Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 26-28

ರಚನೆಗಾರ: ದಾವೀದ.

26 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು.
    ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.
ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ.
    ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.
ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ.
    ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.
ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ.
    ನಾನು ಕಪಟಿಗಳ ಜೊತೆ ಸೇರುವವನಲ್ಲ.
ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ.
    ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ.

ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ[a] ಸುತ್ತಲೂ ನಡೆಯಲು
    ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.
ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.
    ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ
    ನನಗೆ ಎಷ್ಟೋ ಪ್ರಿಯವಾಗಿವೆ.

ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ.
    ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.
10 ಅವರು ಜನರನ್ನು ವಂಚಿಸುವರು;
    ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು.
11 ನಾನಾದರೋ ನಿರಪರಾಧಿ.
    ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.
12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ.
    ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.

ರಚನೆಗಾರ: ದಾವೀದ.

27 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ.
    ನಾನು ಯಾರಿಗೂ ಭಯಪಡಬೇಕಿಲ್ಲ!
ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ.
    ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ
    ತಾವೇ ಮುಗ್ಗರಿಸಿ ಬೀಳುವರು.
ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ.
    ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ.
    ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.

ನನ್ನ ಜೀವಮಾನವೆಲ್ಲಾ
    ಯೆಹೋವನ ಆಲಯದಲ್ಲಿ ವಾಸಿಸುತ್ತಾ
ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ
    ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ
    ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.

ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ;
    ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ.
    ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು!
    ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು.
    ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.

ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು.
    ನನ್ನನ್ನು ಕರುಣಿಸು.
ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ.
    ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.
ಯೆಹೋವನೇ, ನನಗೆ ವಿಮುಖನಾಗಬೇಡ:
    ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ.
ನನ್ನ ದೇವರೇ, ನನ್ನ ರಕ್ಷಕನು ನೀನೇ.
    ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!
10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;
    ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ
    ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
12 ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ.
    ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ.
    ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.
13 ಯೆಹೋವನ ಒಳ್ಳೆಯತನವನ್ನು
    ನಾನು ಸಾಯುವುದಕ್ಕಿಂತ ಮುಂಚೆ[b] ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.
14 ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
    ಬಲವಾಗಿಯೂ ಧೈರ್ಯವಾಗಿಯೂ ಇರಿ!
    ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!

ರಚನೆಗಾರ: ದಾವೀದ.

28 ಯೆಹೋವನೇ, ನೀನೇ ನನ್ನ ಬಂಡೆ.
    ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ.
    ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ.
ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ
    ಜನರು ನನ್ನನ್ನು ಪರಿಗಣಿಸುವರು.
ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು.
    ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.
ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ.
    ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.[c]
ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು.
    ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು.
    ಅವರಿಗೆ ತಕ್ಕ ದಂಡನೆಯನ್ನು ಕೊಡು.
ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ
    ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ.
ಆದ್ದರಿಂದ ಆತನು ಅವರನ್ನು ದಂಡಿಸಿ
    ನಿತ್ಯನಾಶಮಾಡುವನು.

ಯೆಹೋವನಿಗೆ ಸ್ತೋತ್ರವಾಗಲಿ!
    ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ.
ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ.
    ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
    ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
ಯೆಹೋವನು ತನ್ನ ಜನರಿಗೆ ಬಲವೂ
    ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಯೆಹೋವನೇ, ನಿನ್ನ ಜನರನ್ನು ರಕ್ಷಿಸು,
    ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು!
    ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.

ಅಪೊಸ್ತಲರ ಕಾರ್ಯಗಳು 22

ಪೌಲನ ಜನರೊಂದಿಗೆ ಮಾತಾಡಿದ್ದು

22 ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.

ಪೌಲನು ಯೆಹೂದ್ಯರ ಭಾಷೆಯಲ್ಲಿ ಮಾತಾಡುತ್ತಿರುವುದನ್ನು ಕೇಳಿ ಯೆಹೂದ್ಯರು ಮತ್ತಷ್ಟು ನಿಶಬ್ಧರಾದರು.

ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ. ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು.

“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.

ಪೌಲನ ತನ್ನ ಮನಪರಿವರ್ತನೆಯ ಸಾಕ್ಷಿಯ ಕುರಿತು ಹೇಳಿಕೆ

“ನಾನು ಪ್ರಯಾಣ ಮಾಡುತ್ತಾ ದಮಸ್ಕದ ಸಮೀಪಕ್ಕೆ ಬಂದಾಗ ಒಂದು ಘಟನೆ ಸಂಭವಿಸಿತು. ಆಗ ಸುಮಾರು ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಪ್ರಕಾಶಮಾನವಾದ ಬೆಳಕೊಂದು ನನ್ನ ಸುತ್ತಲೂ ಪ್ರಕಾಶಿಸಿತು. ನಾನು ನೆಲಕ್ಕೆ ಬಿದ್ದೆನು. ಆಗ ವಾಣಿಯೊಂದು ನನಗೆ, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆ ಪಡಿಸುತ್ತಿರುವೆ?’ ಎಂದು ಹೇಳಿತು.

“ನಾನು, ‘ಪ್ರಭುವೇ, ನೀನು ಯಾರು?’ ಎಂದು ಕೇಳಿದೆನು. ಆ ವಾಣಿಯು, ‘ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ’ ಎಂದು ಹೇಳಿತು. ನನ್ನೊಂದಿಗಿದ್ದ ಜನರು ನನ್ನ ಸಂಗಡ ಮಾತಾಡುತ್ತಿದ್ದ ವ್ಯಕ್ತಿಯ ಸ್ವರವನ್ನು ಕೇಳಲಿಲ್ಲ. ಆದರೆ ಅವರು ಬೆಳಕನ್ನು ನೋಡಿದರು.

10 “ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು. 11 ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.

12 “ದಮಸ್ಕದಲ್ಲಿ ಅನನೀಯ ಎಂಬುವನು ನನ್ನ ಬಳಿಗೆ ಬಂದನು. ಅನನೀಯನು ಧಾರ್ಮಿಕ ವ್ಯಕ್ತಿಯಾಗಿದ್ದನು. ಅವನು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದನು. ಅಲ್ಲಿ ವಾಸವಾಗಿದ್ದ ಯೆಹೂದ್ಯರೆಲ್ಲರು ಅವನನ್ನು ಗೌರವಿಸುತ್ತಿದ್ದರು. 13 ಅನನೀಯನು ನನ್ನ ಬಳಿಗೆ ಬಂದು, ‘ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!’ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು ಮತ್ತು ನಾನು ಅವನನ್ನು ನೋಡಿದೆನು.

14 “ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು. 15 ನೀನು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಎಲ್ಲಾ ಜನರಿಗೆ ಸಾಕ್ಷಿಯಾಗಿರುವೆ. 16 ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.

17 “ತರುವಾಯ ನಾನು ಜೆರುಸಲೇಮಿಗೆ ಹಿಂತಿರುಗಿದೆನು. ನಾನು ದೇವಾಲಯದ ಅಂಗಳದಲ್ಲಿ ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. 18 ನಾನು ಯೇಸುವನ್ನು ಕಂಡೆನು. ಆತನು ನನಗೆ, ‘ಬೇಗನೆ ಜೆರುಸಲೇಮಿನಿಂದ ಹೊರಡು! ನನ್ನ ಕುರಿತಾದ ಸಾಕ್ಷಿಯನ್ನು ಈ ಜನರು ಸ್ವೀಕರಿಸುವುದಿಲ್ಲ’ ಎಂದು ಹೇಳಿದನು.

19 “ನಾನು, ‘ಪ್ರಭುವೇ, ವಿಶ್ವಾಸಿಗಳನ್ನು ಸೆರೆಮನೆಗಳಿಗೆ ಹಾಕಿಸಿ ಹೊಡೆಸುತ್ತಿದ್ದವನು ನಾನೇ ಎಂಬುದು ಜನರಿಗೆ ಗೊತ್ತಿದೆ. ನಿನ್ನಲ್ಲಿ ನಂಬಿಕೆಯಿಟ್ಟಿರುವ ಜನರನ್ನು ಪತ್ತೆಹಚ್ಚಿ ಬಂಧಿಸುವುದಕ್ಕಾಗಿ ನಾನು ಎಲ್ಲಾ ಸಭಾಮಂದಿರಗಳಿಗೆ ಹೋಗಿದ್ದೇನೆ. 20 ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!’ ಎಂದೆನು.

21 “ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.”

22 ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು. 23 ಅವರು ಬೊಬ್ಬೆಹಾಕಿದರು; ತಮ್ಮ ಮೇಲಂಗಿಗಳನ್ನು ಬಿಚ್ಚಿ ಬೀಸಿದರು; ಧೂಳನ್ನು ಮೇಲಕ್ಕೆ ತೂರಿದರು. 24 ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು. 25 ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.

26 ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.

27 ಸೇನಾಧಿಪತಿಯು ಪೌಲನ ಬಳಿಗೆ ಬಂದು, “ಹೇಳು, ನೀನು ನಿಜವಾಗಿಯೂ ರೋಮಿನ ಪ್ರಜೆಯೋ?” ಎಂದು ಕೇಳಿದನು.

ಪೌಲನು, “ಹೌದು” ಎಂದು ಉತ್ತರಕೊಟ್ಟನು.

28 ಸೇನಾಧಿಪತಿಯು, “ನಾನು ರೋಮಿನ ಪ್ರಜೆಯಾಗಲು ಬಹಳ ಹಣಕೊಟ್ಟಿರುವೆ” ಎಂದು ಹೇಳಿದನು.

ಅದಕ್ಕೆ ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪ್ರಜೆ” ಎಂದನು.

29 ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.

ಪೌಲನು ಯೆಹೂದ್ಯನಾಯಕರೊಂದಿಗೆ ಮಾತಾಡುವನು

30 ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International