Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮಾರ್ಕ 10:1-31

ವಿವಾಹವಿಚ್ಛೇದನದ ಬಗ್ಗೆ ಯೇಸುವಿನ ಉಪದೇಶ

(ಮತ್ತಾಯ 19:1-12)

10 ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.

ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ಪರೀಕ್ಷಿಸಲು, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.

ಯೇಸು, “ಮೋಶೆ ನಿಮಗೆ ಏನು ಆಜ್ಞಾಪಿಸಿದ್ದಾನೆ?” ಎಂದು ಉತ್ತರಿಸಿದನು.

ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.[a]

ಯೇಸು, “ನಿಮ್ಮ ಮೊಂಡುತನದ ನಿಮಿತ್ತ ಮೋಶೆಯು ನಿಮಗೆ ಆ ಆಜ್ಞೆಯನ್ನು ಕೊಟ್ಟನು. ಆದರೆ ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ನಿರ್ಮಿಸಿದನು.’(A) ‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಮತ್ತು ಅವರಿಬ್ಬರು ಒಂದೇ ಶರೀರವಾಗುವರು.’(B) ಆದ್ದರಿಂದ ಅವರು ಇಬ್ಬರಲ್ಲ, ಒಬ್ಬರೇ. ಹೀಗಿರಲು ದೇವರು ಸೇರಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.

10 ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು. 11 ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ. 12 ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.

ಚಿಕ್ಕ ಮಕ್ಕಳಿಗೆ ಯೇಸುವಿನ ಆಶೀರ್ವಾದ

(ಮತ್ತಾಯ 19:13-15; ಲೂಕ 18:15-17)

13 ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು. 14 ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ. 15 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು. 16 ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.

ಯೇಸುವನ್ನು ಹಿಂಬಾಲಿಸಲು ಹಿಂಜರಿದ ಶ್ರೀಮಂತ

(ಮತ್ತಾಯ 19:16-30; ಲೂಕ 18:18-30)

17 ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.

18 ಯೇಸು ಅದಕ್ಕೆ, “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ಯಾವ ಮನುಷ್ಯನೂ ಒಳ್ಳೆಯವನಲ್ಲ. ದೇವರು ಮಾತ್ರ ಒಳ್ಳೆಯವನು. 19 ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು.

20 ಅವನು, “ಉಪದೇಶಕನೇ, ನಾನು ಬಾಲ್ಯದಿಂದಲೂ ಈ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ” ಎಂದನು.

21 ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

22 ಯೇಸುವಿನ ಈ ಮಾತನ್ನು ಕೇಳಿ ಅವನು ನಿರಾಶೆಯಿಂದ ದುಃಖಗೊಂಡು ಹೊರಟುಹೋದನು. ಬಹಳ ಧನವಂತನಾಗಿದ್ದ ಅವನು ತನ್ನ ಅಪಾರ ಆಸ್ತಿಯನ್ನು ಮಾರಲು ಇಷ್ಟಪಡಲಿಲ್ಲ.

23 ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, “ಧನವಂತನು ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ” ಎಂದನು.

24 ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ! 25 ಶ್ರೀಮಂತರು ದೇವರ ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು.

26 ಶಿಷ್ಯರು ಇನ್ನೂ ಬೆರಗಾಗಿ, ಒಬ್ಬರಿಗೊಬ್ಬರು, “ಹಾಗಾದರೆ ರಕ್ಷಣೆಹೊಂದಲು ಯಾರಿಗೆ ಸಾಧ್ಯ?” ಎಂದು ಮಾತಾಡಿಕೊಂಡರು.

27 ಯೇಸು ಶಿಷ್ಯರ ಕಡೆಗೆ ನೋಡಿ, “ಇದು ಮನುಷ್ಯರಿಗಷ್ಟೇ ಅಸಾಧ್ಯ, ದೇವರಿಗಲ್ಲ” ಎಂದನು.

28 ಪೇತ್ರನು ಯೇಸುವಿಗೆ, “ನಿನ್ನನ್ನು ಹಿಂಬಾಲಿಸಲು ನಾವು ಎಲ್ಲವನ್ನೂ ತ್ಯಜಿಸಿದೆವು!” ಎಂದನು.

29 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ 30 ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು. 31 ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International