Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 135-136

135 ಯೆಹೋವನಿಗೆ ಸ್ತೋತ್ರವಾಗಲಿ!
    ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!
ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
    ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು.
    ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.

ಯೆಹೋವನು ಯಾಕೋಬನನ್ನು ಆರಿಸಿಕೊಂಡನು.
    ಇಸ್ರೇಲ್, ಆತನಿಗೆ ಸೇರಿದ್ದು.
ಯೆಹೋವನು ಮಹೋನ್ನತನೆಂದೂ
    ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.
ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ
    ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.
ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು;
    ಮಿಂಚನ್ನೂ ಮಳೆಯನ್ನೂ ಬರಮಾಡುವನು;
    ಗಾಳಿಯನ್ನು ಬೀಸಮಾಡುವನು.
ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.
ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು
    ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.
10 ಆತನು ಅನೇಕ ಜನಾಂಗಗಳನ್ನು ಸೋಲಿಸಿದನು.
    ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.
11 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು;
    ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
12 ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.

13 ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ!
    ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.
14 ಯೆಹೋವನು ಜನಾಂಗಗಳನ್ನು ದಂಡಿಸಿದನು.
    ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.
15 ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ
    ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು.
16 ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ;
    ಕಣ್ಣುಗಳಿದ್ದರೂ ನೋಡಲಾಗಲಿಲ್ಲ;
17 ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ;
    ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ;
18 ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು!
    ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.

19 ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
    ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.
20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ!
    ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.
21 ಯೆಹೋವನಿಗೆ ಚೀಯೋನಿನಿಂದಲೂ
    ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ!

ಯೆಹೋವನಿಗೆ ಸ್ತೋತ್ರವಾಗಲಿ!

136 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು.
    ಆತನ ಪ್ರೀತಿ ಶಾಶ್ವತವಾದದ್ದು.
ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ!
    ಆತನ ಪ್ರೀತಿ ಶಾಶ್ವತವಾದದ್ದು.
ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿಮಾಡಿರಿ.
    ಆತನ ಪ್ರೀತಿ ಶಾಶ್ವತವಾದದ್ದು.
ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ.
    ಆತನ ಪ್ರೀತಿ ಶಾಶ್ವತವಾದದ್ದು.
ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ!
    ಆತನ ಪ್ರೀತಿ ಶಾಶ್ವತವಾದದ್ದು.
ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ.
    ಆತನ ಪ್ರೀತಿ ಶಾಶ್ವತವಾದದ್ದು.
ಆತನು ಮಹಾಬೆಳಕುಗಳನ್ನು ಸೃಷ್ಟಿಮಾಡಿದನು.
    ಆತನ ಪ್ರೀತಿ ಶಾಶ್ವತವಾದದ್ದು.
ಹಗಲನ್ನು ಆಳುವುದಕ್ಕಾಗಿ ಆತನು ಸೂರ್ಯನನ್ನು ಸೃಷ್ಟಿಮಾಡಿದನು.
    ಆತನ ಪ್ರೀತಿ ಶಾಶ್ವತವಾದದ್ದು.
ರಾತ್ರಿಯನ್ನು ಆಳುವುದಕ್ಕಾಗಿ ಆತನು ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಮಾಡಿದನು.
    ಆತನ ಪ್ರೀತಿ ಶಾಶ್ವತವಾದದ್ದು.
10 ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
11 ಆತನು ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದನು.
    ಆತನ ಪ್ರೀತಿ ಶಾಶ್ವತವಾದದ್ದು.
12 ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು.
    ಆತನ ಪ್ರೀತಿ ಶಾಶ್ವತವಾದದ್ದು.
13 ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು.
    ಆತನ ಪ್ರೀತಿ ಶಾಶ್ವತವಾದದ್ದು.
14 ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
15 ಆತನು ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಮುಳುಗಿಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
16 ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
17 ಆತನು ಶಕ್ತಿಯುತರಾದ ರಾಜರುಗಳನ್ನು ಸೋಲಿಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
18 ಆತನು ಬಲಿಷ್ಠರಾದ ರಾಜರುಗಳನ್ನು ಸೋಲಿಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
19 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
20 ಆತನು ಬಾಷಾನಿನ ರಾಜನಾದ ಓಗನನ್ನು ಸೋಲಿಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
21 ಆತನು ಅವರ ದೇಶಗಳನ್ನು ಇಸ್ರೇಲರಿಗೆ ಕೊಟ್ಟನು.
    ಆತನ ಪ್ರೀತಿ ಶಾಶ್ವತವಾದದ್ದು.
22 ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು.
    ಆತನ ಪ್ರೀತಿ ಶಾಶ್ವತವಾದದ್ದು.
23 ನಾವು ಸೋತುಹೋಗಿದ್ದಾಗ ಆತನು ನಮ್ಮನ್ನು ಜ್ಞಾಪಿಸಿಕೊಂಡನು.
    ಆತನ ಪ್ರೀತಿ ಶಾಶ್ವತವಾದದ್ದು.
24 ಆತನು ನಮ್ಮನ್ನು ನಮ್ಮ ಶತ್ರುಗಳಿಂದ ರಕ್ಷಿಸಿದನು.
    ಆತನ ಪ್ರೀತಿ ಶಾಶ್ವತವಾದದ್ದು.
25 ಆತನು ಪ್ರತಿಯೊಬ್ಬರಿಗೂ ಆಹಾರವನ್ನು ಕೊಡುವನು.
    ಆತನ ಪ್ರೀತಿ ಶಾಶ್ವತವಾದದ್ದು.
26 ಪರಲೋಕದ ದೇವರನ್ನು ಸ್ತುತಿಸಿರಿ!
    ಆತನ ಪ್ರೀತಿ ಶಾಶ್ವತವಾದದ್ದು.

1 ಕೊರಿಂಥದವರಿಗೆ 12

ಪವಿತ್ರಾತ್ಮನ ವರಗಳು

12 ಸಹೋದರ ಸಹೋದರಿಯರೇ, ಆತ್ಮಿಕ ವರಗಳ ಬಗ್ಗೆ ನೀವು ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ. ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.

ಅನೇಕ ರೀತಿಯ ಆತ್ಮಿಕ ವರಗಳಿವೆ. ಆದರೆ ಅವುಗಳೆಲ್ಲ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ. ಸೇವೆಮಾಡಲು ವಿವಿಧ ಮಾರ್ಗಗಳಿವೆ, ಆದರೆ ಅವುಗಳೆಲ್ಲಾ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ. ದೇವರು ಜನರಲ್ಲಿ ಮಾಡುವ ಕಾರ್ಯಗಳಿಗೂ ವಿವಿಧ ಮಾರ್ಗಗಳಿವೆ. ಆದರೆ ಅವುಗಳೆಲ್ಲಾ ಒಬ್ಬನೇ ದೇವರಿಂದ ಬಂದಂಥವುಗಳಾಗಿವೆ.

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ. ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ. ಒಬ್ಬನಿಗೆ ನಂಬಿಕೆಯನ್ನೂ ಮತ್ತೊಬ್ಬನಿಗೆ ಸ್ವಸ್ಥಪಡಿಸುವ ವರವನ್ನೂ ಕೊಡುತ್ತಾನೆ; 10 ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ. 11 ಪವಿತ್ರಾತ್ಮನು ಒಬ್ಬನೇ. ಆತನೇ ಎಲ್ಲಾ ವರಗಳನ್ನು ತನ್ನ ಚಿತ್ತಕ್ಕನುಸಾರವಾಗಿ ಪ್ರತಿಯೊಬ್ಬನಿಗೂ ಹಂಚಿಕೊಟ್ಟು ನಡೆಸುತ್ತಾನೆ.

ಕ್ರಿಸ್ತನ ದೇಹ

12 ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು. 13 ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.[a]

14 ದೇಹವು ಒಂದು ಅಂಗಕ್ಕಿಂತಲೂ ಹೆಚ್ಚು ಅಂಗಗಳನ್ನು ಪಡೆದಿದೆ. ಅದು ಅನೇಕ ಅಂಗಗಳನ್ನು ಪಡೆದಿದೆ. 15 ಪಾದವು, “ನಾನು ಕೈಯಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಪಾದವು ದೇಹದಿಂದ ಹೊರತಾಗಲಿಲ್ಲ. 16 ಕಿವಿಯು, “ನಾನು ಕಣ್ಣಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಕಿವಿಯು ದೇಹದಿಂದ ಹೊರತಾಗಲಿಲ್ಲ. 17 ಇಡೀ ದೇಹವೇ ಕಣ್ಣಾಗಿದ್ದರೆ, ಕೇಳಿಸಿಕೊಳ್ಳಲು ದೇಹಕ್ಕೆ ಸಾಧ್ಯವಿರುತ್ತಿರಲಿಲ್ಲ. ಇಡೀ ದೇಹವೇ ಕಿವಿಯಾಗಿದ್ದರೆ, ದೇಹವು ಯಾವುದರ ವಾಸನೆಯನ್ನೂ ತಿಳಿದುಕೊಳ್ಳಲಾಗುತ್ತಿರಲಿಲ್ಲ. 18-19 ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ. 20 ಆದ್ದರಿಂದ ಅಂಗಗಳು ಅನೇಕವಿದ್ದರೂ ದೇಹವು ಒಂದೇ.

21 ಕಣ್ಣು, “ನೀನು ನನಗೆ ಅವಶ್ಯವಿಲ್ಲ” ಎಂದು ಕೈಗೆ ಹೇಳಲಾರದು ಮತ್ತು ತಲೆಯು, “ನೀನು ನನಗೆ ಅವಶ್ಯವಿಲ್ಲ” ಎಂದು ಪಾದಕ್ಕೆ ಹೇಳಲಾರದು. 22 ಅಲ್ಲದೆ ದೇಹದಲ್ಲಿ ಬಲಹೀನವಾಗಿ ತೋರುವ ಅಂಗಗಳು ನಿಜವಾಗಿಯೂ ಬಹಳ ಅವಶ್ಯವಾಗಿವೆ. 23 ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ. 24 ಬಹು ಸುಂದರವಾದ ಅಂಗಗಳಿಗೆ ಇಂಥ ವಿಶೇಷ ಸಂರಕ್ಷಣೆಯ ಅಗತ್ಯವಿರುವುದಿಲ್ಲ. ಆದರೆ ದೇವರು ಅಂಗಗಳನ್ನು ಒಟ್ಟಾಗಿ ಸೇರಿಸಿದ್ದಾನೆ ಮತ್ತು ಕೊರತೆಯಲ್ಲಿರುವ ಅಂಗಗಳಿಗೆ ಹೆಚ್ಚಿನ ಮಾನ್ಯತೆಯನ್ನು ಕೊಟ್ಟಿದ್ದಾನೆ. 25 ನಮ್ಮ ದೇಹವು ವಿಭಜನೆಯಾಗದಂತೆ ಅಂಗಗಳು ಒಂದಕ್ಕೊಂದರ ಹಿತವನ್ನು ಸರಿಸಮನಾಗಿ ಗಮನಿಸುವಂತೆ ದೇವರು ಮಾಡಿದ್ದಾನೆ. 26 ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.

27 ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ. 28 ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ. 29 ಎಲ್ಲಾ ಜನರು ಅಪೊಸ್ತಲರುಗಳಲ್ಲ. ಎಲ್ಲಾ ಜನರು ಪ್ರವಾದಿಗಳಲ್ಲ. ಎಲ್ಲಾ ಜನರು ಉಪದೇಶಕರುಗಳಲ್ಲ. ಎಲ್ಲಾ ಜನರು ಅದ್ಭುತಕಾರ್ಯಗಳನ್ನು ಮಾಡುವುದಿಲ್ಲ. 30 ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಆ ಭಾಷೆಗಳನ್ನು ಅನುವಾದಿಸುವುದಿಲ್ಲ. 31 ಆದರೆ ನೀವು ಪವಿತ್ರಾತ್ಮನ ಇನ್ನೂ ಶ್ರೇಷ್ಠವಾದ ವರಗಳನ್ನು ಯಥಾರ್ಥವಾಗಿ ಅಪೇಕ್ಷಿಸತಕ್ಕದ್ದು. ಈಗ ನಾನು ನಿಮಗೆ ಎಲ್ಲಕ್ಕಿಂತಲೂ ಉತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International