New Testament in a Year
ಕ್ರಿಸ್ತನ ಯಜ್ಞವು ನಮ್ಮನ್ನು ನಿಷ್ಕಳಂಕರನ್ನಾಗಿ ಮಾಡುವುದು
10 ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ. 2 ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ. 3 ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು. 4 ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.
5 ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ:
“ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ.
ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ.
6 ನೀನು ಸರ್ವಾಂಗಹೋಮಗಳಲ್ಲಿಯೂ
ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.
7 ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ.
ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ
ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.”(A)
8 ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.) 9 ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.”(B) ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ. 10 ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.
11 ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ. 12 ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13 ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ. 14 ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.
15 ಪವಿತ್ರಾತ್ಮನು ನಮಗೆ ಇದರ ಬಗ್ಗೆ ತಿಳಿಸಿದ್ದಾನೆ. ಮೊದಲನೆಯದಾಗಿ ಆತನು ಹೇಳುವುದೇನೆಂದರೆ:
16 “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ:
ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು;
ಅವರ ಮನಸ್ಸಿನ ಮೇಲೆ ಬರೆಯುವೆನು.”(C)
17 ನಂತರ ಆತನು ಹೇಳುವುದೇನೆಂದರೆ:
“ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ.
ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.”(D)
18 ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ.
Kannada Holy Bible: Easy-to-Read Version. All rights reserved. © 1997 Bible League International