Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮತ್ತಾಯ 10:1-20

ಯೇಸು ಅಪೊಸ್ತಲರಿಗೆ ಕೊಟ್ಟ ಆದೇಶ

(ಮಾರ್ಕ 3:13-19; 6:7-13; ಲೂಕ 6:12-16; 9:1-6)

10 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ:

ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು

ಇವನ ಸಹೋದರ ಅಂದ್ರೆಯ,

ಜೆಬೆದಾಯನ ಮಗನಾದ ಯಾಕೋಬ,

ಅವನ ಸಹೋದರ ಯೋಹಾನ,

ಫಿಲಿಪ್ಪ

ಮತ್ತು ಬಾರ್ತೊಲೊಮಾಯ,

ತೋಮ,

ಸುಂಕವಸೂಲಿಗಾರನಾಗಿದ್ದ ಮತ್ತಾಯ,

ಅಲ್ಛಾಯನ ಮಗನಾದ ಯಾಕೋಬ,

ತದ್ದಾಯ,

ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ

ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.

ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ. ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ, ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ. ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ. ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. 10 ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.

11 “ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ. 12 ಆ ಮನೆಗೆ ನೀವು ಪ್ರವೇಶಿಸಿದಾಗ, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ. 13 ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ. 14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. 15 ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಹಿಂಸೆಯ ಕುರಿತು ಯೇಸುವಿನ ಎಚ್ಚರಿಕೆ

(ಮಾರ್ಕ 13:9-13; ಲೂಕ 21:12-17)

16 “ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ. 17 ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. 18 ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ. 19 ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು. 20 ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International