Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಲೂಕ 12:1-31

ಫರಿಸಾಯರಂತಾಗಬೇಡಿ

12 ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ. ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು. ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.

ದೇವರಿಗೆ ಮಾತ್ರ ಭಯಪಡಿರಿ

(ಮತ್ತಾಯ 10:28-31)

ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.

“ಐದು ಗುಬ್ಬಿಗಳ ಬೆಲೆ ಕೇವಲ ಎರಡು ಪೈಸೆಗಳು. ಆದರೆ ದೇವರು ಅವುಗಳಲ್ಲಿ ಒಂದನ್ನೂ ಮರೆತುಬಿಡುವುದಿಲ್ಲ. ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

ಯೇಸುವಿನ ಕುರಿತು ನಾಚಿಕೆಪಡಬೇಡಿರಿ

(ಮತ್ತಾಯ 10:32-33; 12:32; 10:19-20)

“ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ[a] ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು. ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.

10 “ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆಯೇ ಇಲ್ಲ.

11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ. 12 ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”

ಸ್ವಾರ್ಥತೆಯ ಬಗ್ಗೆ ಯೇಸುವಿನ ಎಚ್ಚರಿಕೆ

13 ಸಮೀಪದಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕನೇ, ನಮ್ಮ ತಂದೆ ಇದೀಗ ಸತ್ತುಹೋದನು. ನಮ್ಮ ತಂದೆಯ ಆಸ್ತಿಯಲ್ಲಿ ನನಗೆ ಪಾಲುಕೊಡಬೇಕೆಂದು ನನ್ನ ಅಣ್ಣನಿಗೆ ಹೇಳು” ಎಂದು ಹೇಳಿದನು.

14 ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು. 15 ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.

16 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು. 17 ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು.

18 “ಬಳಿಕ ಅವನು, ‘ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.’ 19 ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.

20 “ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.

21 “ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”

ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆ

(ಮತ್ತಾಯ 6:25-34,19-21)

22 ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ. 23 ಆಹಾರಕ್ಕಿಂತ ಪ್ರಾಣ ಹೆಚ್ಚು ಪ್ರಾಮುಖ್ಯವಾದದ್ದು. ಬಟ್ಟೆಗಿಂತಲೂ ದೇಹ ಹೆಚ್ಚು ಪ್ರಾಮುಖ್ಯವಾದದ್ದು. 24 ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ. 25 ನೀವು ಊಟಬಟ್ಟೆಗಳಿಗಾಗಿ ಎಷ್ಟೇ ಚಿಂತಿಸಿದರೂ ನಿಮ್ಮ ಆಯುಷ್ಯೇನೂ ಹೆಚ್ಚಾಗುವುದಿಲ್ಲ. 26 ಚಿಕ್ಕಕಾರ್ಯಗಳನ್ನೇ ಮಾಡಲು ನಿಮಗೆ ಸಾಧ್ಯವಿಲ್ಲದಿರುವಾಗ, ದೊಡ್ಡಕಾರ್ಯಗಳ ಕುರಿತು ನೀವು ಚಿಂತಿಸುವುದೇಕೆ?

27 “ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. 28 ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!

29 “ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ. 30 ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ. 31 ನೀವು ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆಯನ್ನು ಕೊಡಿರಿ. ಆಗ ನಿಮಗೆ ಬೇಕಾಗಿರುವ ಉಳಿದವುಗಳನ್ನು ಕೊಡಲಾಗುವುದು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International