New Testament in a Year
16 ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ. 17 ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು”(A) ಎಂದು ಹೇಳಿದ್ದಾನೆ. 18 ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.
19 “ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು. 20 ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ? 21 ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.
22 ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು. 23 ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು. 24 ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು. 25 ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ:
“ನನ್ನವರಲ್ಲದ ಜನರನ್ನು
ನನ್ನ ಜನರೆಂದು ಹೇಳುವೆನು.
ನನಗೆ ಪ್ರಿಯರಲ್ಲದವರನ್ನು
ನನಗೆ ಪ್ರಿಯರೆಂದು ಹೇಳುವೆನು.”(B)
26 ಮತ್ತು
“ಯಾವ ಸ್ಥಳದಲ್ಲಿ ದೇವರು,
‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ
ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.”(C)
27 ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ:
“ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು.
ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.
28 ಹೌದು, ಪ್ರಭುವು ಭೂಮಿಯ ಮೇಲಿನ ಜನರಿಗೆ ಬಹುಬೇಗನೆ ತೀರ್ಪನ್ನು ಪೂರ್ಣವಾಗಿ ತೀರಿಸುವನು.”(D)
29 ಯೆಶಾಯನು ಹೇಳಿರುವುದೇನೆಂದರೆ:
“ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ.
ಆತನು ಹೀಗೆ ಮಾಡಿಲ್ಲದಿದ್ದರೆ,
ಈಗ ನಾವು ಸೊದೋಮಿನಂತೆಯೂ
ಗೊಮೋರದಂತೆಯೂ ಇರುತ್ತಿದ್ದೆವು.”(E)
30 ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು. 31 ಇಸ್ರೇಲಿನ ಜನರಾದರೋ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಪ್ರಯತ್ನಿಸಿ ವಿಫಲರಾದರು. 32 ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು. 33 ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ:
Kannada Holy Bible: Easy-to-Read Version. All rights reserved. © 1997 Bible League International