Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ರೋಮ್ನಗರದವರಿಗೆ 8:1-21

ಪವಿತ್ರಾತ್ಮನಿಗೆ ಅಧೀನವಾದ ಜೀವಿತ

ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ. ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು. ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು. ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು.

ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ. ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ. ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ. ತಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಪಟ್ಟಿರುವ ಆ ಜನರು ದೇವರನ್ನು ಮೆಚ್ಚಿಸಲು ಸಾಧ್ಯವಿಲ್ಲ.

ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ. 10 ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ. 11 ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.

12 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು. 13 ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.

14 ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ. 15 ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ. 16 ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ. 17 ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಭವಿಷ್ಯತ್ತಿನಲ್ಲಿ ನಮಗೆ ಮಹಿಮೆ ದೊರೆಯುವುದು

18 ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ. 19 ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ. 20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ: 21 ಸರ್ವಸೃಷ್ಟಿಯು ನಾಶನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಸ್ವಾತಂತ್ರವನ್ನೂ ಮಹಿಮೆಯನ್ನೂ ಹೊಂದಿಕೊಳ್ಳುತ್ತದೆ ಎಂಬುದೇ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International