Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 78:1-8

ರಚನೆಗಾರ: ಆಸಾಫ.

78 ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ;
    ನನ್ನ ನುಡಿಗಳನ್ನು ಲಾಲಿಸಿರಿ.
ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು;
    ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು.
ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ.
    ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು.
ನಾವು ಅವುಗಳನ್ನು ಮರೆಯುವುದೇ ಇಲ್ಲ.
    ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು.
ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ
    ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.
ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು.
    ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
    ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು.
    ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.
ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು.
    ಹೀಗೆ ಜನರು ಕೊನೆಯ ತಲೆಮಾರಿನವರೆಗೂ ಧರ್ಮಶಾಸ್ತ್ರವನ್ನು ತಿಳಿದಿರುವರು.
ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು.
    ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ.
    ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.
ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ,
    ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ.
ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ.
    ಅವರು ಮೊಂಡರಾಗಿದ್ದರು.
    ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.

ಕೀರ್ತನೆಗಳು 78:17-29

17 ಆದರೂ ಅವರು ಅರಣ್ಯದಲ್ಲಿ
    ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು.
18 ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು
    ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು.
19 ಅವರು ಆತನಿಗೆ ವಿರೋಧವಾಗಿ ಮಾತಾಡಿ,
    “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ?
20 ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ!
    ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು.
21 ಆ ಜನರು ಹೇಳಿದ್ದನ್ನು ಕೇಳಿ
    ಯೆಹೋವನು ಕೋಪಗೊಂಡನು.
ಆತನು ಯಾಕೋಬ್ಯರ ಮೇಲೆಯೂ
    ಇಸ್ರೇಲರ ಮೇಲೆಯೂ ಕೋಪಗೊಂಡನು.
22     ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ.
ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ.
23 ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು,
    ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು.
24 ಆಕಾಶದ ದ್ವಾರಗಳು ತೆರೆದು
    ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು.
25 ಜನರು ದೇವದೂತರ ಆಹಾರವನ್ನು ತಿಂದರು.
    ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು.
26 ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು.
    ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.
27 ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ
    ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು.
28 ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ,
    ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು.
29 ಅವರಿಗೆ ತಿನ್ನಲು ಹೇರಳವಾಗಿತ್ತು.
    ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು.

ಧರ್ಮೋಪದೇಶಕಾಂಡ 8:1-10

ದೇವರಾದ ಯೆಹೋವನನ್ನು ಸ್ಮರಿಸಿರಿ

“ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ. ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು. ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು. ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದಿಕೊಳ್ಳಲಿಲ್ಲ. ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.

“ಆತನ ಆಜ್ಞೆಗಳಿಗೆ ವಿಧೇಯರಾಗಿರಿ. ಆತನನ್ನು ಅನುಸರಿಸಿ ಗೌರವಿಸಿರಿ. ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು. ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು. ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ. 10 ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.

ರೋಮ್ನಗರದವರಿಗೆ 1:8-15

ಕೃತಜ್ಞತಾ ಪ್ರಾರ್ಥನೆ

ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ. 9-10 ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ. 11 ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ. 12 ಅಂದರೆ ನಾವು ಹೊಂದಿರುವ ನಂಬಿಕೆಯಿಂದ ನಾವು ಒಬ್ಬರಿಗೊಬ್ಬರು ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮ ನಂಬಿಕೆ ನನಗೆ ಸಹಾಯ ಮಾಡುತ್ತದೆ ಮತ್ತು ನನ್ನ ನಂಬಿಕೆ ನಿಮಗೆ ಸಹಾಯ ಮಾಡುತ್ತದೆ.

13 ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.

14 ನಾನು ಎಲ್ಲಾ ಜನರ ಅಂದರೆ ಗ್ರೀಕರ ಮತ್ತು ಗ್ರೀಕರಲ್ಲದವರ, ಹಾಗೂ ಜ್ಞಾನಿಗಳ ಮತ್ತು ಮೂಢರ ಸೇವೆ ಮಾಡಲೇಬೇಕು. 15 ಆದಕಾರಣ ರೋಮಿನಲ್ಲಿರುವ ನಿಮಗೆ ಸುವಾರ್ತೆಯನ್ನು ತಿಳಿಸಲು ಬಹಳವಾಗಿ ಆಶಿಸುತ್ತೇನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International