New Testament in a Year
ಅತ್ಯಂತ ಮುಖ್ಯ ಆಜ್ಞೆ ಯಾವುದು?
(ಮತ್ತಾಯ 22:34-40; ಲೂಕ 10:25-28)
28 ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
29 ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು. 30 ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’(A) ಇದೇ ಅತ್ಯಂತ ಮುಖ್ಯವಾದ ಆಜ್ಞೆ. 31 ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’(B) ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.
32 ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು. 33 ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.
34 ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.
ಮೆಸ್ಸೀಯನು ದಾವೀದನ ಮಗನೋ ಅಥವಾ ದಾವೀದನ ಪ್ರಭುವೋ?
(ಮತ್ತಾಯ 22:41-46; ಲೂಕ 20:41-44)
35 ಯೇಸು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಆತನು ಅವರಿಗೆ, “ಕ್ರಿಸ್ತನು ದಾವೀದನ ಮಗನೆಂದು ಧರ್ಮೋಪದೇಶಕರು ಹೇಳುವುದೇಕೆ?
36 ‘ಪ್ರಭುವು ನನ್ನ ಪ್ರಭುವಿಗೆ,
ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ
ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’(C)
ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ! 37 ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.
ಯೇಸು ಧರ್ಮೋಪದೇಶಕರನ್ನು ಖಂಡಿಸಿದ್ದು
(ಮತ್ತಾಯ 23:6-7; ಲೂಕ 20:45-47)
38 ಯೇಸು ತನ್ನ ಉಪದೇಶವನ್ನು ಮುಂದುವರಿಸಿ, “ಧರ್ಮೋಪದೇಶಕರ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ. ಅವರು ಪೇಟೆಬೀದಿಗಳಲ್ಲಿ ಜನರಿಂದ ಗೌರವ ಪಡೆಯಲು ಅಪೇಕ್ಷಿಸುತ್ತಾರೆ. 39 ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ. 40 ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.
ಬಡವಿಧವೆಯ ಕಾಣಿಕೆ
(ಲೂಕ 21:1-4)
41 ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು. 42 ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು[a] ಅಂದರೆ ಒಂದು ಪೈಸೆಯನ್ನು ಹಾಕಿದಳು.
43 ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ. 44 ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.
Kannada Holy Bible: Easy-to-Read Version. All rights reserved. © 1997 Bible League International