Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮತ್ತಾಯ 23:1-22

ಯೇಸು ಧಾರ್ಮಿಕ ನಾಯಕರನ್ನು ಖಂಡಿಸಿದನು

(ಮಾರ್ಕ 12:38-40; ಲೂಕ 11:37-52; 20:45-47)

23 ಬಳಿಕ ಯೇಸು ನೆರೆದಿದ್ದ ಜನರೊಂದಿಗೂ ತನ್ನ ಶಿಷ್ಯರೊಂದಿಗೂ ಮಾತಾಡಿ ಹೇಳಿದ್ದೇನೆಂದರೆ: “ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ. ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ. ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೋ ಆ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ.

“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ. ಆ ಫರಿಸಾಯರು ಮತ್ತು ಧರ್ಮೋಪದೇಶಕರು ಔತಣಗಳಲ್ಲಿ ಹಾಗೂ ಸಭಾಮಂದಿರಗಳಲ್ಲಿ ಅತಿ ಪ್ರಾಮುಖ್ಯವಾದ ಸ್ಥಾನಗಳನ್ನು ಅಪೇಕ್ಷಿಸುತ್ತಾರೆ. ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.

“ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು. ಈ ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ. 10 ‘ಗುರು’ವೆಂದೂ ಕರೆಸಿಕೊಳ್ಳಬೇಡಿ. ನಿಮಗೆ ಕ್ರಿಸ್ತನೊಬ್ಬನೇ ಗುರು. 11 ಸೇವಕನಂತೆ ನಿಮಗೆ ಸೇವೆ ಮಾಡುವವನೇ ನಿಮ್ಮಲ್ಲಿ ಅತ್ಯಂತ ದೊಡ್ಡವನಾಗಿದ್ದಾನೆ. 12 ತಾನು ಬೇರೆಯವರಿಗಿಂತ ಉತ್ತಮನೆಂದು ತನ್ನನ್ನು ಭಾವಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಉನ್ನತಿಗೇರಿಸಲ್ಪಡುವನು.

13 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ. 14 [a]

15 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.

16 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ! 17 ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.

18 “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ. 19 ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು. 20 ಯಜ್ಞವೇದಿಕೆಯ ಮೇಲೆ ವಾಗ್ದಾನ ಮಾಡುವವನು ಯಜ್ಞವೇದಿಕೆಯ ಮತ್ತು ಅದರ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದಂತಾಯಿತು. 21 ದೇವಾಲಯದ ಮೇಲೆ ವಾಗ್ದಾನ ಮಾಡುವವನು ನಿಜವಾಗಿಯೂ ದೇವಾಲಯದ ಮತ್ತು ಅದರೊಳಗೆ ವಾಸವಾಗಿರುವಾತನ ಮೇಲೆ ವಾಗ್ದಾನ ಮಾಡಿದಂತಾಯಿತು. 22 ಪರಲೋಕದ ಮೇಲೆ ವಾಗ್ದಾನ ಮಾಡುವವನು ದೇವರ ಸಿಂಹಾಸನದ ಮೇಲೆಯೂ ಆ ಸಿಂಹಾಸನದ ಮೇಲೆ ಕುಳಿತಿರುವಾತನ ಮೇಲೆಯೂ ವಾಗ್ದಾನ ಮಾಡಿದಂತಾಯಿತು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International