Revised Common Lectionary (Complementary)
ಎಲ್ಲಾ ಜನಾಂಗದವರು ಯೆಹೋವನನ್ನು ಅನುಸರಿಸುವರು
56 ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.
6 “ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು. 7 ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.” 8 ಇದು ನನ್ನ ಒಡೆಯನಾದ ಯೆಹೋವನ ಮಾತುಗಳು.
ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.
ಸ್ತುತಿಗೀತೆ.
67 ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು.
ಪ್ರಸನ್ನಮುಖದಿಂದ ನಮ್ಮನ್ನು ನೋಡು.
2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ.
ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.
3 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ!
ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ.
ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ;
ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
5 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ!
ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
6 ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು.
ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.
7 ಆತನು ನಮ್ಮನ್ನು ಆಶೀರ್ವದಿಸಲಿ.
ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.
ದೇವರು ತನ್ನ ಜನರನ್ನು ಮರೆತಿಲ್ಲ
11 ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ. 2 ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.
29 ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ. 30 ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು. 31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು. 32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.
10 ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ. 11 ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.
12 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.
13 ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು. 14 ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.
15 ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.
16 ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ? 17 ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ. 18 ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. 19 ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ. 20 ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.
ಯೆಹೂದ್ಯಳಲ್ಲದ ಸ್ತ್ರೀಗೆ ಯೇಸು ಮಾಡಿದ ಸಹಾಯ
(ಮಾರ್ಕ 7:24-30)
21 ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್‌ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. 22 ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
23 ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.
24 ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.
25 ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.
26 ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
27 ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.
28 ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
Kannada Holy Bible: Easy-to-Read Version. All rights reserved. © 1997 Bible League International