Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮತ್ತಾಯ 7

ತೀರ್ಪು ಮಾಡುವುದರ ಕುರಿತು ಯೇಸುವಿನ ಉಪದೇಶ

(ಲೂಕ 6:37-38,41-42)

“ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ. ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.

“ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ? ‘ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯುವೆನು’ ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ. ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.

“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.

ಪ್ರಾರ್ಥನೆಯ ಪ್ರತಿಫಲ

(ಲೂಕ 11:9-13)

“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು. ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.

“ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೋ? 10 ಮೀನನ್ನು ಕೇಳಿದರೆ, ಹಾವನ್ನು ಕೊಡುವಿರೋ? 11 ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.

ಬಹಳ ಮುಖ್ಯ ನಿಯಮ

12 “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.

ನಿತ್ಯಜೀವದ ದಾರಿ ಕಷ್ಟಕರ

(ಲೂಕ 13:24)

13 “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ. 14 ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.

ಜನರ ನಡತೆಯನ್ನು ಗಮನಿಸಿ

(ಲೂಕ 6:43-44; 13:25-27)

15 “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ. 16 ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ. 17 ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ. 18 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು. 20 ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ.

21 “‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು. 22 ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು. 23 ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.

ಬುದ್ಧಿವಂತ ಮತ್ತು ಬುದ್ಧಿಹೀನ

(ಲೂಕ 6:47-49)

24 “ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ. 25 ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.

26 “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು. 27 ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”

28 ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು. 29 ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International