Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
2 ತಿಮೊಥೆಯನಿಗೆ 3

ಕೊನೆಯ ದಿನಗಳು

ನೆನಪಿನಲ್ಲಿಡಿರಿ! ಕಡೇ ದಿನಗಳಲ್ಲಿ ಅನೇಕ ತೊಂದರೆಗಳು ಬರುತ್ತವೆ. ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ; ಇತರರನ್ನು ಪ್ರೀತಿಸದವರಾಗಿರುತ್ತಾರೆ; ಕ್ಷಮಿಸದವರಾಗಿರುತ್ತಾರೆ; ದೂಷಿಸುವವರಾಗಿರುತ್ತಾರೆ. ತಮ್ಮ ಮೇಲೆ ತಮಗೇ ಹತೋಟಿಯಿಲ್ಲದವರಾಗಿರುತ್ತಾರೆ; ಉತ್ತಮವಾದದ್ದನ್ನು ದ್ವೇಷಿಸುವವರಾಗಿರುತ್ತಾರೆ; ಕೋಪಿಷ್ಠರಾಗಿರುತ್ತಾರೆ; ಸಂಕುಚಿತ ಗುಣವುಳ್ಳವರಾಗಿರುತ್ತಾರೆ. ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ; ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.

ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಆ ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ. ಆ ಸ್ತ್ರೀಯರು ಯಾವಾಗಲೂ ಹೊಸ ಉಪದೇಶಗಳನ್ನು ಕಲಿಯಲು ಪ್ರಯತ್ನಿಸಿದರೂ ಸತ್ಯವನ್ನು ಪೂರ್ಣವಾಗಿ ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವೇ ಇಲ್ಲ. ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ. ಅವರ ಕಾರ್ಯಗಳಲ್ಲಿ ಅವರಿಗೆ ಯಶಸ್ಸಾಗುವುದಿಲ್ಲ. ಅವರು ಮೂರ್ಖರೆಂಬುದು ಜನರೆಲ್ಲರಿಗೂ ಕಾಣುತ್ತದೆ. ಯನ್ನ, ಯಂಬ್ರರಿಗೆ ಹೀಗೆಯೇ ಆಯಿತು.

ಅಂತಿಮ ಸಲಹೆಗಳು

10 ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ. 11 ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು. 12 ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು. 13 ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.

14 ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ. 15 ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ. 16 ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ. 17 ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International