Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 34

ದಾವೀದನು ಹುಚ್ಚನಂತೆ ವರ್ತಿಸಿ, ಅಬೀಮೆಲೆಕನಿಂದ ಹೊರಡಿಸಲ್ಪಟ್ಟಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.

[a]34 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು.
    ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.
ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು
    ಕೇಳಿ ಸಂತೋಷಪಡಿರಿ.
ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ.
    ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.
ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು.
    ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.
ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು.[b]
    ಅವರಿಗೆ ಆಶಾಭಂಗವಾಗದು.
ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು
    ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.
ಯೆಹೋವನ ಭಕ್ತರ ಸುತ್ತಲೂ ಆತನ ದೂತನು
    ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.
ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ.
    ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.
ಯೆಹೋವನ ಜನರೇ, ಆತನನ್ನು ಆರಾಧಿಸಿರಿ.
    ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.
10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು.
    ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.
11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;
    ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.
12 ದೀರ್ಘಾಯುಷ್ಯವು ಬೇಕೋ?
    ಬಹುಕಾಲ ಸುಖವನ್ನು ಅನುಭವಿಸಬೇಕೋ?
13 ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ.
    ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.
14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ.
    ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.
15 ಯೆಹೋವನು ನೀತಿವಂತರನ್ನು ಕಾಪಾಡುವನು.
    ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.
16 ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು.
    ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.

17 ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು;
    ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.
18 ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ;
    ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.
19 ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ
    ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.
20 ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು.
    ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21 ದುಷ್ಟರಾದರೋ ಆಪತ್ತುಗಳಿಂದ ಸಾಯುವರು.
    ನೀತಿವಂತರ ವೈರಿಗಳು ನಾಶವಾಗುವರು.
22 ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು.
    ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.

ವಿಮೋಚನಕಾಂಡ 19:7-20

ಆದ್ದರಿಂದ ಮೋಶೆ ಬೆಟ್ಟದಿಂದಿಳಿದು ಬಂದು ಜನರ ಹಿರಿಯರನ್ನು ಒಟ್ಟಾಗಿ ಕರೆಸಿದನು. ಯೆಹೋವನು ಹೇಳಬೇಕೆಂದು ಆಜ್ಞಾಪಿಸಿದ ಸಂಗತಿಗಳನ್ನೆಲ್ಲಾ ಮೋಶೆಯು ಹಿರಿಯರಿಗೆ ಹೇಳಿದನು. ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು.

ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು. ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು.

ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು 11 ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು. 12-13 ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.

14 ಮೋಶೆ ಬೆಟ್ಟದಿಂದಿಳಿದು ಹೋದನು. ಅವನು ಜನರ ಬಳಿಗೆ ಹೋಗಿ ವಿಶೇಷ ಸಂದರ್ಶನಕ್ಕಾಗಿ ಅವರನ್ನು ಸಿದ್ಧ ಮಾಡಿದನು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡರು.

15 ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.

16 ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು. 17 ಆಗ ಮೋಶೆ ದೇವರನ್ನು ಸಂಧಿಸುವುದಕ್ಕಾಗಿ ಜನರನ್ನು ಪಾಳೆಯದಿಂದ ಹೊರಗೆ ನಡಿಸಿ, ಬೆಟ್ಟದ ಬಳಿಗೆ ಕರೆದುಕೊಂಡು ಬಂದನು. 18 ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು. 19 ತುತ್ತೂರಿಯ ಧ್ವನಿ ಹೆಚ್ಚುಹೆಚ್ಚಾಯಿತು. ಮೋಶೆಯು ದೇವರೊಂದಿಗೆ ಮಾತಾಡಿದಾಗಲೆಲ್ಲಾ ದೇವರು ಗುಡುಗಿನಂತಿದ್ದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.

20 ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.

ಯೂದನು 17-25

ಎಚ್ಚರಿಕೆ ಮತ್ತು ಮಾಡಬೇಕಾದ ಕಾರ್ಯಗಳು

17 ಪ್ರಿಯ ಸ್ನೇಹಿತರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಪೊಸ್ತಲರು ಮುಂಚೆ ಏನು ಹೇಳಿದರೆಂಬುದನ್ನು ನೆನಪು ಮಾಡಿಕೊಳ್ಳಿ. 18 ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ. 19 ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.

20 ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ. 21 ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.

22 ಸಂದೇಹವಿರುವ ಜನರಿಗೆ ಕರುಣೆ ತೋರಿ. 23 ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.

ದೇವರಿಗೆ ಸ್ತೋತ್ರ ಮಾಡಿರಿ

24 ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ. 25 ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International