Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 119:1-8

119 ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ
    ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.
ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ
    ವಿಧೇಯರಾಗುವವರು ಧನ್ಯರು.
ಅವರು ಕೆಟ್ಟದ್ದನ್ನು ಮಾಡದೆ
    ಆತನಿಗೆ ವಿಧೇಯರಾಗಿರುವರು.
ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ.
    ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.
ನಿನ್ನ ಕಟ್ಟಳೆಗಳಿಗೆ
    ನಾನು ಯಾವಾಗಲೂ ವಿಧೇಯನಾಗಿದ್ದರೆ,
ನಿನ್ನ ಆಜ್ಞೆಗಳನ್ನು ಕಲಿಯುವಾಗ
    ನನಗೆ ನಾಚಿಕೆಯಾಗದು.
ನಾನು ನಿನ್ನ ನ್ಯಾಯವನ್ನೂ
    ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು.
ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿದ್ದೇನೆ.
    ದಯವಿಟ್ಟು ನನ್ನನ್ನು ಕೈಬಿಡಬೇಡ!

ಅರಣ್ಯಕಾಂಡ 9:9-14

ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 10 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು. 11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು. 12 ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಆ ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. 13 ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.

14 “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”

ಲೂಕ 10:25-37

ಒಳ್ಳೆಯ ಸಮಾರ್ಯದವನ ಸಾಮ್ಯ

25 ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.

26 ಯೇಸು ಅವನಿಗೆ, “ಧರ್ಮಶಾಸ್ತ್ರದಲ್ಲಿ ಇದರ ಕುರಿತು ಏನು ಬರೆದಿದೆ?” ಎಂದು ಕೇಳಿದನು.

27 ಅದಕ್ಕೆ ಅವನು, “‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’(A) ಮತ್ತು ‘ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು’(B) ಎಂದು ಬರೆದಿದೆ” ಎಂಬುದಾಗಿ ಹೇಳಿದನು.

28 ಯೇಸು, “ನಿನ್ನ ಉತ್ತರ ಸರಿಯಾಗಿದೆ. ನೀನು ಹಾಗೆಯೇ ಮಾಡು, ಆಗ ನಿನಗೆ ನಿತ್ಯಜೀವ ದೊರೆಯುವುದು” ಅಂದನು.

29 ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.

30 ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.

31 “ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು. 32 ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.

33 “ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು. 34 ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು. 35 ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”

36 ಯೇಸು ಅವನಿಗೆ, “ಈ ಮೂವರಲ್ಲಿ (ಯಾಜಕ, ಲೇವಿ ಮತ್ತು ಸಮಾರ್ಯದವನು) ಯಾವನು ದರೋಡೆಗಾರರಿಂದ ಗಾಯಗೊಂಡಿದ್ದ ಮನುಷ್ಯನಿಗೆ ಪ್ರೀತಿ ತೋರಿಸಿದನು?” ಎಂದು ಕೇಳಿದನು.

37 ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು.

ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ[a] ಹಾಗೆಯೇ ಮಾಡು!” ಎಂದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International