Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಯೆಹೆಜ್ಕೇಲ 14-15

ವಿಗ್ರಹಾರಾಧಕರ ವಿರುದ್ಧ ಎಚ್ಚರಿಕೆ

14 ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು. ಆಗ ಯೆಹೋವನ ವಾಕ್ಯವು ನನಗೆ ಬಂತು. ಆತನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ. ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು. ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ

“ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ. ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು. ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ. ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು. 10 ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು. 11 ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತ್ವವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

ಜೆರುಸಲೇಮ್ ದಂಡಿಸಲ್ಪಡುವುದು

12 ಆಗ ಯೆಹೋವನ ನುಡಿ ನನಗೆ ಬಂತು. ಆತನು ಹೀಗೆ ಹೇಳಿದನು, 13 “ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ. 14 ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

15 ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ. 16 ನನ್ನ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

17 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು. 18 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

19 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ, 20 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

21 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು. 22 ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ. 23 ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಜೆರುಸಲೇಮಿನ ದ್ರಾಕ್ಷಾಲತೆಯು ಸುಡಲ್ಪಡುವುದು

15 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ, “ನರಪುತ್ರನೇ, ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ. ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಬಹುದೋ? ಇಲ್ಲ. ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ. ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಬೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ. “ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ. ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.

ಯಾಕೋಬನು 2

ಜನರೆಲ್ಲರನ್ನೂ ಪ್ರೀತಿಸಿ

ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ. ನಿಮ್ಮ ಸಭೆಗೆ ಒಬ್ಬನು ಬರುತ್ತಾನೆಂದು ನೆನೆಸಿರಿ. ಅವನು ಒಳ್ಳೆಯ ವಸ್ತ್ರಗಳನ್ನೂ ಬಂಗಾರದ ಉಂಗುರವನ್ನೂ ಧರಿಸಿರುತ್ತಾನೆ. ಅದೇ ಸಮಯಕ್ಕೆ ಕೊಳೆಯಾದ ಮತ್ತು ಹಳೆಯದಾದ ವಸ್ತ್ರಗಳನ್ನು ಧರಿಸಿರುವ ಒಬ್ಬ ಬಡವನೂ ಬರುತ್ತಾನೆ. ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ. ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.

ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ. ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ. ನಿಮ್ಮನ್ನು ತನ್ನವರನ್ನಾಗಿ ಮಾಡಿಕೊಂಡಿರುವ ಯೇಸುವಿನ ಶ್ರೇಷ್ಠವಾದ ಹೆಸರಿಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನು ಆಡುವವರು ಶ್ರೀಮಂತರೇ.

ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು”(A) ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ. ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.

10 ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು. 11 “ವ್ಯಭಿಚಾರ ಮಾಡಬಾರದು”(B) ಎಂದು ದೇವರು ಹೇಳಿದನು. “ಕೊಲ್ಲಬಾರದು”(C) ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.

12 ಜನರನ್ನು ಬಿಡುಗಡೆ ಮಾಡುವ ಧರ್ಮಶಾಸ್ತ್ರದಿಂದಲೇ ನಿಮಗೆ ತೀರ್ಪಾಗುವುದು. ನೀವು ಕೇಳುವ ಮತ್ತು ಮಾಡುವ ಪ್ರತಿಯೊಂದರಲ್ಲಿಯೂ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ. 13 ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.

ನಂಬಿಕೆ ಮತ್ತು ಉತ್ತಮ ಕಾರ್ಯಗಳು

14 ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ! 15 ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ಅಥವಾ ಸಹೋದರಿಯಾಗಿರುವವಳಿಗೆ ಬಟ್ಟೆಗಳು ಬೇಕಾಗಿರಬಹುದು ಅಥವಾ ತಿನ್ನಲು ಆಹಾರ ಬೇಕಾಗಿರಬಹುದು. 16 ಆದರೆ ನೀವು ಆ ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ. 17 ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ.

18 ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು. 19 ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.

20 ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ? 21 ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು. 22 ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು. 23 ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.”(D) ಅಬ್ರಹಾಮನನ್ನು “ದೇವರ ಸ್ನೇಹಿತ”(E) ನೆಂದು ಕರೆಯಲಾಯಿತು. 24 ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.

25 ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.[a]

26 ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International