New Testament in a Year
ಯೇಸು ತನ್ನ ಶಿಷ್ಯರ ಪಾದಗಳನ್ನು ತೊಳೆಯುವನು
13 ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
2 ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.) 3 ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು. 4 ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು. 5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
6 ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.
7 ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
8 ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು.
ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.
9 ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.
10 ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು. 11 ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
12 ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಹೀಗೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ? 13 ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು. 14 ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು. 15 ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು. 16 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. 17 ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.
18 “ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’[a] ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು. 19 ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ. 20 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
Kannada Holy Bible: Easy-to-Read Version. All rights reserved. © 1997 Bible League International