Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮಾರ್ಕ 11:1-18

ರಾಜನಂತೆ ಜೆರುಸಲೇಮಿಗೆ ಪ್ರವೇಶ

(ಮತ್ತಾಯ 21:1-11; ಲೂಕ 19:28-40; ಯೋಹಾನ 12:12-19)

11 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ಅಲ್ಲಿ ಕಾಣುತ್ತಿರುವ ಊರಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸಿದಾಗ, ಯಾರೂ ಸವಾರಿ ಮಾಡಿಲ್ಲದ ಒಂದು ಕತ್ತೆ ಮರಿಯನ್ನು ಅಲ್ಲಿ ಕಟ್ಟಿರುವುದನ್ನು ಕಾಣುವಿರಿ. ಆ ಕತ್ತೆಯನ್ನು ಬಿಚ್ಚಿಕೊಂಡು, ನನ್ನ ಬಳಿಗೆ ತನ್ನಿರಿ. ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.

ಶಿಷ್ಯರು ಊರಿನೊಳಗೆ ಹೋದಾಗ ರಸ್ತೆಯಲ್ಲಿನ ಒಂದು ಮನೆಯ ಬಾಗಿಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕತ್ತೆಮರಿಯೊಂದನ್ನು ಕಂಡರು. ಶಿಷ್ಯರು ಹೋಗಿ ಆ ಕತ್ತೆಯನ್ನು ಬಿಚ್ಚಿದಾಗ, ಅಲ್ಲಿ ನಿಂತಿದ್ದ ಕೆಲವು ಜನರು, “ನೀವು ಮಾಡುತ್ತಿರುವುದೇನು? ಆ ಕತ್ತೆಯನ್ನು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದರು. ಯೇಸು ತಮಗೆ ಹೇಳಿದ ರೀತಿಯಲ್ಲಿಯೇ ಶಿಷ್ಯರು ಉತ್ತರಿಸಿದರು. ಆಗ ಜನರು ಆ ಕತ್ತೆಯನ್ನು ಶಿಷ್ಯರಿಗೆ ಬಿಟ್ಟುಕೊಟ್ಟರು.

ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು. ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು. ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ,

“‘ಆತನನ್ನು ಕೊಂಡಾಡಿರಿ![a]
    ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’(A)

10 “ನಮ್ಮ ಪಿತೃವಾದ ದಾವೀದನ
    ರಾಜ್ಯವು ಬರಲಿ!
ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.

11 ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು.

ಒಣಗಿಹೋದ ಅಂಜೂರ ಮರ

(ಮತ್ತಾಯ 21:18-19)

12 ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು. 13 ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ. 14 ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು.

ದೇವಾಲಯವೇ ಪ್ರಾರ್ಥನಾಲಯ

(ಮತ್ತಾಯ 21:12-17; ಲೂಕ 19:45-48; ಯೋಹಾನ 2:13-22)

15 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು. 16 ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುತ್ತಿದ್ದವರನ್ನು ಆತನು ತಡೆದನು. 17 ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’(B) ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’”(C) ಎಂದು ಹೇಳಿದನು.

18 ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International