Revised Common Lectionary (Complementary)
12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು.
ಆಗ ನಾವು ವಿವೇಕಿಗಳಾಗುವೆವು.
13 ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ.
ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.
14 ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು.
ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15 ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ.
ಈಗ ನಮ್ಮನ್ನು ಸಂತೋಷಗೊಳಿಸು.
16 ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ.
17 ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು.
ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ;
ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.
ದಶಾಜ್ಞೆಗಳು
5 ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ. 2 ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಯೆಹೋವ ದೇವರು ನಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿರುತ್ತಾನೆ. 3 ಯೆಹೋವನು ನಮ್ಮ ಪೂರ್ವಿಕರೊಂದಿಗೆ ಒಡಂಬಡಿಕೆ ಮಾಡದೆ ಈಗ ಇಲ್ಲಿ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ. 4 ಆ ಪರ್ವತದಲ್ಲಿ ಯೆಹೋವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಬೆಂಕಿಯೊಳಗಿಂದ ನಿಮ್ಮೊಂದಿಗೆ ಮಾತಾಡಿರುತ್ತಾನೆ. 5 ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.
6 “ಯೆಹೋವನು ಹೇಳಿದ್ದೇನೆಂದರೆ:
‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:
7 ‘ನೀವು ನನ್ನ ಹೊರತು ಬೇರೆ ಯಾವ ದೇವರುಗಳನ್ನೂ ಪೂಜಿಸಬಾರದು.
8 ‘ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು. 9 ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು. 10 ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರ ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.
11 ‘ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.
12 ‘ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು. 13 ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ. 14 ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ. 15 ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.
16 ‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.
17 ‘ಕೊಲೆ ಮಾಡಬಾರದು.
18 ‘ವ್ಯಭಿಚಾರ ಮಾಡಬಾರದು.
19 ‘ಕದಿಯಬಾರದು.
20 ‘ಇತರರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಬಾರದು.
21 ‘ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!’”
ನಾವು ದೇವರನ್ನು ಅನುಸರಿಸಲೇಬೇಕು
7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ,
“ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
8 ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.
ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.
9 ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ
ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು.
10 ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು.
‘ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ.
ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ’ ಎಂದು ನಾನು ಹೇಳಿದೆನು.
11 ‘ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ’
ಎಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.”(A)
12 ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ. 13 ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ. 14 ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ. 15 ಪವಿತ್ರ ಗ್ರಂಥವು ಹೇಳುವುದೇನೆಂದರೆ:
“ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.”(B)
16 ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ? 17 ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು. 18 ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ? 19 ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.
Kannada Holy Bible: Easy-to-Read Version. All rights reserved. © 1997 Bible League International