New Testament in a Year
29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?
30 ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ? 31 ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ. 32 ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”
33 ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.” 34 ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.
ಯಾವ ಬಗೆಯ ದೇಹವನ್ನು ನಾವು ಹೊಂದಿಕೊಳ್ಳುವೆವು?
35 “ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?” ಎಂದು ಕೆಲವರು ಕೇಳಬಹುದು. 36 ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು. 37 ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು. 38 ಅದರೆ ದೇವರು ತನ್ನ ಯೋಜನೆಗನುಸಾರವಾಗಿ ಅದಕ್ಕೆ ದೇಹವನ್ನು ಕೊಡುತ್ತಾನೆ ಮತ್ತು ದೇವರು ಪ್ರತಿಯೊಂದು ಬಗೆಯ ಬೀಜಕ್ಕೆ ಅದರದೇ ಆದ ದೇಹವನ್ನು ಕೊಡುತ್ತಾನೆ. 39 ಎಲ್ಲಾ ಶರೀರಗಳು ಒಂದೇ ರೀತಿಯ ಮಾಂಸವನ್ನು ಹೊಂದಿರುವುದಿಲ್ಲ. ಜನರಿಗೆ ಒಂದು ಬಗೆಯ ಮಾಂಸವಿರುತ್ತದೆ; ಪ್ರಾಣಿಗಳಿಗೆ ಮತ್ತೊಂದು ಬಗೆಯ ಮಾಂಸವಿರುತ್ತದೆ; ಪಕ್ಷಿಗಳಿಗೆ ಇನ್ನೊಂದು ಬಗೆಯ ಮಾಂಸವಿರುತ್ತದೆ. ಮೀನುಗಳು ಬೇರೊಂದು ರೀತಿಯ ಮಾಂಸವನ್ನು ಹೊಂದಿರುತ್ತವೆ. 40 ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ. 41 ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.
42 ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ. 43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ. 44 ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದುಬಂದಾಗ, ಆತ್ಮಿಕ ದೇಹವಾಗಿರುತ್ತದೆ.
ಭೌತಿಕ ದೇಹವಿದೆ. ಆದ್ದರಿಂದ ಆತ್ಮಿಕ ದೇಹವೂ ಇದೆ. 45 “ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು”(A) ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು. 46 ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು. 47 ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು. 48 ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ. 49 ಭೂಮಿಯ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಂಡೆವು. ಆದ್ದರಿಂದ ಪರಲೋಕದ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಳ್ಳುವೆವು.
50 ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. 51 ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು. 52 ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು. 53 ಅಳಿದುಹೋಗುವ ಈ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು. 54 ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ:
“ಮರಣವು ಜಯದಲ್ಲಿ ನುಂಗಿಯೇಹೋಯಿತು.”(B)
55 “ಮರಣವೇ, ನಿನ್ನ ಜಯವೆಲ್ಲಿ?
ಮರಣವೇ, ಕೇಡುಮಾಡುವ ನಿನ್ನ ಶಕ್ತಿ ಎಲ್ಲಿ?”(C)
56 ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ. 57 ಆದರೆ ನಾವು ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನು ನಮಗೆ ಜಯವನ್ನು ಕೊಡುತ್ತಾನೆ.
58 ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.
Kannada Holy Bible: Easy-to-Read Version. All rights reserved. © 1997 Bible League International