Revised Common Lectionary (Complementary)
8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ
ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.
9 ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ.
ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.
14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ
ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
15 ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ.
ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.
16 ನೀನು ಕೈಯನ್ನು ತೆರೆದು
ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.
17 ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ.
ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.
18 ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ.
ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.
19 ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು.
ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.
20 ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು,
ದುಷ್ಟರನ್ನಾದರೋ ಆತನು ನಾಶಮಾಡುವನು.
21 ನಾನು ಯೆಹೋವನನ್ನು ಕೊಂಡಾಡುತ್ತೇನೆ!
ಎಲ್ಲಾ ಜೀವಿಗಳು ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ!
ಯೆಹೋವನೇ ದೇವರು
44 “ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವುದನ್ನು ಕೇಳು. 2 ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.
3 “ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು. 4 ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.
5 “ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.”
ಪ್ರಾರ್ಥನೆಯ ಪ್ರತಿಫಲ
(ಲೂಕ 11:9-13)
7 “ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು. 8 ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.
9 “ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೋ? 10 ಮೀನನ್ನು ಕೇಳಿದರೆ, ಹಾವನ್ನು ಕೊಡುವಿರೋ? 11 ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.
Kannada Holy Bible: Easy-to-Read Version. All rights reserved. © 1997 Bible League International