Revised Common Lectionary (Complementary)
4 ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು. 5 ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 6 ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.
7 ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು. 8 ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು. 9 ಆತನು ಸತ್ತ ಬಳಿಕ ಧನಿಕರೊಂದಿಗೂ ದುಷ್ಟರೊಂದಿಗೂ ಹೂಳಲ್ಪಟ್ಟನು. ಆತನು ಯಾವ ಅಪರಾಧವನ್ನೂ ಮಾಡಲಿಲ್ಲ; ಸುಳ್ಳಾಡಲಿಲ್ಲ. ಆದರೂ ಇವೆಲ್ಲವೂ ಆತನಿಗೆ ಸಂಭವಿಸಿದವು.
10 ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು. 11 ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು.
ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು. 12 ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
9 ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ.
ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.
10 ಯಾವ ಕೇಡೂ ನಿನಗೆ ಸಂಭವಿಸದು.
ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.
11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.
12 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು
ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
13 ಸಿಂಹಗಳ ಮೇಲೆಯೂ ಮತ್ತು
ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.
14 ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು;
ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು.
ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು;
ಅವರನ್ನು ತಪ್ಪಿಸಿ ಘನಪಡಿಸುವೆನು.
16 ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು;
ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”
5 ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು. 2 ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ. 3 ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.
4 ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು. 5 ಕ್ರಿಸ್ತನೂ ಇದೇ ರೀತಿ ನೇಮಿಸಲ್ಪಟ್ಟನು. ಆತನು ಪ್ರಭಾವದ ಪ್ರಧಾನಯಾಜಕನಾಗಿ ತನ್ನನ್ನು ತಾನೇ ಆರಿಸಿಕೊಳ್ಳಲಿಲ್ಲ. ಆದರೆ ದೇವರು ಆತನನ್ನು ಆರಿಸಿದನು. ದೇವರು ಕ್ರಿಸ್ತನಿಗೆ ಹೀಗೆ ಹೇಳಿದನು:
“ನೀನು ನನ್ನ ಮಗನು.
ಈ ದಿನ ನಾನು ನಿನ್ನ ತಂದೆಯಾದೆನು.”(A)
6 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ ದೇವರು ಹೀಗೆನ್ನುತ್ತಾನೆ:
“ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ
ಪ್ರಧಾನಯಾಜಕನಾಗಿರುವೆ.”(B)
7 ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು. 8 ಆತನು ದೇವರ ಮಗನಾಗಿದ್ದಾನೆ. ಆದರೂ ಹಿಂಸೆಗೊಳಗಾಗಿ, ತಾನು ಅನುಭವಿಸಿದ ಹಿಂಸೆಗಳಿಂದಲೇ ವಿಧೇಯನಾಗಿರುವುದನ್ನು ಕಲಿತುಕೊಂಡನು. 9 ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ. 10 ದೇವರು ಆತನನ್ನು ಮೆಲ್ಕಿಜೆದೇಕನಂತೆ ಪ್ರಧಾನ ಯಾಜಕನನ್ನಾಗಿ ಮಾಡಿದನು.
ಯಾಕೋಬ ಮತ್ತು ಯೋಹಾನರ ವಿಶೇಷ ಕೋರಿಕೆ
(ಮತ್ತಾಯ 20:20-28)
35 ನಂತರ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮ ಒಂದು ಕೋರಿಕೆಯನ್ನು ನೀನು ನಡೆಸಿಕೊಡಬೇಕು” ಎಂದರು.
36 ಯೇಸು, “ನಿಮ್ಮ ಯಾವ ಕೋರಿಕೆಯನ್ನು ನಡೆಸಿಕೊಡಬೇಕು?” ಎಂದು ಕೇಳಿದನು.
37 ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು.
38 ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.
39 ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು.
ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ. 40 ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಆ ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು.
41 ಉಳಿದ ಹತ್ತು ಜನ ಶಿಷ್ಯರು ಇದನ್ನು ಕೇಳಿ ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು. 42 ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ. 43 ಆದರೆ ನೀವು ಅವರಂತಾಗಬಾರದು. 44 ನಿಮ್ಮಲ್ಲಿ ಪ್ರಮುಖನಾಗಬೇಕೆಂದು ಬಯಸುವವನು ಸೇವಕನಂತೆ ಮತ್ತು ಗುಲಾಮನಂತೆ ನಿಮ್ಮೆಲ್ಲರ ಸೇವೆಮಾಡಬೇಕು. 45 ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International