New Testament in a Year
ಸ್ವರ್ಗದಲ್ಲಿ ಆನಂದ
(ಮತ್ತಾಯ 18:12-14)
15 ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು. 2 ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.
3 ಆಗ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: 4 “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು. 5 ಅವನು ಆ ಕುರಿಯನ್ನು ಕಂಡುಕೊಂಡಾಗ ಬಹು ಸಂತೋಷಪಡುವನು. ಅವನು ಆ ಕುರಿಯನ್ನು ತನ್ನ ಮನೆಗೆ ಹೊತ್ತುಕೊಂಡು ಹೋಗುವನು. 6 ಅವನು ತನ್ನ ಸ್ನೇಹಿತರ ಮತ್ತು ನೆರೆಹೊರೆಯವರ ಬಳಿಗೆ ಹೋಗಿ, ‘ನನ್ನೊಡನೆ ಸಂತೋಷಪಡಿರಿ, ಕಳೆದುಹೋದ ನನ್ನ ಕುರಿ ಸಿಕ್ಕಿತು’ ಎಂದು ಹೇಳುವನು. 7 ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.
8 “ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ. 9 ಕಳೆದುಹೋದ ಆ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ‘ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು’ ಎಂದು ಹೇಳುವಳು. 10 ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”
Kannada Holy Bible: Easy-to-Read Version. All rights reserved. © 1997 Bible League International