Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 113-115

113 ಯೆಹೋವನಿಗೆ ಸ್ತೋತ್ರವಾಗಲಿ!
ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ!
    ಆತನ ಹೆಸರನ್ನು ಕೊಂಡಾಡಿರಿ.
ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ.
ಪೂರ್ವದಿಂದಿಡಿದು ಪಶ್ಚಿಮದವರೆಗೂ
    ಯೆಹೋವನ ಹೆಸರು ಸ್ತುತಿಸಲ್ಪಡಲಿ.
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ;
    ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ.
ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ.
    ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ.
ಆತನು ಆಕಾಶವನ್ನೂ
    ಭೂಮಿಯನ್ನೂ ಬಾಗಿ ನೋಡುವನು.
ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು;
    ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು.
ಆತನು ಅವರನ್ನು ಪ್ರಮುಖರನ್ನಾಗಿಯೂ
    ನಾಯಕರುಗಳನ್ನಾಗಿಯೂ ಮಾಡುವನು.
ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ
    ಸಂತೋಷಪಡಿಸುವನು.

ಯೆಹೋವನಿಗೆ ಸ್ತೋತ್ರವಾಗಲಿ!

114 ಇಸ್ರೇಲರು ಈಜಿಪ್ಟಿನಿಂದ ಹೊರಟರು.
    ಯಾಕೋಬ್ಯರು ಪರದೇಶದಿಂದ ಹೊರಟರು.
ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು;
    ಇಸ್ರೇಲ್ ಆತನ ರಾಜ್ಯವಾಯಿತು.
ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು.
    ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು.
ಬೆಟ್ಟಗಳು ಟಗರುಗಳಂತೆಯೂ
    ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು.

ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ?
    ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?
ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ
    ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?

ಯಾಕೋಬನ ದೇವರೂ ಒಡೆಯನೂ ಆಗಿರುವ
    ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು.
ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ.
    ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.

115 ಯೆಹೋವನೇ, ಘನಮಾನಗಳು ನಮ್ಮವಲ್ಲ!
    ಅವು ನಿನ್ನವೇ.
ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.
ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು?
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.
ಅನ್ಯಜನಾಂಗಗಳ “ದೇವರುಗಳು” ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ.
    ಅವುಗಳನ್ನು ಮಾಡಿದವರು ಮನುಷ್ಯರೇ.
ಆ ವಿಗ್ರಹಗಳಿಗೆ ಬಾಯಿಗಳಿವೆ, ಆದರೆ ಮಾತಾಡಲಾರವು.
    ಕಣ್ಣುಗಳಿವೆ, ಆದರೆ ನೋಡಲಾರವು.
ಕಿವಿಗಳಿವೆ, ಆದರೆ ಕೇಳಲಾರವು.
    ಮೂಗುಗಳಿವೆ, ಆದರೆ ಮೂಸಲಾರವು.
ಕೈಗಳಿವೆ, ಆದರೆ ಯಾವುದನ್ನೂ ಮುಟ್ಟಲಾರವು.
    ಕಾಲುಗಳಿವೆ, ಆದರೆ ನಡೆಯಲಾರವು.
    ಅವುಗಳ ಗಂಟಲುಗಳಿಂದ ಶಬ್ದವೇ ಹೊರಡದು.
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಟ್ಟಿರುವವರೂ ಅವುಗಳಂತೆಯೇ.

ಇಸ್ರೇಲರೇ, ಯೆಹೋವನಲ್ಲಿ ಭರವಸವಿಡಿರಿ.
    ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ.
    ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.
11 ಯೆಹೋವನ ಭಕ್ತರು ಆತನಲ್ಲಿ ಭರವಸವಿಡುವರು.
    ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.

12 ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು.
    ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು.
13 ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.

14 ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.
15     ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ.
    ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.
16 ಪರಲೋಕವು ಯೆಹೋವನದು.
    ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು.
17 ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ.
    ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ.
18 ನಾವಾದರೋ ಯೆಹೋವನನ್ನು ಈಗಲೂ ಯಾವಾಗಲೂ ಸ್ತುತಿಸುವೆವು!

ಯೆಹೋವನಿಗೆ ಸ್ತೋತ್ರ!

1 ಕೊರಿಂಥದವರಿಗೆ 6

ಕ್ರೈಸ್ತರ ನಡುವೆ ನ್ಯಾಯನಿರ್ಣಯದ ಸಮಸ್ಯೆಗಳು

ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು? ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ. ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು. ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ. ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ? ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!

ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು. ಆದರೆ ಸ್ವತಃ ನೀವೇ ಕೆಟ್ಟದ್ದನ್ನು ಮಾಡುತ್ತೀರಿ ಮತ್ತು ಮೋಸ ಮಾಡುತ್ತೀರಿ! ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನಿಗೇ ನೀವು ಹೀಗೆ ಮಾಡುತ್ತೀರಿ.

9-10 ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು. 11 ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.

ದೇವರ ಮಹಿಮೆಗಾಗಿ ನಿಮ್ಮ ದೇಹಗಳನ್ನು ಉಪಯೋಗಿಸಿರಿ

12 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ. 13 “ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ. 14 ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು. 15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು. 16 “ಇಬ್ಬರೂ ಒಂದೇ ದೇಹವಾಗುತ್ತಾರೆ”(A) ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು. 17 ಆದರೆ ಪ್ರಭುವಿನೊಂದಿಗೆ ಸಂಬಂಧವನ್ನು ಹೊಂದಿರುವಂಥವನು ಆತ್ಮದಲ್ಲಿ ಪ್ರಭುವಿನೊಂದಿಗೆ ಒಂದಾಗಿರುತ್ತಾನೆ.

18 ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. 19 ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ. 20 ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International