New Testament in a Year
23 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು. 24 ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.
25 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ. 26 ಫರಿಸಾಯರೇ, ನೀವು ಕುರುಡರು! ಮೊದಲು ಬಟ್ಟಲಿನ ಒಳಭಾಗವನ್ನು ಚೆನ್ನಾಗಿ ಶುಚಿಮಾಡಿರಿ. ಆಗ ಬಟ್ಟಲಿನ ಹೊರಭಾಗವು ನಿಜವಾಗಿಯೂ ಶುಚಿಯಾಗಿರುವುದು.
27 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ. 28 ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.
29 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ. 30 ‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ. 31 ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ. 32 ನಿಮ್ಮ ಪಿತೃಗಳು ಪ್ರಾರಂಭಿಸಿದ ಆ ಪಾಪವನ್ನು ನೀವು ಪೂರ್ತಿಮಾಡುವಿರಿ!
33 “ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ! 34 ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.
35 “ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು. 36 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದಲ್ಲಿ ಜೀವಿಸುತ್ತಿರುವ ನಿಮ್ಮ ಮೇಲೆ ಈ ಅಪರಾಧಗಳೆಲ್ಲಾ ಬರುತ್ತವೆ.
ಜೆರುಸಲೇಮಿನ ಜನರಿಗೆ ಯೇಸು ನೀಡಿದ ಎಚ್ಚರಿಕೆ
(ಲೂಕ 13:34-35)
37 “ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ. 38 ಈಗ ನಿನ್ನ ಮನೆಯು ಸಂರ್ಪೂಣವಾಗಿ ಬರಿದಾಗಿಬಿಟ್ಟಿದೆ. 39 ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’(A) ಎಂದು ನೀನು ಹೇಳುವ ತನಕ ನನ್ನನ್ನು ನೋಡುವುದೇ ಇಲ್ಲ.”
Kannada Holy Bible: Easy-to-Read Version. All rights reserved. © 1997 Bible League International