Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
2 ರಾಜರುಗಳು 4:42-44

ಎಲೀಷನು ಪ್ರವಾದಿಗಳ ಗುಂಪಿಗೆ ಊಟ ಒದಗಿಸಿದನು

42 ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.

43 ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು.

ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಹೀಗೆನ್ನುವನು: ‘ಅವರು ತಿಂದರೂ ಆಹಾರವು ಉಳಿಯುತ್ತದೆ’” ಎಂದು ಹೇಳಿದನು.

44 ಆಗ ಎಲೀಷನ ಸೇವಕನು ಪ್ರವಾದಿಗಳ ಗುಂಪಿನ ಮುಂದೆ ಆಹಾರವನ್ನು ಇಟ್ಟನು. ಆ ಗುಂಪಿನ ಪ್ರವಾದಿಗಳು ಸಾಕಾಗುವಷ್ಟು ತಿಂದರೂ ಆಹಾರವು ಉಳಿದುಹೋಯಿತು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು.

ಕೀರ್ತನೆಗಳು 145:10-18

10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ.
    ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11 ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು.
    ನಿನ್ನ ಪರಾಕ್ರಮವನ್ನು ವರ್ಣಿಸುವರು.
12 ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು.
    ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.
13 ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ.
    ನೀನು ಎಂದೆಂದಿಗೂ ಆಳುವೆ.

14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ
    ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
15 ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ.
    ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.
16 ನೀನು ಕೈಯನ್ನು ತೆರೆದು
    ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.
17 ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ.
    ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.
18 ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ.
    ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.

ಎಫೆಸದವರಿಗೆ 3:14-21

ಕ್ರಿಸ್ತನ ಪ್ರೀತಿ

14 ಆದ್ದರಿಂದ ತಂದೆಯ ಮುಂದೆ ಮೊಣಕಾಲೂರಿ ಪ್ರಾರ್ಥಿಸುತ್ತೇನೆ. 15 ಭೂಪರಲೋಕಗಳಲ್ಲಿರುವ ಪ್ರತಿಯೊಂದು ಕುಟುಂಬವು ಆತನಿಂದ ತನ್ನ ನಿಜ ಹೆಸರನ್ನು ಪಡೆದುಕೊಳ್ಳುತ್ತದೆ. 16 ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ. 17 ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ. 18 ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. 19 ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.

20 ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು. 21 ಆತನಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರವಾಗಲಿ. ಆಮೆನ್.

ಯೋಹಾನ 6:1-21

ಐದು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ

(ಮತ್ತಾಯ 14:13-21; ಮಾರ್ಕ 6:30-44; ಲೂಕ 9:10-17)

ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು. ಆಗ ಯೇಸು ಬೆಟ್ಟವನ್ನು ಹತ್ತಿ ತನ್ನ ಶಿಷ್ಯರ ಸಂಗಡ ಕುಳಿತುಕೊಂಡನು. ಯೆಹೂದ್ಯರ ಪಸ್ಕಹಬ್ಬವೂ ಬಹು ಸಮೀಪವಾಗಿತ್ತು.

ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು. (ಫಿಲಿಪ್ಪನನ್ನು ಪರೀಕ್ಷಿಸುವುದಕ್ಕಾಗಿ ಆತನು ಈ ಪ್ರಶ್ನೆಯನ್ನು ಕೇಳಿದನು. ತಾನು ಮಾಡಲಿದ್ದ ಕಾರ್ಯ ಯೇಸುವಿಗೆ ಮೊದಲೇ ತಿಳಿದಿತ್ತು.)

ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ[a] ಬೇಕು” ಎಂದು ಉತ್ತರಕೊಟ್ಟನು.

ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ. ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.

10 ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಆ ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು. 11 ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.

12 ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು. 13 ಆದ್ದರಿಂದ ಶಿಷ್ಯರು ಉಳಿದುಹೋಗಿದ್ದ ತುಂಡುಗಳನ್ನು ಒಟ್ಟುಗೂಡಿಸಿದರು. ಜನರು ತಿನ್ನಲು ಆರಂಭಿಸಿದಾಗ ಕೇವಲ ಐದು ಜವೆಗೋದಿಯ ರೊಟ್ಟಿಗಳಿದ್ದವು. ಆದರೆ ಶಿಷ್ಯರು ಉಳಿದುಹೋದ ಆಹಾರದ ತುಂಡುಗಳನ್ನು ಒಟ್ಟುಗೂಡಿಸಿದಾಗ ಹನ್ನೆರಡು ದೊಡ್ಡ ಬುಟ್ಟಿಗಳು ತುಂಬಿಹೋದವು.

14 ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.

15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.

ನೀರಿನ ಮೇಲೆ ಕಾಲ್ನಡಿಗೆ

(ಮತ್ತಾಯ 14:22-27; ಮಾರ್ಕ 6:45-52)

16 ಆ ಸಾಯಂಕಾಲ ಯೇಸುವಿನ ಶಿಷ್ಯರು ಸರೋವರಕ್ಕೆ (ಗಲಿಲಾಯ) ಹೋದರು. 17 ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು. 18 ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು. 19 ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು. 20 ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು. 21 ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International