New Testament in a Year
ಕೆಲವು ಯೆಹೂದ್ಯರು ಯೇಸುವಿನ ಕುರಿತು ಮಾಡಿದ ಟೀಕೆ
(ಮಾರ್ಕ 2:23-28; ಲೂಕ 6:1-5)
12 ಅಂದು ಸಬ್ಬತ್ ದಿನ. ಯೇಸು ಧಾನ್ಯದ ಹೊಲಗಳ ಮಾರ್ಗವಾಗಿ ನಡೆದುಹೋಗುತ್ತಿದ್ದನು. ಯೇಸುವಿನ ಶಿಷ್ಯರು ಆತನೊಂದಿಗಿದ್ದರು. ಅವರು ಹಸಿದಿದ್ದರು. ಆದ್ದರಿಂದ ಶಿಷ್ಯರು ತೆನೆಗಳನ್ನು ಕಿತ್ತುಕೊಂಡು ತಿನ್ನತೊಡಗಿದರು. 2 ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.
3 ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ? 4 ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು. 5 ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ? 6 ಆದರೆ ದೇವಾಲಯಕ್ಕಿಂತಲೂ ಹೆಚ್ಚಿನವನು ಇಲ್ಲಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ. 7 ‘ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು’(A) ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.
8 “ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.
ಕೈಬತ್ತಿದವನಿಗೆ ಆರೋಗ್ಯದಾನ
(ಮಾರ್ಕ 3:1-6; ಲೂಕ 6:6-11)
9 ಯೇಸು ಆ ಸ್ಥಳವನ್ನು ಬಿಟ್ಟು ಅವರ ಸಭಾಮಂದಿರದೊಳಕ್ಕೆ ಹೋದನು. 10 ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.
11 ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ. 12 ಮನುಷ್ಯನು ಕುರಿಗಿಂತ ಎಷ್ಟೋ ಬೆಲೆಯುಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್‌ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರಕೊಟ್ಟನು.
13 ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು. 14 ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.
ಯೇಸು ದೇವರಿಂದ ಆರಿಸಲ್ಪಟ್ಟ ಸೇವಕ
15 ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು. 16 ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು. 17 ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ:
18 “ಇಗೋ, ನನ್ನ ಸೇವಕನು.
ನಾನು ಆತನನ್ನು ಆರಿಸಿಕೊಂಡಿದ್ದೇನೆ.
ಆತನನ್ನು ಪ್ರೀತಿಸುತ್ತೇನೆ,
ಆತನನ್ನು ಮೆಚ್ಚಿದ್ದೇನೆ.
ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು.
ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.
19 ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ.
ಬೀದಿಗಳಲ್ಲಿ ಆತನ ಶಬ್ದ ಕೇಳಿಸುವುದಿಲ್ಲ.
20 ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ;
ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ.
ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.
21 ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.”(B)
ಯೇಸುವಿನ ಅಧಿಕಾರ ದೇವರದೇ
(ಮಾರ್ಕ 3:20-30; ಲೂಕ 11:14-23; 12:10)
22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು. 23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.
Kannada Holy Bible: Easy-to-Read Version. All rights reserved. © 1997 Bible League International