Revised Common Lectionary (Complementary)
7 ಯೆಹೋವನು ಹೀಗೆಂದನು:
“ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ.
ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ.
ಸ್ತೋತ್ರಗೀತೆಗಳನ್ನು ಹಾಡಿರಿ.
‘ಯೆಹೋವನು ತನ್ನ ಜನರನ್ನು ರಕ್ಷಿಸಿದನು.
ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.
8 ನಾನು ಇಸ್ರೇಲರನ್ನು
ಉತ್ತರದ ದೇಶದಿಂದ ತರುವೆನು.
ನಾನು ಜಗತ್ತಿನ ದೂರದೂರದ ಸ್ಥಳಗಳಿಂದ
ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ.
ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು,
ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ.
ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.
9 ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು.
ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು.
ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು.
ಅವರು ಎಡವದಂತೆ ಸಮವಾದ ಮಾರ್ಗದಲ್ಲಿ
ನಡೆಸಿಕೊಂಡು ಬರುವೆನು.
ನಾನು ಇಸ್ರೇಲಿನ ತಂದೆ;
ಎಫ್ರಾಯೀಮ್ ನನ್ನ ಚೊಚ್ಚಲ ಮಗ.
ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
126 ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ
ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!
2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು.
“ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ”
ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.
3 ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.
4 ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ
ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.
5 ಅಳುತ್ತಾ ಬೀಜವನ್ನು ಬಿತ್ತುವವನು
ಹರ್ಷದಿಂದ ಕೊಯ್ಯುವನು.
6 ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು
ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!
23 ಇದಲ್ಲದೆ ಇತರ ಯಾಜಕರಲ್ಲಿ ಮರಣದ ಕಾರಣದಿಂದ ಒಬ್ಬನೇ ಶಾಶ್ವತವಾಗಿ ಯಾಜಕನಾಗಿ ಮುಂದುವರೆಯಲಾಗಲಿಲ್ಲ. ಆದ್ದರಿಂದ ಅಲ್ಲಿ ಅನೇಕ ಮಂದಿ ಯಾಜಕರಿದ್ದರು. 24 ಆದರೆ ಯೇಸು ಸದಾಕಾಲವೂ ಜೀವಿಸುವವನಾಗಿದ್ದಾನೆ. ಆತನು ತನ್ನ ಯಾಜಕ ಸೇವೆಯನ್ನು ಎಂದೆಂದಿಗೂ ನಿಲ್ಲಿಸುವುದಿಲ್ಲ. 25 ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.
26 ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ. 27 ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28 ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.
ಕುರುಡನಿಗೆ ದೃಷ್ಟಿದಾನ
(ಮತ್ತಾಯ 20:29-34; ಲೂಕ 18:35-43)
46 ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು. 47 ನಜರೇತಿನ ಯೇಸು ಆ ಮಾರ್ಗವಾಗಿ ಹೋಗುತ್ತಿದ್ದಾನೆಂದು ಅವನು ಕೇಳಿ, “ಯೇಸುವೇ, ದಾವೀದನ ಕುಮಾರನೇ, ದಯವಿಟ್ಟು ನನ್ನನ್ನು ಕರುಣಿಸು!” ಎಂದು ಗಟ್ಟಿಯಾಗಿ ಕೂಗಿದನು.
48 ಅನೇಕ ಜನರು ಆ ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.
49 ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು.
ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು. 50 ಆ ಕುರುಡನು ಕೂಡಲೇ ಎದ್ದುನಿಂತು ತನ್ನ ಹೊದಿಕೆಯನ್ನು ಅಲ್ಲಿಯೇ ಬಿಟ್ಟು ಯೇಸುವಿನ ಬಳಿಗೆ ಹೋದನು.
51 ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು.
ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.
52 ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.
Kannada Holy Bible: Easy-to-Read Version. All rights reserved. © 1997 Bible League International