Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಆದಿಕಾಂಡ 2:18-24

ಮೊದಲನೆ ಸ್ತ್ರೀ

18 ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.

19 ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು. 20 ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ. 21 ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು. 22 ಆತನು ಮನುಷ್ಯನ ಪಕ್ಕೆಲುಬಿನಿಂದ ಸ್ತ್ರೀಯನ್ನು ಸೃಷ್ಟಿಸಿ ಆಕೆಯನ್ನು ಮನುಷ್ಯನ ಬಳಿಗೆ ಕರೆದುಕೊಂಡು ಬಂದನು. 23 ಆಗ ಅವನು ಆಕೆಯನ್ನು ನೋಡಿ,

“ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ.
    ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ.
    ಈಕೆಯ ದೇಹವು ನನ್ನ ದೇಹದಿಂದ ಬಂದಿದೆ.
ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು.
    ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.

24 ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.

ಕೀರ್ತನೆಗಳು 8

ರಚನೆಗಾರ: ದಾವೀದ.

ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು.
    ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.

ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ;
    ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.

ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ
    ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು?
    ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು?
ಮನುಷ್ಯರು ಎಷ್ಟರವರು?
    ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?

ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ.
    ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ.
    ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ.
    ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ
    ದೊರೆತನ ಮಾಡುವರು.
ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.

ಇಬ್ರಿಯರಿಗೆ 1:1-4

ದೇವರು ತನ್ನ ಮಗನ ಮೂಲಕ ಮಾತನಾಡಿದನು

ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು. ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು. ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು. ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.

ಇಬ್ರಿಯರಿಗೆ 2:5-12

ಜನರನ್ನು ರಕ್ಷಿಸಲು ಕ್ರಿಸ್ತನು ಜನರಂತೆಯೇ ಆದನು

ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಆ ಲೋಕದ ಕುರಿತಾಗಿಯೇ. ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ:

“ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು?
ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು?
    ಅವನು ಅಷ್ಟೊಂದು ಮುಖ್ಯನಾದವನೇ?
ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ.
    ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.
ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.”(A)

ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ. ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.

10 ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.

11 ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ. 12 ಯೇಸು ಹೇಳುತ್ತಾನೆ:

“ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ;
    ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.”(B)

ಮಾರ್ಕ 10:2-16

ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ಪರೀಕ್ಷಿಸಲು, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.

ಯೇಸು, “ಮೋಶೆ ನಿಮಗೆ ಏನು ಆಜ್ಞಾಪಿಸಿದ್ದಾನೆ?” ಎಂದು ಉತ್ತರಿಸಿದನು.

ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.[a]

ಯೇಸು, “ನಿಮ್ಮ ಮೊಂಡುತನದ ನಿಮಿತ್ತ ಮೋಶೆಯು ನಿಮಗೆ ಆ ಆಜ್ಞೆಯನ್ನು ಕೊಟ್ಟನು. ಆದರೆ ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ನಿರ್ಮಿಸಿದನು.’(A) ‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಮತ್ತು ಅವರಿಬ್ಬರು ಒಂದೇ ಶರೀರವಾಗುವರು.’(B) ಆದ್ದರಿಂದ ಅವರು ಇಬ್ಬರಲ್ಲ, ಒಬ್ಬರೇ. ಹೀಗಿರಲು ದೇವರು ಸೇರಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.

10 ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು. 11 ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ. 12 ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.

ಚಿಕ್ಕ ಮಕ್ಕಳಿಗೆ ಯೇಸುವಿನ ಆಶೀರ್ವಾದ

(ಮತ್ತಾಯ 19:13-15; ಲೂಕ 18:15-17)

13 ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು. 14 ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ. 15 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು. 16 ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International