Old/New Testament
ರಚನೆಗಾರ: ಆಸಾಫ.
81 ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ.
ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ.
2 ವಾದ್ಯವನ್ನು ನುಡಿಸಲಾರಂಭಿಸಿರಿ;
ದಮ್ಮಡಿಯನ್ನು ಬಡಿಯಿರಿ.
ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.
3 ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ
ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.
4 ಇದು ಇಸ್ರೇಲರಿಗೆ ಕಟ್ಟಳೆಯಾಗಿದೆ.
ಯಾಕೋಬ್ಯರ ದೇವರು ಈ ಆಜ್ಞೆಯನ್ನು ಕೊಟ್ಟನು.
5 ಆತನು ಯೋಸೇಫನನ್ನು[a] ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ
ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು.
ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!
6 ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು.
ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
7 ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ.
ಆಗ ನಾನು ನಿಮ್ಮನ್ನು ಬಿಡಿಸಿದೆನು.
ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು.
ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”
8 “ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ.
ಇಸ್ರೇಲೇ, ದಯವಿಟ್ಟು ಕಿವಿಗೊಡು!
9 ಪರದೇಶದವರು ಆರಾಧಿಸುವ
ಯಾವ ಸುಳ್ಳು ದೇವರುಗಳನ್ನೂ ಪೂಜಿಸಬೇಡ.
10 ಯೆಹೋವನಾದ ನಾನೇ ನಿನ್ನ ದೇವರು.
ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ.
ಇಸ್ರೇಲೇ, ನಿನ್ನ ಬಾಯನ್ನು ತೆರೆ,
ಆಗ ನಾನು ನಿನಗೆ ತಿನ್ನಿಸುವೆನು.
11 “ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ.
ಇಸ್ರೇಲರು ನನಗೆ ವಿಧೇಯರಾಗಲಿಲ್ಲ.
12 ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ.
ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.
13 ನನ್ನ ಜನರು ನನಗೆ ಕಿವಿಗೊಟ್ಟು ನನ್ನ ಚಿತ್ತಾನುಸಾರವಾಗಿ ಜೀವಿಸಿದರೆ,
14 ಅವರ ಶತ್ರುಗಳನ್ನು ಸೋಲಿಸುವೆನು;
ಇಸ್ರೇಲಿಗೆ ಕೇಡುಮಾಡುವವರನ್ನು ದಂಡಿಸುವೆನು.
15 ಯೆಹೋವನ ಶತ್ರುಗಳು ಭಯದಿಂದ ನಡುಗುವರು.
ಅವರು ಶಾಶ್ವತವಾಗಿ ದಂಡಿಸಲ್ಪಡುವರು.
16 ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು.
ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”
ಸ್ತುತಿಗೀತೆ. ರಚನೆಗಾರ: ಆಸಾಫ.
82 ದೇವಾದಿದೇವನು ತನ್ನ ಸಭೆಯಲ್ಲಿ[b] ನಿಂತುಕೊಂಡು
ದೇವರುಗಳಿಗೆ ನ್ಯಾಯತೀರ್ಪು ನೀಡುವನು.
2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ?
ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”
3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ.
ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.
4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ.
ಅವರನ್ನು ದುಷ್ಟರಿಂದ ರಕ್ಷಿಸಿರಿ.
5 “ಅವರಿಗೆ ಏನೂ ಗೊತ್ತಿಲ್ಲ.
ಅವರಿಗೆ ಏನೂ ಅರ್ಥವಾಗುವುದಿಲ್ಲ!
ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು.
ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!”
6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ:
“ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.
7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ.
ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.”
8 ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು!
ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು!
ಸ್ತುತಿಗೀತೆ. ರಚನೆಗಾರ: ಆಸಾಫ.
83 ದೇವರೇ, ಸುಮ್ಮನಿರಬೇಡ!
ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ.
ದೇವರೇ, ದಯವಿಟ್ಟು ಮಾತನಾಡು.
2 ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ.
ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.
3 ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ.
ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.
4 ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ.
ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”
5 ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ
ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ.
6-7 ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು,
ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು,
ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು.
ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿಬಂದಿದ್ದಾರೆ.
8 ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು
ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.
9 ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ
ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.
10 ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ.
ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.
11 ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು.
ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
ನೀನು ಜೇಬಹ ಮತ್ತು ಚಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
12 ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು.
13 ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು.
ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.
14 ಕಾಡನ್ನು ನಾಶಮಾಡುವ ಬೆಂಕಿಯಂತೆಯೂ
ಬೆಟ್ಟಗಳನ್ನು ಸುಟ್ಟುಹಾಕುವ ಅಗ್ನಿಜ್ವಾಲೆಯಂತೆಯೂ ಅವರನ್ನು ನಾಶಮಾಡು.
15 ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು.
ಸುಂಟರ ಗಾಳಿಯಂತೆ ಅವರನ್ನು ನಡುಗಿಸು.
16 ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು;
ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.
17 ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ.
ಅವರು ಅವಮಾನಗೊಂಡು ನಾಶವಾಗಲಿ.
18 ಆಗ ಅವರು ನೀನೊಬ್ಬನೇ ದೇವರೆಂದೂ
ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು.
ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ
ದೇವರೆಂದು ಅವರು ಅರಿತುಕೊಳ್ಳುವರು.
19 “ನಾವು ಆ ಮರದ ಕೊಂಬೆಗಳಿಗೆ ಸೇರಿಕೊಳ್ಳಬೇಕೆಂದು ಆ ಕೊಂಬೆಗಳು ಮುರಿಯಲ್ಪಟ್ಟವು” ಎಂದು ನೀವು ಹೇಳಬಹುದು. 20 ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು. 21 ದೇವರು ಸಹಜವಾದ ಕೊಂಬೆಗಳನ್ನೇ ಉಳಿಸಿಲ್ಲದಿರುವುದರಿಂದ ನೀವು ನಂಬದಿದ್ದರೆ ಆತನು ನಿನ್ನನ್ನು ಉಳಿಸುವುದಿಲ್ಲ.
22 ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು. 23 ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ. 24 ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.
25 ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು. 26 ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
“ಸಿಯೋನಿನಿಂದ ರಕ್ಷಕನು ಬರುವನು:
ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.
27 ನಾನು ಆ ಜನರ ಪಾಪಗಳನ್ನು ಪರಿಹರಿಸುವಾಗ
ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.”(A)
28 ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ. 29 ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ. 30 ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು. 31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು. 32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.
ದೇವರಿಗೆ ಸ್ತೋತ್ರವಾಗಲಿ
33 ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು. 34 ಪವಿತ್ರ ಗ್ರಂಥ ಹೇಳುವಂತೆ:
“ಪ್ರಭುವಿನ ಮನಸ್ಸನ್ನು ಯಾರು ಬಲ್ಲರು?
ದೇವರಿಗೆ ಸಲಹೆಯನ್ನು ಯಾರು ಕೊಡಬಲ್ಲರು?”(B)
35 “ಮೊದಲು ದೇವರಿಗೆ ಕೊಟ್ಟು ಪ್ರತಿಫಲ ಪಡೆದವರ್ಯಾರು?
ದೇವರು ಯಾರಿಗೂ ಸಾಲಗಾರನಾಗಿಲ್ಲ.”(C)
36 ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.
Kannada Holy Bible: Easy-to-Read Version. All rights reserved. © 1997 Bible League International