Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮತ್ತಾಯ 19

ವಿವಾಹ ವಿಚ್ಛೇದನದ ಕುರಿತು ಯೇಸುವಿನ ಬೋಧನೆ

(ಮಾರ್ಕ 10:1-12)

19 ಯೇಸು ಈ ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು. ಯೇಸುವನ್ನು ಅನೇಕ ಜನರು ಹಿಂಬಾಲಿಸಿದರು. ಯೇಸು ಅಲ್ಲಿ ರೋಗಿಗಳನ್ನು ಗುಣಪಡಿಸಿದನು.

ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.

ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.’(A) ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’(B) ಎಂದು ಹೇಳಿದನು. ಆದ್ದರಿಂದ ಇವರಿಬ್ಬರು ಇನ್ನು ಮೇಲೆ ಇಬ್ಬರಲ್ಲ, ಒಬ್ಬರೇ. ಅವರಿಬ್ಬರನ್ನು ದೇವರೇ ಒಟ್ಟಿಗೆ ಕೂಡಿಸಿದ್ದಾನೆ. ಆದ್ದರಿಂದ ಯಾವ ಮನುಷ್ಯನೂ ಅವರನ್ನು ಪ್ರತ್ಯೇಕಿಸಬಾರದು” ಎಂದು ಉತ್ತರಕೊಟ್ಟನು.

ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.[a]

ಯೇಸು, “ನೀವು ದೇವರ ಬೋಧನೆಯನ್ನು ಸ್ವೀಕರಿಸದಿದ್ದ ಕಾರಣ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಮೋಶೆ ಅವಕಾಶಕೊಟ್ಟನು. ಆದರೆ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ಆರಂಭದಲ್ಲಿ ಅವಕಾಶ ಇರಲಿಲ್ಲ. ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.

10 ಶಿಷ್ಯರು ಯೇಸುವಿಗೆ, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡಲು ಇದೊಂದೇ ಕಾರಣವಾಗಿದ್ದರೆ, ಮದುವೆ ಆಗದಿರುವುದೇ ಉತ್ತಮ” ಎಂದರು.

11 ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ. 12 ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.

ಯೇಸುವಿನಿಂದ ಮಕ್ಕಳಿಗೆ ಸ್ವಾಗತ

(ಮಾರ್ಕ 10:13-16; ಲೂಕ 18:15-17)

13 ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು. 14 ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು. 15 ನಂತರ ಯೇಸು ತನ್ನ ಕೈಗಳನ್ನು ಮಕ್ಕಳ ಮೇಲೆ ಇಟ್ಟು ಆಶೀರ್ವದಿಸಿದನು. ಬಳಿಕ ಅಲ್ಲಿಂದ ಹೊರಟುಹೋದನು.

ಧನಿಕ ಯುವಕನ ಸಮಸ್ಯೆ

(ಮಾರ್ಕ 10:17-31; ಲೂಕ 18:18-30)

16 ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವ ಹೊಂದಲು ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

17 ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.

18 ಆ ಮನುಷ್ಯನು, “ಯಾವ ಆಜ್ಞೆಗಳು?” ಎಂದು ಕೇಳಿದನು.

ಯೇಸು “ಕೊಲೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. 19 ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು”(C) ಎಂದು ಉತ್ತರಕೊಟ್ಟನು.

20 ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು.

21 ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.

22 ಇದನ್ನು ಕೇಳಿದಾಗ ಅವನು ಬಹಳ ದುಃಖದಿಂದ ಹೊರಟುಹೋದನು. ಏಕೆಂದರೆ ಅವನು ದೊಡ್ಡ ಐಶ್ವರ್ಯವಂತನಾಗಿದ್ದನು.

23 ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ. 24 ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.

25 ಶಿಷ್ಯರು ಇದನ್ನು ಕೇಳಿ ಬಹಳ ಆಶ್ಚರ್ಯದಿಂದ, “ಹಾಗಾದರೆ ಯಾರು ರಕ್ಷಣೆ ಹೊಂದಬಲ್ಲರು?” ಎಂದು ಕೇಳಿದರು.

26 ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.

27 ಪೇತ್ರನು ಯೇಸುವಿಗೆ, “ನಾವು ನಮಗಿದ್ದ ಪ್ರತಿಯೊಂದನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು. ನಮಗೆ ಏನು ದೊರಕುವುದು” ಎಂದನು.

28 ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. 29 ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ. 30 ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International