New Testament in a Year
ಪೇತ್ರ ಮತ್ತು ಯೋಹಾನರು ಹಿಂತಿರುಗಿದರು
23 ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು. 24 ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ. 25 ನಮ್ಮ ಪಿತೃವಾದ ದಾವೀದನು ನಿನ್ನ ಸೇವಕನಾಗಿದ್ದನು. ಅವನು ಪವಿತ್ರಾತ್ಮನ ಸಹಾಯದಿಂದ ಈ ಮಾತುಗಳನ್ನು ಬರೆದನು:
‘ಜನಾಂಗಗಳು ಕೂಗಾಡುವುದೇಕೆ?
ಈ ಲೋಕದ ಜನರು ದೇವರಿಗೆ ವಿರೋಧವಾಗಿ ಕಾರ್ಯಗಳನ್ನು ಯೋಚಿಸುತ್ತಿರುವುದೇಕೆ? ಇದರಿಂದ ಪ್ರಯೋಜನವೇನೂ ಇಲ್ಲ!
26 ‘ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ;
ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.’(A)
27 ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ. 28 ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು. 29 ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು. 30 ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.
31 ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.
ವಿಶ್ವಾಸಿಗಳ ಅನ್ಯೋನ್ಯ ಜೀವನ
32 ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು. 33 ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು. 34 ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ, 35 ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಡುತ್ತಿದ್ದರು. ಬಳಿಕ ಅದನ್ನು ಪ್ರತಿಯೊಬ್ಬರಿಗೂ ಅವರವರ ಅಗತ್ಯತೆಗಳಿಗನುಸಾರವಾಗಿ ಹಂಚಲಾಗುತ್ತಿತ್ತು.
36 ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.[a] 37 ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು.
Kannada Holy Bible: Easy-to-Read Version. All rights reserved. © 1997 Bible League International