆಹೇಮಿನಲ್ಲಿದ್ದಾಗ ಮರಿಯಳಿಗೆ ಹೆರಿಗೆಕಾಲ ಬಂತು. 7 ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.
ಕುರುಬರಿಗೆ ದೊರೆತ ಸಂದೇಶ
8 ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು. 9 ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು. 10 ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: 11 ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು. 12 ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.
13 ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,
14 “ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ;
ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ”
ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.
15 ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.
16 ಆದ್ದರಿಂದ ಕುರುಬರು ಬೇಗನೆ ಹೋಗಿ ಮರಿಯಳನ್ನೂ ಯೋಸೇಫನನ್ನೂ ದನದ ಕೊಟ್ಟಿಗೆಯಲ್ಲಿ ಮಲಗಿದ್ದ ಮಗುವನ್ನೂ ಕಂಡುಕೊಂಡರು. 17 ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು. 18 ಕುರುಬರು ತಿಳಿಸಿದ್ದನ್ನು ಕೇಳಿದ ಅವರೆಲ್ಲರೂ ಆಶ್ಚರ್ಯಪಟ್ಟರು. 19 ಮರಿಯಳು ಈ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು, ಅವುಗಳ ಬಗ್ಗೆ ಯೋಚಿಸತೊಡಗಿದಳು. 20 ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.
21 ಮಗುವಿಗೆ ಎಂಟು ದಿನವಾದಾಗ ಸುನ್ನತಿ[e] ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.
ದೇವಾಲಯದಲ್ಲಿ ಯೇಸುವಿನ ಪ್ರತಿಷ್ಠೆ
22 ಶುದ್ಧೀಕರಣದ[f] ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು. 23 ಏಕೆಂದರೆ “ಪ್ರತಿ ಕುಟುಂಬದಲ್ಲಿ, ‘ಚೊಚ್ಚಲು ಗಂಡುಮಗುವನ್ನು ಪ್ರಭುವಿಗೆ ಪ್ರತಿಷ್ಠಿಸಬೇಕು’”[g] ಎಂದು ಪ್ರಭುವಿನ ಧರ್ಮಶಾಸ್ತ್ರದಲ್ಲಿ ಬರೆದಿದೆ. 24 “ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು”(A) ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
ಸಿಮೆಯೋನನು ಯೇಸುವನ್ನು ನೋಡಿದನು
25 ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು. 26 ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು. 27 ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು. 28 ಸಿಮೆಯೋನನು ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರಿಗೆ ಹೀಗೆಂದು ಸ್ತೋತ್ರ ಸಲ್ಲಿಸಿದನು:
29 “ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.
30 ನೀನು ದಯಪಾಲಿಸಿದ ರಕ್ಷಕನನ್ನು[h] ಕಣ್ಣಾರೆಕಂಡೆನು.
31 ನೀನು ಆತನನ್ನು ಜನರೆಲ್ಲರಿಗೆ ಪ್ರತ್ಯಕ್ಷ ಮಾಡಿರುವೆ.
32 ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ.
ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”
33 ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು. 34 ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು. 35 ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.
ಅನ್ನಳು ಯೇಸುವನ್ನು ನೋಡಿದಳು
36 ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ[i] ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು. 37 ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.
38 ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.
ಯೋಸೇಫನು ಮತ್ತು ಮರಿಯಳು ಮನೆಗೆ ಮರಳಿದರು
39 ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು. 40 ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.
ಬಾಲಕ ಯೇಸು
41 ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ[j] ಜೆರುಸಲೇಮಿಗೆ ಹೋಗುತ್ತಿದ್ದರು. 42 ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು. 43 ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ 44 ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು. 45 ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು.
46 ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು. 47 ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು. 48 ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.
49 ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು. 50 ಆದರೆ ಆತನ ಮಾತು ಅವರಿಗೆ ಅರ್ಥವಾಗಲಿಲ್ಲ.
51 ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು. 52 ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.
ಯೋಹಾನನ ಬೋಧನೆ
(ಮತ್ತಾಯ 3:1-12; ಮಾರ್ಕ 1:1-8; ಯೋಹಾನ 1:19-28)
3 ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು.
ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ
ಹೆರೋದನು ಗಲಿಲಾಯಕ್ಕೂ
ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ
ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.
2 ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು.[k] ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು. 3 ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು. 4 ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ:
“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ.
ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
5 ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು.
ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು.
ಡೊಂಕಾದ ದಾರಿಗಳು ನೀಟಾಗುವವು.
ಕೊರಕಲಾದ ದಾರಿಗಳು ಸಮವಾಗುವವು.
6 ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’
ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”(B)
7 ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? 8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ. 9 ಮರಗಳನ್ನು ಕಡಿಯುವುದಕ್ಕೆ ಕೊಡಲಿಯು ಸಿದ್ಧವಾಗಿದೆ. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನು ಕತ್ತರಿಸಿ ಬೆಂಕಿಯಲ್ಲಿ ಹಾಕಲಾಗುವುದು” ಎಂದು ಹೇಳಿದನು.
10 ಆದ್ದರಿಂದ ಜನರು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.
11 ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.
12 ಸುಂಕವಸೂಲಿಗಾರರು[l] ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.
13 ಯೋಹಾನನು ಅವರಿಗೆ, “ನೇಮಕವಾದ ತೆರಿಗೆಗಿಂತ ಹೆಚ್ಚಾಗಿ ಜನರಿಂದ ತೆಗೆದುಕೊಳ್ಳಬೇಡಿರಿ” ಎಂದು ಹೇಳಿದನು.
14 ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು.
ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
15 ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.
16 ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು. 17 ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ[m] ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು. 18 ಯೋಹಾನನು ಜನರಿಗೆ ಇನ್ನೂ ಅನೇಕ ವಿಷಯಗಳನ್ನು ಹೇಳಿ ಪ್ರೋತ್ಸಾಹಿಸುತ್ತಾ ಸುವಾರ್ತೆಯನ್ನು ಬೋಧಿಸುತ್ತಿದ್ದನು.
ಯೋಹಾನನ ಸೇವೆಯ ಅಂತ್ಯ
19 ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು. 20 ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.
ಯೋಹಾನನಿಂದ ಯೇಸುವಿನ ದೀಕ್ಷಾಸ್ನಾನ
(ಮತ್ತಾಯ 3:13-17; ಮಾರ್ಕ 1:9-11)
21 ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು. 22 ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
ಯೋಸೇಫನ ಕುಟುಂಬ ಚರಿತ್ರೆ
(ಮತ್ತಾಯ 1:1-17)
23 ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು.
ಯೋಸೇಫನು ಹೇಲಿಯ ಮಗನು.
24 ಹೇಲಿಯು ಮತ್ತಾತನ ಮಗನು.
ಮತ್ತಾತನು ಲೇವಿಯ ಮಗನು.
ಲೇವಿಯು ಮೆಲ್ಕಿಯ ಮಗನು.
ಮೆಲ್ಕಿಯು ಯನ್ನಾಯನ ಮಗನು.
ಯನ್ನಾಯನು ಯೋಸೇಫನ ಮಗನು.
25 ಯೋಸೇಫನು ಮತ್ತಥೀಯನ ಮಗನು.
ಮತ್ತಥೀಯನು ಆಮೋಸನ ಮಗನು.
ಆಮೋಸನು ನಹೂಮನ ಮಗನು.
ನಹೂಮನು ಎಸ್ಲಿಯ ಮಗನು.
ಎಸ್ಲಿಯು ನಗ್ಗಾಯನ ಮಗನು.
26 ನಗ್ಗಾಯನು ಮಹಾಥತನ ಮಗನು.
ಮಹಾಥತನು ಮತ್ತಥೀಯನ ಮಗನು.
ಮತ್ತಥೀಯನು ಶಿಮೀಯನ ಮಗನು.
ಶಿಮೀಯನು ಯೋಸೇಖನ ಮಗನು.
ಯೋಸೇಖನು ಯೂದನ ಮಗನು.
27 ಯೂದನು ಯೋಹಾನನ ಮಗನು.
ಯೋಹಾನನು ರೇಸನ ಮಗನು.
ರೇಸನು ಜೆರುಬಾಬೆಲನ ಮಗನು.
ಜೆರುಬಾಬೆಲನು ಸಲಥಿಯೇಲನ ಮಗನು.
ಸಲಥಿಯೇಲನು ಸೇರಿಯ ಮಗನು.
28 ಸೇರಿಯು ಮೆಲ್ಕಿಯ ಮಗನು.
ಮೆಲ್ಕಿಯು ಅದ್ದಿಯ ಮಗನು.
ಅದ್ದಿಯು ಕೋಸಾಮನ ಮಗನು.
ಕೋಸಾಮನು ಎಲ್ಮದಾಮನ ಮಗನು.
ಎಲ್ಮದಾಮನು ಏರನ ಮಗನು.
29 ಏರನು ಯೆಹೋಷುವನ ಮಗನು.
ಯೆಹೋಷುವನು ಎಲಿಯೇಜರನ ಮಗನು.
ಎಲಿಯೇಜರನು ಯೋರೈವುನ ಮಗನು.
ಯೋರೈವುನು ಮತ್ತಾತನ ಮಗನು.
ಮತ್ತಾತನು ಲೇವಿಯ ಮಗನು.
30 ಲೇವಿಯು ಸಿಮೆಯೋನನ ಮಗನು.
ಸಿಮೆಯೋನನು ಯೂದನ ಮಗನು.
ಯೂದನು ಯೋಸೇಫನ ಮಗನು.
ಯೋಸೇಫನು ಯೊನಾವುನ ಮಗನು.
ಯೊನಾವುನು ಎಲಿಯಕೀಮನ ಮಗನು.
31 ಎಲಿಯಕೀಮನು ಮೆಲೆಯನ ಮಗನು.
ಮೆಲೆಯನು ಮೆನ್ನನ ಮಗನು.
ಮೆನ್ನನು ಮತ್ತಾಥನ ಮಗನು.
ಮತ್ತಾಥನು ನಾತಾನನ ಮಗನು.
ನಾತಾನನು ದಾವೀದನ ಮಗನು.
32 ದಾವೀದನು ಇಷಯನ ಮಗನು.
ಇಷಯನು ಓಬೇದನ ಮಗನು.
ಓಬೇದನು ಬೋವಜನ ಮಗನು.
ಬೋವಜನು ಸಲ್ಮೋನನ ಮಗನು.
ಸಲ್ಮೋನನು ನಹಸ್ಸೋನನ ಮಗನು.
33 ನಹಸ್ಸೋನನು ಅಮ್ಮಿನಾದ್ವಾನ ಮಗನು.
ಅಮ್ಮಿನಾದ್ವಾನು ಅದ್ಮಿನನ ಮಗನು.
ಅದ್ಮಿನನು ಅರ್ನೈಯನ ಮಗನು.
ಅರ್ನೈಯನು ಹೆಸ್ರೋನನ ಮಗನು.
ಹೆಸ್ರೋನನು ಪೆರೆಸನ ಮಗನು.
ಪೆರೆಸನು ಯೂದನ ಮಗನು.
34 ಯೂದನು ಯಾಕೋಬನ ಮಗನು.
ಯಾಕೋಬನು ಇಸಾಕನ ಮಗನು.
ಇಸಾಕನು ಅಬ್ರಹಾಮನ ಮಗನು.
ಅಬ್ರಹಾಮನು ತೇರಹನ ಮಗನು.
ತೇರಹನು ನಹೋರನ ಮಗನು.
35 ನಹೋರನು ಸೆರೂಗನ ಮಗನು.
ಸೆರೂಗನು ರೆಗೂವನ ಮಗನು.
ರೆಗೂವನು ಪೆಲೆಗನ ಮಗನು.
ಪೆಲೆಗನು ಎಬರನ ಮಗನು.
ಎಬರನು ಸಾಲನ ಮಗನು.
36 ಸಾಲನು ಕಯಿನನ ಮಗನು.
ಕಯಿನನು ಅರ್ಪಕ್ಷದನ ಮಗನು.
ಅರ್ಪಕ್ಷದನು ಶೇಮನ ಮಗನು.
ಶೇಮನು ನೋಹನ ಮಗನು.
ನೋಹನು ಲಾಮೆಕನ ಮಗನು.
37 ಲಾಮೆಕನು ಮೆತೂಷಲನ ಮಗನು.
ಮೆತೂಷಲನು ಹನೋಕನ ಮಗನು.
ಹನೋಕನು ಯೆರೆದನ ಮಗನು.
ಯೆರೆದನು ಮಹಲಲೇಲನ ಮಗನು.
ಮಹಲಲೇಲನು ಕಯಿನಾನನ ಮಗನು.
38 ಕಯಿನಾನನು ಎನೋಷನ ಮಗನು.
ಎನೋಷನು ಸೇಥನ ಮಗನು.
ಸೇಥನು ಆದಾಮನ ಮಗನು.
ಆದಾಮನು ದೇವರ ಮಗನು.
Kannada Holy Bible: Easy-to-Read Version. All rights reserved. © 1997 Bible League International